

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಣಗಳ ನಡುವಣ ಅಧಿಕಾರ ಹಂಚಿಕೆ ಕುರಿತ ಚರ್ಚೆಗಳು ತೀವ್ರಗೊಂಡಿದ್ದು, ದೆಹಲಿಯಲ್ಲಿ ಡಿಕೆ ಶಿವಕುಮಾರ್ ಆಪ್ತ ಶಾಸಕರ ತಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರೆ, ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಆಪ್ತ ಸಚಿವರು ಮತ್ತು ಶಾಸಕರು ಗೃಹ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ನಿನ್ನೆ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ರಾತ್ರಿ ನಡೆದ ಡಿನ್ನರ್ ಮೀಟಿಂಗ್ನಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ, ಸಚಿವರಾದ ಎಚ್.ಸಿ. ಮಹದೇವಪ್ಪ, ದಿನೇಶ್ ಗುಂಡೂರಾವ್, ಕೆ ಹೆಚ್ ಮುನಿಯಪ್ಪ, ವೆಂಕಟೇಶ್, ಮಾಜಿ ಸಚಿವ ರಾಜಣ್ಣ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
ಇಂದು ಬೆಂಗಳೂರಿಗೆ ಮಲ್ಲಿಕಾರ್ಜುನ ಖರ್ಗೆ
ಇವೆಲ್ಲ ಬೆಳವಣಿಗೆಗಳ ನಡುವೆ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಬರಲಿದ್ದು, ರಾಜ್ಯ ಸರ್ಕಾರದಲ್ಲಿ ಅಧಿಕಾರ ಹಂಚಿಕೆ, ರಾಜಕೀಯ ಬಗ್ಗೆ ಕುತೂಹಲ ಮೂಡಿಸಿದೆ.
ಡಿ ಕೆ ಶಿವಕುಮಾರ್ ಮಾರ್ಮಿಕ ಪೋಸ್ಟ್
ಇಂದು ಬೆಳಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿರುವ ಡಿ ಕೆ ಶಿವಕುಮಾರ್, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ನಿಮ್ಮ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ. ಎಲ್ಲಿ ಶ್ರಮವಿದೆಯೋ ಅಲ್ಲಿ ಫಲವಿದೆ, ಎಲ್ಲಿ ಭಕ್ತಿ ಇದೆಯೋ ಅಲ್ಲಿ ಭಗವಂತ ಇದ್ದಾನೆ. ಈ ಹಿಂದೆಯೂ ಕಾಂಗ್ರೆಸ್ ನಲ್ಲಿ ಸಂಘಟನೆಗೆ ದುಡಿದ ಕಾರ್ಯಕರ್ತರಿಗೆ ಅಧಿಕಾರ ಕೊಟ್ಟಿದ್ದೇವೆ.
ಅನೇಕ ನಿಗಮ ಮಂಡಳಿಗಳ ನಿರ್ದೇಶಕರ ಪಟ್ಟಿ ಸಿದ್ದವಾಗಿದ್ದು, ಮರುಪರಿಶೀಲನೆ ಮಾಡಿ ಬ್ಲಾಕ್ ಅಧ್ಯಕ್ಷರಿಗೆ ಅಧಿಕಾರ ನೀಡಬೇಕಾಗಿದೆ. ಕಾರ್ಯಕರ್ತರಿಗೆ ಅಧಿಕಾರ ನೀಡಿರುವುದು ಕಾಂಗ್ರೆಸ್ ನಲ್ಲಿ ಮಾತ್ರ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
Advertisement