

ಹಿಂದಿನ ಆರೋಪಗಳಿಗೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರಿಗೆ ಲೋಕಾಯುಕ್ತ ಹಾಗೂ ಎಸ್‌ಐಟಿ ಈಗಾಗಲೇ ಕ್ಲೀನ್‌ಚಿಟ್ ನೀಡಿವೆ. ಹೀಗಾಗಿ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೈಬಿಡುವಂತೆ ಬಿಜೆಪಿ ನಡೆಸುತ್ತಿರುವ ಹೋರಾಟ ರಾಜಕೀಯ ಪ್ರೇರಿತವಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತಾಡಿದ ಅವರು, ಧರ್ಮೇಂದ್ರ ಪ್ರಧಾನ್ ಅವರು ನೀಟ್ ಪರೀಕ್ಷೆ ಅಕ್ರಮ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಾಗಿತ್ತು, ಅದು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯಾಗಿತ್ತು. ಆದರೆ ನಾಗೇಂದ್ರ ವಿಚಾರದಲ್ಲಿ ಹಾಗಲ್ಲ ಎಂದರು.
ಬಿಜೆಪಿ ಮತ್ತು ಜೆಡಿಎಸ್‌ನ ಶಾಸಕರು ಸಚಿವ ಬಿ. ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿ ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ವಶಕ್ಕೆ ಪಡೆದ ಪ್ರಸಂಗ ನಡೆದಿದೆ.
89 ಕೋಟಿ ರೂಪಾಯಿ ಮೌಲ್ಯದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ನಾಗೇಂದ್ರ ಭಾಗಿಯಾಗಿದ್ದಾರೆ ಎಂಬ ಆರೋಪವಿದ್ದು, ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸಿವೆ.
2024ರ ಮೇ-ಜೂನ್‌ನಲ್ಲಿ ವಾಲ್ಮೀಕಿ ನಿಗಮದ ಖಾತೆಗಳ ಅಧೀಕ್ಷಕ ಪಿ. ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡು, ನಿಗಮದಲ್ಲಿ ಹಣಕಾಸಿನ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಡೆತ್‌ನೋಟ್ ಬರೆದಿದ್ದ ಹಿನ್ನೆಲೆಯಲ್ಲಿ ವಾಲ್ಮೀಕಿ ನಿಗಮದ ವಿವಾದ ಭುಗಿಲೆದ್ದಿತ್ತು.
ಬಳಿಕ ನಡೆದ ತನಿಖೆಯಲ್ಲಿ ನಿಗಮದ ಯೂನಿಯನ್ ಬ್ಯಾಂಕ್ ಖಾತೆಯಿಂದ 89 ಕೋಟಿ ರೂಪಾಯಿಗಳನ್ನು ಅಕ್ರಮವಾಗಿ ವಿವಿಧ ಖಾತೆಗಳಿಗೆ ವರ್ಗಾವಣೆ ಮಾಡಿರುವುದು ಪತ್ತೆಯಾಗಿತ್ತು. ನಂತರ ಅಕ್ರಮವಾಗಿ ವರ್ಗಾಯಿಸಲಾದ ಒಟ್ಟು ಹಣದ ಮೊತ್ತ ಸುಮಾರು 187 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿತ್ತು.
ಆ ಸಂದರ್ಭದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾಗಿದ್ದ ನಾಗೇಂದ್ರ ಅವರು 2024ರ ಜೂನ್ 6ರಂದು ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು.
2026ರ ಆಗಸ್ಟ್ 3ರಂದು ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಮರು ಸೇರ್ಪಡೆ ಮಾಡಲಾಗಿದ್ದು, 19 ಕಾಂಗ್ರೆಸ್ ಶಾಸಕರನ್ನು ಸಚಿವರನ್ನಾಗಿ ಸೇರ್ಪಡೆಗೊಳಿಸಿದ ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಯೋಜನೆ ಮತ್ತು ಸಾಂಖ್ಯಿಕ ಖಾತೆ ನೀಡಲಾಗಿದೆ.
ಅಂದಿನಿಂದ ಬಿಜೆಪಿ ಮತ್ತು ಜೆಡಿಎಸ್ ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಒಳಗೆ ಮತ್ತು ಹೊರಗೆ ಪ್ರತಿಭಟನೆಗಳನ್ನು ತೀವ್ರಗೊಳಿಸಿದ್ದು, ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೈಬಿಡುವಂತೆ ಆಗ್ರಹಿಸುತ್ತಿವೆ.