

ಬೆಂಗಳೂರು: ಆಗಸ್ಟ್ 13ರಿಂದ ಆರಂಭವಾಗಲಿರುವ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರವನ್ನು ವಿವಿಧ ಜನಪರ ಹಾಗೂ ಆಡಳಿತಾತ್ಮಕ ವಿಚಾರಗಳ ಮೇಲೆ ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಸಜ್ಜಾಗಿದೆ.
ಭಾನುವಾರ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಬರ ಪರಿಸ್ಥಿತಿ, ಬಿಡದಿ ಟೌನ್‌ಶಿಪ್ ಯೋಜನೆ, ಕೆಪಿಎಸ್‌ಸಿ ನೇಮಕಾತಿ ಅಕ್ರಮ, ಸಾಮಾಜಿಕ ಭದ್ರತಾ ಯೋಜನೆಗಳ ಪಿಂಚಣಿ ಸ್ಥಗಿತ, ಬಿಪಿಎಲ್ ಕಾರ್ಡ್ ರದ್ದು ಸೇರಿದಂತೆ ಹಲವು ವಿಷಯಗಳನ್ನು ಸದನದಲ್ಲಿ ಪ್ರಬಲವಾಗಿ ಪ್ರಸ್ತಾಪಿಸಲು ನಿರ್ಧರಿಸಲಾಯಿತು.
ಸಭೆಯಲ್ಲಿ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬಗ್ಗೆಯೂ ಚರ್ಚೆ ನಡೆಯಿತು. ಮಾಜಿ ಸಚಿವ ಡಿ. ಸುಧಾಕರ್ ಅವರ ನಿಧನದಿಂದ ತೆರವಾದ ಈ ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜೆಡಿಎಸ್ ಸ್ಪರ್ಧಿಸಲು ಆಸಕ್ತಿ ವ್ಯಕ್ತಪಡಿಸಿರುವ ಕುರಿತು ಚರ್ಚಿಸಲಾಯಿತು.
ಇದೇ ವೇಳೆ, ನವೆಂಬರ್‌ನಲ್ಲಿ ನಡೆಯಲಿರುವ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ನಾಲ್ಕು ವಿಧಾನಪರಿಷತ್ ಸ್ಥಾನಗಳ ಚುನಾವಣೆಯ ಕುರಿತೂ ಸಮಾಲೋಚನೆ ನಡೆಯಿತು.
ತಾಂತ್ರಿಕ ದೋಷದ ನೆಪದಲ್ಲಿ ಸುಮಾರು 23 ಸಾವಿರ ಹಿರಿಯ ನಾಗರಿಕರು ಹಾಗೂ ಅಂಗವಿಕಲರ ಸಾಮಾಜಿಕ ಭದ್ರತಾ ಯೋಜನೆಗಳ ಪಿಂಚಣಿಯನ್ನು ಸ್ಥಗಿತಗೊಳಿಸಿರುವುದು, ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿರುವುದು ಜನರಿಗೆ ತೊಂದರೆ ಉಂಟುಮಾಡಿದೆ. ಈ ವಿಚಾರಗಳನ್ನು ಅಧಿವೇಶನದಲ್ಲಿ ಸರ್ಕಾರದ ಗಮನಕ್ಕೆ ತಂದು ಉತ್ತರ ಕೇಳಲು ಬಿಜೆಪಿ ನಿರ್ಧರಿಸಿದೆ.
ಕೆಪಿಎಸ್‌ಸಿ ನೇಮಕಾತಿಯಲ್ಲಿ ನಡೆದಿರುವ ಆರೋಪಿತ ಅಕ್ರಮಗಳ ವಿಚಾರವೂ ಸಭೆಯಲ್ಲಿ ಪ್ರಮುಖವಾಗಿ ಚರ್ಚೆಯಾಯಿತು.
ಇತ್ತೀಚಿನ ಪಶುವೈದ್ಯರ ನೇಮಕಾತಿಯನ್ನು ಉಲ್ಲೇಖಿಸಿದ ಬಿಜೆಪಿ ನಾಯಕ ಸಿ.ಟಿ. ರವಿ ಅವರು, ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಅರ್ಹತೆ ಪಡೆದವರಿಗೆ ನ್ಯಾಯ ಸಿಗಬೇಕು. ಹಣ ಕೊಟ್ಟವರು ಉದ್ಯೋಗ ಪಡೆಯಬೇಕೇ? ಇದರಿಂದ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು.
ಒಳ ಮೀಸಲಾತಿ ಪಡೆಯಲು ಪರಿಶಿಷ್ಟ ಜಾತಿ ಸಮುದಾಯದ ಅಭ್ಯರ್ಥಿಗಳು ರೂ.100 ಮುಖಬೆಲೆಯ ಬಾಂಡ್ ಪೇಪರ್‌ನಲ್ಲಿ ಅಫಿಡವಿಟ್ ಸಲ್ಲಿಸಬೇಕೆಂಬ ನಿಯಮವೂ ಬಡ ಅಭ್ಯರ್ಥಿಗಳಿಗೆ ಹೆಚ್ಚುವರಿ ಹೊರೆಯಾಗಿದ್ದು, ಈ ವಿಚಾರವನ್ನೂ ಸರ್ಕಾರದ ಮುಂದೆ ಪ್ರಸ್ತಾಪಿಸಲಾಗುವುದು ಎಂದು ಹೇಳಿದರು.
ಸಭೆಯ ಬಳಿಕ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ರಾಜ್ಯದಲ್ಲಿ ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಕಾಂಗ್ರೆಸ್ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು.
ಮುಂಬರುವ ಅಧಿವೇಶನದಲ್ಲಿ ರೈತರ ಧ್ವನಿಯಾಗಿ ಬಿಜೆಪಿ ಹೋರಾಟ ನಡೆಸಲಿದ್ದು, ರೈತರ ಸಮಸ್ಯೆಗಳು, ಬೆಳೆ ನಷ್ಟ, ಪರಿಹಾರ ವಿತರಣೆ ಸೇರಿದಂತೆ ಜನಜೀವನಕ್ಕೆ ಸಂಬಂಧಿಸಿದ ಎಲ್ಲ ವಿಚಾರಗಳನ್ನು ಸದನದಲ್ಲಿ ಪ್ರಸ್ತಾಪಿಸಲಾಗುವುದು ಎಂದು ಹೇಳಿದರು.
ರಾಜ್ಯದ ಜನರ ಪರವಾಗಿ ಬಿಜೆಪಿ ಸದನದ ಒಳಗೂ, ಹೊರಗೂ ಹೋರಾಟ ಮುಂದುವರಿಸಲಿದೆ. ವಿಧಾನಪರಿಷತ್‌ನ ನಾಲ್ಕು ಸ್ಥಾನಗಳ ಪೈಕಿ ಮೂರು ಕ್ಷೇತ್ರಗಳ ಅಭ್ಯರ್ಥಿಗಳನ್ನು ಈಗಾಗಲೇ ಘೋಷಿಸಲಾಗಿದೆ. ಉಳಿದ ಒಂದು ಕ್ಷೇತ್ರದ ಅಭ್ಯರ್ಥಿಯನ್ನು ಜೆಡಿಎಸ್ ಜೊತೆ ಸಮಾಲೋಚಿಸಿ ಅಂತಿಮಗೊಳಿಸಲಾಗುತ್ತದೆ ಎಂದು ತಿಳಿಸಿದರು.
ಕೆಪಿಎಸ್‌ಸಿ ಹಗರಣವು ವರ್ಷಗಳ ಕಾಲ ಶ್ರಮಪಟ್ಟು ಓದಿದ ಯುವಕರ ಭವಿಷ್ಯಕ್ಕೆ ಧಕ್ಕೆ ತಂದಿದ್ದು, ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಸಿಗಬೇಕಾಗಿದೆ ಎಂದು ಬಿಜೆಪಿ ನಾಯಕರು ಸಭೆಯಲ್ಲಿ ಅಭಿಪ್ರಾಯಪಟ್ಟರು.
ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಹಮ್ಮಿಕೊಳ್ಳಲಾಗಿರುವ ಪಾದಯಾತ್ರೆ ಕುರಿತೂ ಸಭೆಯಲ್ಲಿ ಚರ್ಚೆ ನಡೆಯಿತು.
ಈ ಪಾದಯಾತ್ರೆ ಬಗ್ಗೆ ಯಾವುದೇ ಗೊಂದಲ ಇಲ್ಲ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಈಗಾಗಲೇ ಮಾತುಕತೆ ನಡೆಸಿದ್ದೇನೆ. ಅವರು ದಿನಾಂಕ ಘೋಷಿಸಿದ್ದು, ಈ ವಿಚಾರವನ್ನು ಸದನದಲ್ಲಿಯೂ ಪ್ರಸ್ತಾಪಿಸಲಾಗುವುದು" ಎಂದು ವಿಜಯೇಂದ್ರ ಅವರು ಹೇಳಿದರು.
ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಡಾ. ರಾಧಾಮೋಹನ್ ದಾಸ್ ಅಗ್ರವಾಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಡಿ.ವಿ. ಸದಾನಂದ ಗೌಡ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಗೋವಿಂದ ಕಾರಜೋಳ, ನಳಿನ್ ಕುಮಾರ್ ಕಟೀಲ್, ಪಿ. ಡಾ. ಸುಧಾಕರ್ ರೆಡ್ಡಿ, ಸಿ.ಎನ್. ಅಶ್ವತ್ಥನಾರಾಯಣ, ಬಿ. ಶ್ರೀರಾಮುಲು, ನಿರ್ಮಲ್ ಕುಮಾರ್ ಸುರಾನ ಸೇರಿದಂತೆ ಹಲವು ಹಿರಿಯ ನಾಯಕರು ಉಪಸ್ಥಿತರಿದ್ದರು.