
ಬೆಂಗಳೂರು: ಇದು ಅಭಿವೃದ್ಧಿ ಶೂನ್ಯ ಸರ್ಕಾರ ಎಂದು ಆಡಳಿತ ಪಕ್ಷ ಸೇರಿದಂತೆ ಎಲ್ಲರಿಗೂ ತಿಳಿದಿದೆ. ಆದರೆ ಎಲ್ಲದರಲ್ಲೂ ಅಭಿವೃದ್ಧಿಯಾಗುತ್ತಿದೆ ಎಂದು ರಾಜ್ಯಪಾಲರ ಮೂಲಕ ಪ್ರಸ್ತಾಪ ಮಾಡಿದ್ದಾರೆ. ಕೇವಲ ಸುಳ್ಳುಗಳನ್ನು ಪಟ್ಟಿ ಮಾಡಿ ರಾಜ್ಯಪಾಲರ ಬಾಯಿಯಲ್ಲಿ ಹೇಳಿಸಿದ್ದಾರೆಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.
ಸೋಮವಾರ ವಿಧಾನಸೌಧದಲ್ಲಿ ವಿಧಾನಮಂಡಲದ ಉಭಯ ಸದನಗಳನ್ನುದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ.ವಿಜಯೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದರು.
ಅಭಿವೃದ್ಧಿ ವಿಷಯದಲ್ಲಿ ಈ ಸರಕಾರದ ನಟ್ ಮತ್ತು ಬೋಲ್ಟ್ ಲೂಸ್ ಆಗಿದೆ. ಇದು ರಾಜ್ಯಪಾಲರ ಭಾಷಣದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಹೇಳಿದರು.
ಒಂದು ಕಡೆ ಹೈನುಗಾರಿಕೆಗೆ ಪ್ರೋತ್ಸಾಹಧನದ ಪ್ರಸ್ತಾಪ ಮಾಡಿದ್ದಾರೆ. ಸಾವಿರಾರು ಕೋಟಿ ರೂ. ಹಳೆಯ ಪ್ರೋತ್ಸಾಹ ಧನ ಹಾಗೇ ಬಾಕಿ ಉಳಿಸಿಕೊಂಡಿದ್ದಾರೆ. ಪ್ರಾದೇಶಿಕ ಅಸಮಾನತೆ ಹೋಗಲಾಡಿಸಲು 90 ಸಾವಿರ ಕೋಟಿ ರೂ. ಖರ್ಚು ಮಾಡುವುದಾಗಿ ಹೇಳಿದ್ದಾರೆ. ಕಳೆದೆರಡು ವರ್ಷಗಳಲ್ಲಿ ಎಷ್ಟು ಮೀಸಲಿಟ್ಟಿದ್ದಾರೆ? ಎಷ್ಟು ಖರ್ಚಾಗಿದೆ ಎಂಬುದನ್ನು ಸ್ಪಷ್ಟಪಡಿಸಲಿ ಆಗ್ರಹಿಸಿದರು.
ರಾಜ್ಯಪಾಲರ ಭಾಷಣ ಕೇಳಿಸಿಕೊಂಡರೆ ರಾಜ್ಯಪಾಲರ ಸಮಯವನ್ನು ಕೂಡ ಈ ಸರ್ಕಾರ ವ್ಯರ್ಥ ಮಾಡಿದೆ. ಅಭಿವೃದ್ಧಿಯ ವೇಗವನ್ನು ಚುರುಕುಗೊಳಿಸುವುದರಲ್ಲಿ ಮತ್ತು ಸರಕಾರದ ಹಣಕಾಸಿನ ವ್ಯವಸ್ಥೆಯನ್ನು ಇನ್ನಷ್ಟು ಸದೃಢಗೊಳಿಸುವಲ್ಲಿ ಯಶಸ್ವಿಯಾಗಿದೆ ಎಂಬ ಹಸಿಸುಳ್ಳನ್ನು ಈ ಕಾಂಗ್ರೆಸ್ ಸರಕಾರವು ರಾಜ್ಯಪಾಲರ ಬಾಯಲ್ಲಿ ಹೇಳಿಸಿದೆ ಎಂದು ಕಿಡಿಕಾರಿದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮಾತನಾಡಿ, ಕರ್ನಾಟಕದ ಇತಿಹಾಸದಲ್ಲಿ ಅತ್ಯಂತ ಕಳಪೆ ಸಾಧನೆ ಮಾಡಿದ ಸರ್ಕಾರವಿದು. ಆದರೆ, ರಾಜ್ಯಪಾಲರ ಕೈಯಲ್ಲಿ ತಾವೇನೋ ಚಾಂಪಿಯನ್ ಎಂಬಂತೆ ಹೇಳಿಕೊಂಡಿದ್ದಾರೆ. ಇದಕ್ಕೆ ಕಾಂಗ್ರೆಸ್ ಸರಕಾರಕ್ಕೆ ನಾಚಿಕೆ ಆಗಬೇಕು ಎಂದು ನುಡಿದರು.
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಒಂದು ರೀತಿಯ ಪಾಪರ್ ಚೀಟಿ ಎತ್ತಿಕೊಂಡ ಈ ಸರಕಾರವು ಕೇವಲ ಸುಳ್ಳುಗಳನ್ನು ಪಟ್ಟಿ ಮಾಡಿ ಗೌರವಾನ್ವಿತ ರಾಜ್ಯಪಾಲರ ಕಡೆಯಿಂದ ಹೇಳಿಸಿದೆ ಎಂದು ಆಕ್ಷೇಪಿಸಿದರು.
ಇದಕ್ಕೂ ಮುನ್ನ, ಬಿಜೆಪಿ ಸದಸ್ಯರು ರಾಜಭವನದಿಂದ ವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು, ರಾಜ್ಯಪಾಲರ ಅಧಿಕಾರವನ್ನು ಮೊಟಕುಗೊಳಿಸಲು ಪ್ರಯತ್ನಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಜೆಡಿಎಸ್ ಸದಸ್ಯರು ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಹೈಕೋರ್ಟ್ ರಾಜ್ಯಪಾಲರ ಅಧಿಕಾರವನ್ನು ಎತ್ತಿಹಿಡಿದಿದ್ದರೂ, ಕಾಂಗ್ರೆಸ್ ಸರ್ಕಾರವು ರಾಜ್ಯಪಾಲರ ಅಧಿಕಾರವನ್ನು ಮೊಟಕುಗೊಳಿಸಲು ಮತ್ತು ಸಂವಿಧಾನಕಕೆ ಕಪ್ಪು ಚುಕ್ಕೆ ತರಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.
Advertisement