

ಹಾವೇರಿ: ಒಂದು ವೇಳೆ ಹೈಕಮಾಂಡ್ ನಿರ್ಧರಿಸಿದರೆ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ನಾನು ಸಿದ್ಧನಿದ್ದೇನೆ. ಸಚಿವ ಸ್ಥಾನ ತ್ಯಾಗಕ್ಕೂ ಸಿದ್ಧನಾಗಿದ್ದೇನೆ. ಇದ್ಯಾವುದೂ ಇಲ್ಲವೆಂದರೆ ಕೇವಲ ಕಾರ್ಯಕರ್ತನಾಗಿ ಪಕ್ಷದ ಕೆಲಸ ಮಾಡಲು ಸಿದ್ಧ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ನ.26ರಂದು ಸಿದ್ಧರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ, ಡಿಸಿಎಂ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ಧಾರೆ, ಸತೀಶ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಾಗಲಿದ್ದಾರೆ ಎನ್ನುವುದು ಕೇವಲ ವದಂತಿ ಹೊರತು ವಾಸ್ತವ ಸಂಗತಿಗಳಲ್ಲ ಎಂದರು.
2028ರವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಅವರ ನಂತರ ಪಕ್ಷಕ್ಕಾಗಿ ದುಡಿದಿರುವ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ನೋಡಲು ಬಯಸುತ್ತೇವೆ ಎಂದು ಸಚಿವ ಜಮೀರ್ ತಿಳಿಸಿದರು.
ಡಿ.ಕೆ.ಶಿವಕುಮಾರ್ ಪಕ್ಷಕ್ಕಾಗಿ ದುಡಿದಿದ್ದಾರೆ. ಅವರು ಮುಖ್ಯಮಂತ್ರಿಯಾಗಬೇಕು ಎಂಬುದು ನಮ್ಮ ಬಯಕೆ. ಪಕ್ಷಕ್ಕೆ ದುಡಿದವರು ಮುಖ್ಯಮಂತ್ರಿಯಾಗಬೇಕು ಎಂದು ಬಯಸುವುದರಲ್ಲಿ ತಪ್ಪಿಲ್ಲ. ದಲಿತ ಮುಖ್ಯಮಂತ್ರಿಯಾಗಬೇಕು ಎಂಬ ಆಸೆಯೂ ಇದೆ ಎಂದರು.
Advertisement