
ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡದಂತೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸೂಚನೆ ನೀಡಿದ್ದು, ಅವರ ಸೂಚನೆಗಳನ್ನು ಪಾಲಿಸುತ್ತಿದ್ದೇನೆಂದು ಉಪ ಮುಖ್ಯಮಂತ್ರಿ ಡಿಕೆ. ಶಿವಕುಮಾರ್ ಅವರು ಸೋಮವಾರ ಹೇಳಿದರು.
ಡಿಕೆ.ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂಬ ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಅವರ ಹೇಳಿಕೆಯ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಮೊಯ್ಲಿ ತಮ್ಮ ವೈಯಕ್ತಿಕ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ನಾನು ಅದರ ಬಗ್ಗೆ ಮಾತನಾಡುವುದಿಲ್ಲ, ಅದರ ಅಗತ್ಯವೂ ಇಲ್ಲ ಎಂದು ಹೇಳಿದರು.
ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡದಂತೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸೂಚನೆ ನೀಡಿದ್ದು, ನಾನು ಅವರ ಮಾತಿಗೆ ಬದ್ಧನಾಗಿದ್ದೇನೆಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿ, ವೀರಪ್ಪ ಮೊಯ್ಲಿ ಅಥವಾ ಬೇರೆಯವರು ಏನು ಹೇಳುತ್ತಾರೆ ಎಂಬುದು ಮುಖ್ಯ ಅಲ್ಲ. ಹೈಕಮಾಂಡ್ ಏನು ಹೇಳುತ್ತದೆಯೋ ಅದು ಮುಖ್ಯ. ಬೇರೆಯವರು ಮಾತನಾಡಿದರೆ ನಾನೇನು ಮಾಡಲಾಗುತ್ತದೆ? ನಾನು ಹೈಕಮಾಂಡ್ ನಿರ್ದೇಶನದಂತೆ ಹೋಗುತ್ತೇನೆ. ಅವರ ತೀರ್ಮಾನವೇ ನಮ್ಮಲ್ಲಿ ಅಂತಿಮ. ಆ ತೀರ್ಮಾನಕ್ಕೆ ನಾನು ಬದ್ಧ ಎಂದಷ್ಟೇ ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಪ್ರತಿಕ್ರಿಯಿಸಿ, ವೀರಪ್ಪ ಮೊಯ್ಲಿ ಮತ್ತು ಕಾಂಗ್ರೆಸ್‌ನ ಹಲವು ಶಾಸಕರು ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವ ಕುರಿತು ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಗಾದಿಗೆ ಪೈಪೋಟಿ ನಡೆಯುತ್ತಿದ್ದು, ಶಾಸಕರು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರ ಪರ– ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಬರುವ ದಿನಗಳಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯುವುದರಲ್ಲಿ ಸಂದೇಹವೇ ಇಲ್ಲ ಎಂದು ಹೇಳಿದರು.
ಉಡುಪಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕರ್ನಾಟಕ ಮಾಜಿ ಸಿಎಂ ವೀರಪ್ಪ ಮೊಯ್ಲಿಯವರು, ಡಿಕೆ ಶಿವಕುಮಾರ್ ಸದ್ಯದಲ್ಲೇ ಮುಖ್ಯಮಂತ್ರಿ ಆಗಬೇಕು. ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷ ಸಂಕಷ್ಟದಲ್ಲಿರುವಾಗ ಸಂಚಲನ ಮೂಡಿಸಿದ್ದಾರೆ. ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಹೋರಾಟ ಮಾಡಿದ್ದು, ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಯಾರು ಕೂಡ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ. ಇದು ತೀರ್ಮಾನ ಆಗಿರುವ ವಿಷಯ. ಜನರ ಮನಸ್ಸಿನಲ್ಲಿ ತೀರ್ಮಾನವಾಗಿದೆ. ಕೋಟಿ ಕೋಟಿ ಪ್ರಯತ್ನ ಮಾಡಿದರೂ ಮುಖ್ಯಮಂತ್ರಿ ಹುದ್ದೆ ತಪ್ಪಿಸಲು ಸಾಧ್ಯವಿಲ್ಲ ಅನ್ನೋದು ಶತಸಿದ್ಧ ಎಂದು ಹೇಳಿದ್ದರು. ಈ ಹೇಳಿಕೆ ಕೈ ಪಾಳಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.
Advertisement