

ಬೆಂಗಳೂರು: ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮೀಸಲಾದ ಅನುದಾನವನ್ನು ಕಡಿತಗೊಳಿಸಲಾಗಿದ್ದು, ಎಸ್‌ಸಿ/ಎಸ್‌ಟಿ ಅನುದಾನವನ್ನು ಕಲ್ಯಾಣ ನಿಧಿಯನ್ನು ಬೇರೆ ಉದ್ದೇಶಗಳಿಗೆ ತಿರುಗಿಸಲಾಗಿದೆ ಎಂದು ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಗಂಭೀರ ಆರೋಪಗಳನ್ನು ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಡಳಿತಾವಧಿಯಲ್ಲಿ ಹಿಂದುಳಿದ ವರ್ಗಗಳ ಮಂಡಳಿಗಳು ಮತ್ತು ನಿಗಮಗಳಿಗೆ ರೂ.1,699 ಕೋಟಿ ಅನುದಾನ ನೀಡಲಾಗಿತ್ತು. ಆದರೆ, ಸಿದ್ದರಾಮಯ್ಯ ಸರ್ಕಾರದಲ್ಲಿ ಇದು ರೂ.643 ಕೋಟಿಗೆ ಇಳಿಕೆಯಾಗಿದೆ. ಈಗ ಯಾರನ್ನು ಹಿಂದುಳಿದ ಸಮುದಾಯಗಳ ಪ್ರತಿಪಾದಕ ಎಂದು ಕರೆಯಬೇಕು? ಎಂದು ಪ್ರಶ್ನಿಸಿದ್ದಾರೆ.
ಇದಲ್ಲದೆ, ಸಿದ್ದರಾಮಯ್ಯ ಸರ್ಕಾರವು ಎಸ್‌ಸಿ/ಎಸ್‌ಟಿ ಸಮುದಾಯದ ಜನರ ಅಭಿವೃದ್ಧಿಗೆ ಮೀಸಲಾದ ಸುಮಾರು ರೂ.54,000 ಕೋಟಿಯನ್ನು ಐದು ಗ್ಯಾರಂಟಿ ಯೋಜನೆಗಳಿಗೆ ಬಳಸಿದೆ ಎಂದು ಗಂಭೀರ ಆರೋಪ ಮಾಡಿದರು. ಇದೇ ವೇಳೆ “ಈ ಹಣವನ್ನು ದುರುಪಯೋಗ ಮಾಡಿಲ್ಲ ಎಂದು ಸಿಎಂ ಸಾರ್ವಜನಿಕವಾಗಿ ಹೇಳಲಿ” ಎಂದೂ ಸವಾಲು ಹಾಕಿದರು.
ಬಿಜೆಪಿ ಪಕ್ಷ ಗ್ಯಾರಂಟಿ ಯೋಜನೆಗಳಿಗೆ ವಿರೋಧಿಯಲ್ಲ, ಆದರೆ, ಅವುಗಳನ್ನು ಸರಿಯಾಗಿ ಜಾರಿಗೆ ತರಲಾಗುತ್ತಿಲ್ಲ ಎಂದು ಟೀಕಿಸಿದರು.
ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು ರೂ.2,000 ನೀಡುವುದಾಗಿ ಘೋಷಿಸಿದ್ದರೂ, ವರ್ಷದಲ್ಲಿ ಕೇವಲ ಆರು ತಿಂಗಳು ಮಾತ್ರ ಹಣ ಜಮೆಯಾಗುತ್ತಿದೆ. “ಉಳಿದ ಹಣ ಎಲ್ಲಿಗೆ ಹೋಗುತ್ತಿದೆ?” ಎಂದು ಪ್ರಶ್ನಿಸಿದರು.
ಇದೇ ವೇಳೆ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಉಂಟಾಗಿದೆ ಎಂದು ಹೇಳಿದ ಆಶೋಕ್, ಕಾಂಗ್ರೆಸ್ ಶಾಸಕರೇ ತಮ್ಮ ಕ್ಷೇತ್ರಗಳಿಗೆ ಅನುದಾನ ಸಿಗುತ್ತಿಲ್ಲ ಎಂದು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.
Advertisement