

ಬೆಂಗಳೂರು: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ(BJP) ಮತ್ತು ಅದರ ಮಿತ್ರಪಕ್ಷಗಳ ಭರ್ಜರಿ ಗೆಲುವಿನ ನಂತರ, ಶುಕ್ರವಾರ ಬೆಂಗಳೂರಿನ ಬಿಜೆಪಿ ಕಚೇರಿಯ ಬಳಿ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಲಾಯಿತು.
ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ನಂತರ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಅಭಿನಂದಿಸಿದ್ದಾರೆ.
ಪ್ರಧಾನಿ ಮೋದಿ ನೇತೃತ್ವದಲ್ಲಿ NDA ಸರ್ಕಾರ ಮತ್ತು ಮಹಾರಾಷ್ಟ್ರದಲ್ಲಿ BJP ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಾರಿಗೆ ತಂದ "ಜನಪರ" ಕಾರ್ಯಕ್ರಮಗಳನ್ನು ಮೆಚ್ಚಿ ಜನರು ಆರ್ಶೀವಾದ ಮಾಡಿದ್ದಾರೆ ಎಂದರು.
ಬಿಜೆಪಿಯನ್ನು ಬೆಂಬಲಿಸಿದ ಪ್ರಬುದ್ಧ ಮತದಾರರಿಗೆ ಹಾಗೂ ಗೆಲುವಿಗಾಗಿ ಶ್ರಮಿಸಿದ ಎಲ್ಲಾ ಪಕ್ಷದ ಕಾರ್ಯಕರ್ತರು ಮತ್ತು ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಸಿಎಂ ಹೇಳಿದ್ದಾರೆ.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಸ್. ಹರೀಶ್, ದೇಶದ ಅತಿದೊಡ್ಡ ಮಹಾನಗರ ಪಾಲಿಕೆ ಬೃಹನ್ಮುಂಬೈ ಮಹಾನಗರ ಪಾಲಿಕೆಯಲ್ಲಿ(ಬಿಎಂಸಿ) ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಭಾರಿ ಮುನ್ನಡೆ ಸಾಧಿಸಿವೆ ಎಂದು ಹೇಳಿದರು.
ಇದು ಅತ್ಯಂತ ಸಂತೋಷದ ಕ್ಷಣ ಎಂದು ಬಣ್ಣಿಸಿದ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಬ್ಯಾಲೆಟ್ ಪೇಪರ್ ಬಳಸಿ ಚುನಾವಣೆ ನಡೆಸಿದರೆ ಗೆಲ್ಲುತ್ತೇವೆ ಎಂದು ಕಾಂಗ್ರೆಸ್ ಹೇಳಿಕೊಂಡಿತ್ತು. ಆದರೆ ಅವರು ಎಲ್ಲ ಕ್ಷೇತ್ರಗಳಲ್ಲಿ ಸೋತಿದ್ದಾರೆ ಎಂದರು.
Advertisement