

ಬೆಂಗಳೂರು: ಕಾಂಗ್ರೆಸ್ ಸರ್ಕಾರ ನಿನ್ನೆ ನವೆಂಬರ್ 20ಕ್ಕೆ ತನ್ನ ಅಧಿಕಾರಾವಧಿಯ ಅರ್ಧ ಹಂತವನ್ನು ತಲುಪುತ್ತಿದ್ದಂತೆ, ಮುಂಬರುವ ನಾಯಕತ್ವ ಬದಲಾವಣೆ ಮತ್ತು ಸಂಭಾವ್ಯ ಸಚಿವ ಸಂಪುಟ ಪುನಾರಚನೆ ಪಕ್ಷವನ್ನು ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದಲ್ಲಿ ಇಕ್ಕಟ್ಟಿಗೆ ಸಿಲುಕಿಸಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುದ್ದೆಯಲ್ಲಿ ಮುಂದುವರಿಯುವುದಾಗಿ ಮತ್ತು ಮುಂದಿನ ರಾಜ್ಯ ಬಜೆಟ್ ಮಂಡಿಸುವುದಾಗಿ ಪುನರುಚ್ಚರಿಸುತ್ತಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು 2023 ರಲ್ಲಿ ಪಕ್ಷ ಅಧಿಕಾರಕ್ಕೆ ಬಂದಾಗ ಮುಖ್ಯಮಂತ್ರಿ ಹುದ್ದೆ ಬದಲಾವಣೆಯ ಬಗ್ಗೆ ಮಾಡಿಕೊಂಡ ಒಪ್ಪಂದದ ಬಗ್ಗೆ ಹೈಕಮಾಂಡ್ ಗೆ ಪರೋಕ್ಷವಾಗಿ ನೆನಪಿಸುತ್ತಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ತ್ಯಾಗ ಮಾಡುವ ಡಿಕೆ ಶಿವಕುಮಾರ್ ಅವರ ಹೇಳಿಕೆಯು ನಾಯಕತ್ವದ ಸಮಸ್ಯೆ ಇತ್ಯರ್ಥವಾದರೆ ಅವರು ಬಿಟ್ಟುಕೊಡಲು ಸಿದ್ಧರಿದ್ದಾರೆ ಎಂಬುದನ್ನು ಸೂಚಿಸುತ್ತದೆ. ಡಿ ಕೆ ಶಿವಕುಮಾರ್, ತಮ್ಮ ಕಿರಿಯ ಸಹೋದರ ಮತ್ತು ಬೆಂಗಳೂರು ಗ್ರಾಮೀಣ ಮಾಜಿ ಸಂಸದ ಡಿ ಕೆ ಸುರೇಶ್ ಅವರೊಂದಿಗೆ ಇತ್ತೀಚೆಗೆ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದಾಗ, ಅವರು ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿರುವ ಬಗ್ಗೆ ಒತ್ತಿ ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ.
ಪಕ್ಷ ಅಧಿಕಾರ ಹಿಡಿಯುವಲ್ಲಿ ತಮ್ಮ ಪಾತ್ರವನ್ನು ಎತ್ತಿ ತೋರಿಸುವ ಮೂಲಕ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಪುನರಾಚನೆ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ವಿಷಯಕ್ಕೆ ಹೆಚ್ಚಿನ ಸಮಾಲೋಚನೆ ಅಗತ್ಯವಾಗಿರುವುದರಿಂದ ಮಲ್ಲಿಕಾರ್ಜುನ ಖರ್ಗೆ ಅವರು ಎಚ್ಚರಿಕೆಯ ಹೆಜ್ಜೆ ಇಡಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಕಾಂಗ್ರೆಸ್‌ನಲ್ಲಿ ಅಧಿಕಾರದ ಮೂಲವಾಗಿರುವ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಆದರೆ ಡಿ ಕೆ ಶಿವಕುಮಾರ್ ಅವರಿಗೆ ಭೇಟಿಗೆ ಅವಕಾಶ ನಿರಾಕರಿಸಿದ್ದಾರೆ. ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ನೆನಪಿಸಿದರೆ ಅವರಿಗೆ ಮುಜುಗರದ ಪರಿಸ್ಥಿತಿ ಉಂಟಾಗುತ್ತಿತ್ತು, ಅದನ್ನು ತಪ್ಪಿಸಲು ರಾಹುಲ್ ಗಾಂಧಿ ಈ ಕ್ರಮ ತೆಗೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳುತ್ತಾರೆ.
ಆದಾಗ್ಯೂ, ಡಿ ಕೆ ಶಿವಕುಮಾರ್ ಅವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ತಮ್ಮ ಪ್ರಯತ್ನಗಳನ್ನು ಮುಂದುವರಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರು ನವೆಂಬರ್ 23 ರಂದು ರಾಹುಲ್ ಗಾಂಧಿ,ಮಲ್ಲಿಕಾರ್ಜುನ ಖರ್ಗೆ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್ ಸೇರಿದಂತೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ದೆಹಲಿಗೆ ಭೇಟಿ ನೀಡುವ ಸಾಧ್ಯತೆಯಿದೆ.
ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಮತ್ತು ಸಿಎಂ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಬಹಿರಂಗವಾಗಿಯೇ ಸಂಪುಟ ಪುನಾರಚನೆಗೆ ಹೈಕಮಾಂಡ್ ಒಪ್ಪಿಗೆ ನೀಡಲಿದೆ ಎಂದು ಸಿಎಂ ಬಣ ಆಶಿಸುತ್ತಿದೆ. ಐದು ತಿಂಗಳ ಹಿಂದೆಯೇ ಹೈಕಮಾಂಡ್ ತನ್ನನ್ನು ಸಂಪುಟ ಪುನಾರಚನೆಗೆ ಕೇಳಿಕೊಂಡಿತ್ತು ಎಂದು ಸಿದ್ದರಾಮಯ್ಯ ಹೇಳುವ ಮೂಲಕ ಈ ನಿರ್ಧಾರಕ್ಕೆ ಬಂದಿರುವುದರಿಂದ ಹಲವರು ಸಂಪುಟ ಸ್ಥಾನಗಳಿಗಾಗಿ ಲಾಬಿ ನಡೆಸುತ್ತಿದ್ದಾರೆ.
ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ, ಬದಲಾವಣೆಗಳ ಕುರಿತು ಹೈಕಮಾಂಡ್‌ನಿಂದ ನಿರ್ದೇಶನ ಹೇಳಿಕೆಗಳು ಬರಬೇಕಾಗಿರುವುದರಿಂದ ರಾಜ್ಯ ನಾಯಕರ ಹೇಳಿಕೆಗಳಿಗೆ ಯಾವುದೇ ಮಹತ್ವವಿಲ್ಲ ಎಂದರು.
ನಾವು ಎರಡೂವರೆ ವರ್ಷಗಳಲ್ಲಿ ಅಗತ್ಯ ವಸ್ತುಗಳನ್ನು ಪೂರೈಸಿದ್ದೇವೆ. ಐದು ಭರವಸೆಗಳನ್ನು ಜಾರಿಗೆ ತಂದಿದ್ದೇವೆ. ಆದರೆ ರಾಜ್ಯ ಹಣಕಾಸು ಮತ್ತಷ್ಟು ಸುಧಾರಿಸಬೇಕು. ಇದನ್ನು ಸಿದ್ದರಾಮಯ್ಯ ಅವರು ಮಾಡುತ್ತಾರೆ ಏಕೆಂದರೆ ಅವರು 16 ಬಜೆಟ್ ಮಂಡಿಸಿದ ಅನುಭವವನ್ನು ಹೊಂದಿದ್ದಾರೆ. ಮುಂದಿನ ಬಜೆಟ್ ನ್ನು ಸಹ ಮಂಡಿಸುತ್ತಾರೆ ಎಂದು ಹೇಳಿದರು.
ಈ ಮಧ್ಯೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಸಹಾಯಕ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು, ಬದಲಾವಣೆಗಳ ಬಗ್ಗೆ ತಾವು ಏನೂ ಹೇಳುವುದಿಲ್ಲ ಎಂದು ಹೇಳಿದ್ದಾರೆ ಮುಖ್ಯಮಂತ್ರಿಗಳೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವುದಾಗಿ ಮತ್ತು ಮುಂದಿನ ಬಜೆಟ್ ಮಂಡಿಸುವುದಾಗಿ ಹೇಳಿದ್ದಾರೆ ಎಂದರು.
ಈ ಎರಡೂ ಬಣಗಳಿಗೆ ನಿಷ್ಠೆ ತೋರದ ನಾಯಕರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ(The New Indian Express) ನೀಡಿದ ಮಾಹಿತಿಯ ಪ್ರಕಾರ, ನಾಯಕತ್ವದ ಈ ನಾಟಕೀಯ ಬೆಳವಣಿಗೆಗಳು ಪಕ್ಷದ ಇಮೇಜ್‌ಗೆ ಧಕ್ಕೆ ತರುತ್ತಿರುವುದರಿಂದ ಈ ಪರಿಸ್ಥಿತಿಯಿಂದ ಬೇಸತ್ತು ಹೋಗಿದ್ದೇವೆ. ಎರಡೂ ಬಣಗಳು ಪರಸ್ಪರರನ್ನು ಮೀರಿಸಲು ಪ್ರಯತ್ನಿಸುತ್ತಿವೆ ಎಂದು ಶಾಸಕರೊಬ್ಬರು ಅಸಮಾಧಾನ ವ್ಯಕ್ತಪಡಿಸಿದರು.
Advertisement