ನಾಗೇಂದ್ರ ರಾಜೀನಾಮೆ ನೀಡುವವರೆಗೆ ವಿಧಾನಸಭೆ ಕಲಾಪಕ್ಕೆ ಅವಕಾಶ ನೀಡಲ್ಲ: ಸರ್ಕಾರಕ್ಕೆ BJP ಖಡಕ್ ಎಚ್ಚರಿಕೆ

ಸಚಿವ ಸ್ಥಾನ ನೀಡದಿದ್ದರೆ ಕಾಂಗ್ರೆಸ್ ಹೈಕಮಾಂಡ್‌ಗೆ ಸಂಬಂಧಿಸಿದ ಮಾಹಿತಿಯನ್ನು ಬಹಿರಂಗಪಡಿಸುವುದಾಗಿ ನಾಗೇಂದ್ರ ಬೆದರಿಕೆ ಹಾಕಿದ್ದರಿಂದಲೇ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಲಾಗಿದೆ ಎಂಬ ವರದಿಗಳು ಬಂದಿವೆ.
File photo
ಸಂಗ್ರಹ ಚಿತ್ರ
Updated on

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಈ ನಡುವಲ್ಲೇ ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ವಿಶೇಷವಾಗಿ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಿರುವುದನ್ನು ಪ್ರಶ್ನಿಸಿರುವ ಬಿಜೆಪಿ, ಅವರು ರಾಜೀನಾಮೆ ನೀಡುವವರೆಗೆ ವಿಧಾನಮಂಡಲದ ಕಲಾಪ ನಡೆಯಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವರನ್ನಾಗಿ ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಚಿವ ಸ್ಥಾನ ನೀಡದಿದ್ದರೆ ಕಾಂಗ್ರೆಸ್ ಹೈಕಮಾಂಡ್‌ಗೆ ಸಂಬಂಧಿಸಿದ ಮಾಹಿತಿಯನ್ನು ಬಹಿರಂಗಪಡಿಸುವುದಾಗಿ ನಾಗೇಂದ್ರ ಬೆದರಿಕೆ ಹಾಕಿದ್ದರಿಂದಲೇ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಲಾಗಿದೆ ಎಂಬ ವರದಿಗಳು ಬಂದಿವೆ. ಇದೇ ಅವರ ಮರುನೇಮಕಕ್ಕೆ ಕಾರಣ" ಎಂದು ಆರೋಪಿಸಿದ್ದಾರೆ.

ಇದೇ ವೇಳೆ, "ರಾಜ್ಯದ ಅಭಿವೃದ್ಧಿಗಾಗಿ ಸಚಿವ ಸಂಪುಟ ವಿಸ್ತರಣೆ ಮಾಡಿಲ್ಲ. ಹಣದ ಪ್ರಭಾವ ಮತ್ತು ಕಾಂಗ್ರೆಸ್ ಹೈಕಮಾಂಡ್ ರಾಜಕಾರಣವೇ ಸಚಿವ ಸಂಪುಟ ರಚನೆಗೆ ಕಾರಣವಾಗಿದೆ" ಎಂದು ವಿಜಯೇಂದ್ರ ಆರೋಪಿಸಿದರು.

ಕಾಂಗ್ರೆಸ್‌ನ ಆಂತರಿಕ ಅಸಮಾಧಾನವೇ ಸಚಿವ ಸಂಪುಟ ವಿಸ್ತರಣೆಯ ನಿಜಸ್ವರೂಪವನ್ನು ಬಯಲು ಮಾಡಿದೆ. ಮಾಜಿ ಸಚಿವ ಶಿವಾನಂದ ಪಾಟೀಲ್ ತಿಮ್ಮಾಪುರ ಅವರೇ, ಹಣ ಕೊಟ್ಟವರು ಅಥವಾ ಪ್ರಭಾವ ಹೊಂದಿದವರಿಗೇ ಸಚಿವ ಸ್ಥಾನ ಸಿಕ್ಕಿದೆ ಎಂದು ಬಹಿರಂಗವಾಗಿ ಆರೋಪಿಸಿರುವುದನ್ನು ವಿಜಯೇಂದ್ರ ಅವರು ಉಲ್ಲೇಖಿಸಿದರು.

File photo
ಸಚಿವ ಸ್ಥಾನ ಕೋಟಿ ಕೋಟಿಗೆ ಹರಾಜು: BJPಯಿಂದ ಆಡಿಯೋ ಬಿಡುಗಡೆ; ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ

ವಿಧಾನ ಪರಿಷತ್‌ನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, "ನಾಗೇಂದ್ರ ವಿರುದ್ಧ ಪ್ರಕರಣ ದಾಖಲಾಗಿದೆ. ಅವರು ದೆಹಲಿಗೆ ಹೋಗಲೂ ಸಾಧ್ಯವಿಲ್ಲದ ಪರಿಸ್ಥಿತಿಯಲ್ಲಿದ್ದಾರೆ. ಇಂತಹ ಕಳಂಕಿತ ವ್ಯಕ್ತಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿರುವುದು ಸರಿಯಲ್ಲ" ಎಂದು ಟೀಕಿಸಿದ್ದಾರೆ.

ನಾಗೇಂದ್ರ ರಾಜೀನಾಮೆ ನೀಡುವವರೆಗೆ ಬಿಜೆಪಿ ಹೋರಾಟ ನಿಲ್ಲಿಸುವುದಿಲ್ಲ. ಆಗಸ್ಟ್‌ 13ರಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದ ಕಲಾಪಕ್ಕೂ ಅಡ್ಡಿಪಡಿಸಲಾಗುವುದು. ರಾಜ್ಯಾದ್ಯಂತ ಪ್ರತಿಭಟನೆಗಳನ್ನು ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ರೂ.187 ಕೋಟಿ ಹಗರಣದ ವಿರುದ್ಧ ಭಾರೀ ಪ್ರತಿಭಟನೆ ನಡೆದ ಬಳಿಕ ನಾಗೇಂದ್ರ ಸಿದ್ದರಾಮಯ್ಯ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು. ಈಗ ಮತ್ತೆ ಅವರನ್ನು ಸಚಿವರನ್ನಾಗಿ ಮಾಡಿರುವುದು, ಅವರು ಹಗರಣದಲ್ಲಿ ಭಾಗಿಯಾಗಿರುವ ಇತರರ ಹೆಸರುಗಳನ್ನು ಬಹಿರಂಗಪಡಿಸಬಹುದು ಎಂಬ ಕಾಂಗ್ರೆಸ್‌ನ ಭಯದಿಂದ ಎಂದು ಬಿಜೆಪಿ ಆರೋಪಿಸಿದೆ.

ಇದೇ ವೇಳೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆ ನೀಡಬೇಕು ಎಂಬ ಕಾಂಗ್ರೆಸ್ ನಾಯಕರ ಬೇಡಿಕೆಯನ್ನೂ ಬಿಜೆಪಿ ಖಂಡಿಸಿದೆ.

ಕಾಂಗ್ರೆಸ್ ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಿದರೆ ಚರ್ಚೆಗೆ ನಾವು ಸಿದ್ಧರಿದ್ದೇವೆ. ಯಾವುದೇ ಒತ್ತಡಕ್ಕೆ ಮಣಿದು ಹೊರಟ್ಟಿ ರಾಜೀನಾಮೆ ನೀಡಬಾರದು ಎಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com