

ಕರ್ನಾಟಕದ ರಾಜಕೀಯ ಸಮೀಕರಣಗಳಲ್ಲಿ ಮತ್ತೆ ಬದಲಾವಣೆಯ ಲಕ್ಷಣಗಳು ಕಾಣಿಸಿಕೊಳ್ಳುತ್ತಿವೆ. ಹಿರಿಯ ಬಿಜೆಪಿ ನಾಯಕರುಗಳಾದ ಸಿ.ಟಿ. ರವಿ ಹಾಗೂ ರಮೇಶ್ ಜಾರಕಿಹೊಳಿ ಅವರು ಕಳೆದ ಎರಡು ದಿನಗಳಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಅವರ ಕಾವೇರಿ ನಿವಾಸದಲ್ಲಿ ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿದೆ.
ಬುಧವಾರ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸಿದ್ದರಾಮಯ್ಯರನ್ನ ಭೇಟಿ ಮಾಡಿ ಕೆಲ ಕಾಲ ಚರ್ಚಿಸಿದ್ದರು. ಇದರ ಬೆನ್ನಲ್ಲೇ ನಿನ್ನೆ ಗುರುವಾರ ಮಾಜಿ ಸಚಿವ ಹಾಗೂ ಶಾಸಕ ರಮೇಶ್ ಜಾರಕಿಹೊಳಿ, ಬಿಜೆಪಿ ಮಾಜಿ ಶಾಸಕ ನರಸಿಂಹ ನಾಯಕ (ರಾಜುಗೌಡ), ಸಚಿವರಾದ ನರೇಂದ್ರ ಸ್ವಾಮಿ, ಶಿವಲಿಂಗೇಗೌಡ ಅವರು ಆಗಮಿಸಿ ಕೆಲಹೊತ್ತು ಮಾತುಕತೆ ನಡೆಸಿದರು.
1 ಗಂಟೆ ಕಾಲ ಜಾರಕಿಹೊಳಿ ಜೊತೆ ಚರ್ಚೆ
ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಒಂದು ತಾಸಿಗೂ ಹೆಚ್ಚು ಕಾಲ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದ್ದು, ಇದೇ ವೇಳೆ ಸಿದ್ದರಾಮಯ್ಯ ಅವರನ್ನ ಸಕ್ರಿಯ ರಾಜಕಾರಣದಲ್ಲೇ ಮುಂದುವರೆಯಬೇಕು ಎಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ.
ಇತ್ತೀಚಿನ ತಿಂಗಳುಗಳಲ್ಲಿ ಬಹುತೇಕ ಮೌನವಾಗಿದ್ದ ಸಿದ್ದರಾಮಯ್ಯ ಅವರು ಇದೀಗ ಮತ್ತೆ ರಾಜಕೀಯ ಚರ್ಚೆಯ ಕೇಂದ್ರವಾಗಿದ್ದಾರೆ. ಒಳ ಮೀಸಲಾತಿ, ಸಾಮಾಜಿಕ ನ್ಯಾಯ ಹಾಗೂ ದಲಿತ ಮುಖ್ಯಮಂತ್ರಿ ಮಾಡುವ ಬೇಡಿಕೆ ಕುರಿತು ಅವರು ಬಲವಾಗಿ ಮಾತನಾಡಿದ್ದಾರೆ.
ಜತೆಗೆ, ಡಾ. ಜಿ. ಪರಮೇಶ್ವರ್ ಅವರನ್ನು ಉಪ ಮುಖ್ಯಮಂತ್ರಿಯಾಗಿ ಮಾಡಿದ್ದರಲ್ಲಿ ತಮ್ಮ ಪಾತ್ರವಿತ್ತು ಎಂದು ಸಿದ್ದರಾಮಯ್ಯ ನೀಡಿರುವ ಹೇಳಿಕೆಗಳು ರಾಜಕೀಯ ಊಹಾಪೋಹಗಳಿಗೆ ಮತ್ತೊಂದು ಆಯಾಮವನ್ನು ನೀಡಿವೆ.