
ಬೆಂಗಳೂರು: ಹೊಸದಾಗಿ ರಚನೆಯಾದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಡಿಯಲ್ಲಿನ 5 ಪಾಲಿಕೆಗಳು, ಜಿಲ್ಲಾ ಪಂಚಾಯತ್‌ಗಳು ಮತ್ತು ನಿಗಮಗಳು ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಹತ್ತಿರ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಮೈತ್ರಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಮಿತಿಗಳನ್ನು ರಚಿಸಲು ನಿರ್ಧರಿಸಿವೆ,
ಮಂಗಳವಾರ ಜೆಡಿಎಸ್ ನಾಯಕ ಮತ್ತು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಭೇಟಿ ಮಾಡಿದರು.
ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಒಟ್ಟಾಗಿ ಕೆಲಸ ಮಾಡುವ ಬಗ್ಗೆ ಚರ್ಚಿಸಿದ್ದೇವೆ, ಇದಕ್ಕಾಗಿ ಸಮನ್ವಯ ಸಮಿತಿಗಳನ್ನು ರಚಿಸಲಾಗುವುದು. ಮುಂದಿನ ಎಂಟು ದಿನಗಳಲ್ಲಿ ಸಮಿತಿ ಸದಸ್ಯರ (ಜೆಡಿಎಸ್) ಹೆಸರುಗಳನ್ನು ಕುಮಾರಸ್ವಾಮಿ ಕಳುಹಿಸಲಿದ್ದಾರೆಂದು ಹೇಳಿದರು.
ಕಾಂಗ್ರೆಸ್ ಆಡಳಿತದಲ್ಲಿ ಬೆಂಗಳೂರು ಹದಗೆಟ್ಟಿದೆ. ಯಾವುದೇ ಅಭಿವೃದ್ಧಿ ಇಲ್ಲ. ಜನರು ಸರ್ಕಾರವನ್ನು ಶಪಿಸುತ್ತಿದ್ದಾರೆ. "ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಕೈಗಾರಿಕೋದ್ಯಮಿಗಳು ಮತ್ತು ಇತರರಿಂದ ಟೀಕೆಗಳನ್ನು ಸಕಾರಾತ್ಮಕವಾಗಿ ತೆಗೆದುಕೊಳ್ಳುತ್ತಿದ್ದರು. ಆದರೆ, ಈಗ ಕಿರಣ್ ಮಜುಂದಾರ್-ಶಾ ಮತ್ತು ಮೋಹನ್ ದಾಸ್ ಪೈ ಅವರಂತಹ ಜನರು ಸರ್ಕಾರಕ್ಕೆ ಸಲಹೆಗಳನ್ನು ನೀಡುತ್ತಿದ್ದು, ಅದನ್ನು ಪರಿಗಣಿಸುವ ಬದಲು ಸಚಿವರು ಸೇರಿದಂತೆ ನಾಯಕರು ಅವರನ್ನು ಬಹಿರಂಗವಾಗಿ ಟೀಕಿಸುತ್ತಿದ್ದಾರೆಂದು ಕಿಡಿಕಾರಿದರು.
ಇಲ್ಲಿ ತುಘಲಕ್ ಸರಕಾರ ನಡೆಯುತ್ತಿದೆಯೇ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಭ್ರಷ್ಟಾಚಾರದ ಬಗ್ಗೆ ಯಾವ ರೀತಿ ಚರ್ಚೆ ನಡೆಯುತ್ತಿದೆ? ಮೊನ್ನೆ ದಿನ ನಮ್ಮ ಸಂಸದ ರಾಘವೇಂದ್ರ ಅವರು ಇಲ್ಲಿ ಹಣ ಸಂಗ್ರಹಿಸಿ ಬಿಹಾರ ಚುನಾವಣೆಗೆ ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಸಚಿವರಾದಿಯಾಗಿ ಎಲ್ಲರೂ ಸಾಕ್ಷಿ ಕೊಡಿ ಎಂದು ಕೇಳಿದ್ದಾರೆ. ಯಾಕೆ ಸ್ವಾಮೀ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರರಿಗೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮರೆತು ಹೋಯಿತೇ ಎಂದು ಪ್ರಶ್ನಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಹಣವನ್ನು ತೆಲಂಗಾಣಕ್ಕೆ ತೆಗೆದುಕೊಂಡು ಹೋಗಿ ಸಾವಿರಾರು ಬೇನಾಮಿ ಖಾತೆ ತೆರೆದು ಹಣ ಪಡೆದು ಚಿನ್ನ ಖರೀದಿಸಲಾಗಿತ್ತು. ಲೋಕಸಭಾ ಚುನಾವಣೆಯಲ್ಲೂ ಬಳಸಲಾಗಿತ್ತು. ಇದನ್ನು ಜಾರಿ ನಿರ್ದೇಶನಾಲಯವು (ಇ.ಡಿ) ನೇರವಾಗಿ ಹೇಳಿದೆ. ಬೃಹತ್ ನೀರಾವರಿ, ನೀರಾವರಿ ಇಲಾಖೆಯಲ್ಲಿ ಶೇ 60, 70ರಷ್ಟು ಕಮಿಷನ್ ಕೇಳುವ ಕುರಿತು ಗುತ್ತಿಗೆದಾರರ ಸಂಘವು ಪತ್ರ ಬರೆದಿದೆ. ಅಧಿಕೃತ ದೂರು ನೀಡಲಿ ಎಂದು ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ಅಧಿಕೃತ ಪತ್ರ ಬರೆದಿರುವಾಗ ಇನ್ಯಾವ ದೂರು ಬೇಕೆಂದು ಕೇಳಿದರು.
ರಾಜ್ಯದಲ್ಲಿ ಮರಳು ಮಾಫಿಯ ನಡೆಯತ್ತಿದೆ ಎಂದು ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ಪತ್ರ ಬರೆದಿದ್ದಾರೆ. ಕರ್ನಾಟಕ ಸರಕಾರಕ್ಕೆ ಇದರಿಂದ 400- 500 ಕೋಟಿ ನಷ್ಟವಾಗುತ್ತಿದೆ ಎಂದಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ನಡೆಯುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೇ ಎಂದು ಪ್ರಶ್ನಿಸಿದರು.
ಶಿವಮೊಗ್ಗ ಜಿಲ್ಲೆ ಸೇರಿ ಅನೇಕ ಜಿಲ್ಲೆಗಳಲ್ಲಿ ಇಸ್ಪೀಟ್, ಒಸಿ ಮಟ್ಕಾ ದಂಧೆ ನಡೆಯುತ್ತಿದೆ. ಪೊಲೀಸ್ ಅಧಿಕಾರಿಗಳು, ಆಡಳಿತ ಪಕ್ಷದ ಶಾಸಕರ ಕುಮ್ಮಕ್ಕಿನಿಂದ ಇವು ನಡೆಯುತ್ತಿವೆ. ಎಷ್ಟೋ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಅವರು ಬೇರೆ ರಾಜ್ಯಕ್ಕೆ ತೆರಳಿದಾಗ ಇಲ್ಲಿನ ಗ್ಯಾರಂಟಿ ದೇಶಕ್ಕೇ ಮಾದರಿ ಎಂದು ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಾರೆ. ನಿಮ್ಮ ಸರಕಾರದ ಗ್ಯಾರಂಟಿಗಳು ರೋಲ್ ಮಾಡೆಲ್ ಅಲ್ಲ; ಉಡಾಫೆ ಮಾತುಗಳನ್ನು ಬಿಡಿ; ರಾಜ್ಯವನ್ನು ಕೊಳ್ಳೆ ಹೊಡೆಯುವುದನ್ನು ನಾವು, ಜನತೆ ಗಮನಿಸುತ್ತಿದ್ದಾರೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಇವೆಲ್ಲವುಗಳ ವಿರುದ್ಧ ಎರಡೂ ಪಕ್ಷಗಳು ಹೋರಾಟ ಮಾಡುವ ಬಗ್ಗೆ ನಿರ್ಧರಿಸಲಿದ್ದೇವೆ ಎಂದರು.
Advertisement