

ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ರಾಜ್ಯದಲ್ಲಿನ ಆಡಳಿತಾರೂಢ ಕಾಂಗ್ರೆಸ್‌ನ ಭವಿಷ್ಯವನ್ನು ನಿರ್ಧರಿಸಲಿದೆ ಎಂದು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದ್ದಾರೆ.
ಏಪ್ರಿಲ್ 9 ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಬಡವರು ಮತ್ತು ಶ್ರೀಮಂತರ ನಡುವಿನ ಸ್ಪರ್ಧೆಯಾಗಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಲಿದ್ದು, ರಾಜ್ಯದ ಭವಿಷ್ಯವನ್ನು ನಿರ್ಧರಿಸಲಾಗುತ್ತದೆ ಎಂದಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಡವರನ್ನು ಗೆಲ್ಲಿಸಿ’ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು, ಬಿಜೆಪಿ ಬಡ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ದಾವಣಗೆರೆಯಲ್ಲಿ ಬಿಜೆಪಿ ಸಾಮಾನ್ಯ ವ್ಯಕ್ತಿಗೆ ಟಿಕೆಟ್ ನೀಡಿದರೆ, ಕಾಂಗ್ರೆಸ್ ಪ್ರಬಲ ಮತ್ತು ಪ್ರಭಾವಿಗಳಿಗೆ ಟಿಕೆಟ್ ನೀಡಿದೆ. ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಬಗ್ಗೆ ಉತ್ತಮ ಅಭಿಪ್ರಾಯವಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಎರಡೂ ಕಡೆ ವಂಶಾಡಳಿತ ರಾಜಕಾರಣಕ್ಕೆ ಅವಕಾಶ ನೀಡಿದ್ದು, ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ಪ್ರಬಲ ಅವಕಾಶವಿದೆ. ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ಭವಿಷ್ಯದಲ್ಲಿ ಮುಸ್ಲಿಮರಿಗೆ ಅವಕಾಶಗಳು ಸಿಗುವುದಿಲ್ಲ ಎಂಬುದು ಅರ್ಥವಾಗಿದ್ದು, ಮುಸ್ಲಿಮರು ಕಾಂಗ್ರೆಸ್ ಪಕ್ಷವನ್ನು ವಿರೋಧಿಸುತ್ತಿದ್ದಾರೆ. ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿಲ್ಲ ಎಂದು ಆರೋಪಿಸಿದರು.
ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಹಾಲಿ ಕಾಂಗ್ರೆಸ್ ಶಾಸಕರಾದ ಶಾಮನೂರು ಶಿವಶಂಕರಪ್ಪ ಮತ್ತು ಎಚ್‌ವೈ ಮೇಟಿ ಅವರ ನಿಧನದ ಹಿನ್ನೆಲೆಯಲ್ಲಿ ಉಪಚುನಾವಣೆ ಅನಿವಾರ್ಯವಾಗಿದೆ.
ಆಡಳಿತಾರೂಢ ಕಾಂಗ್ರೆಸ್ ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಮತ್ತು ಕರ್ನಾಟಕದ ಸಚಿವ ಎಸ್‌ಎಸ್ ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ ಶಾಮನೂರು ಮತ್ತು ಬಾಗಲಕೋಟೆಯಲ್ಲಿ ಉಮೇಶ್ ಮೇಟಿ ಅವರನ್ನು ಕಣಕ್ಕಿಳಿಸಿದ್ದು, ಬಿಜೆಪಿ ಅಭ್ಯರ್ಥಿಗಳಾದ ಟಿ ದಾಸಕರಿಯಪ್ಪ ಮತ್ತು ವೀರಭದ್ರಯ್ಯ ಚರಂತಿಮಠ ಅವರೊಂದಿಗೆ ನೇರ ಸ್ಪರ್ಧೆವೇರ್ಪಟ್ಟಿದೆ.
Advertisement