

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿದ್ದಾರೆ. ಇದೇ ವೇಳೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿರುವುದು ರಾಜಕೀಯ ವಲಯಗಳಲ್ಲಿ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ.
ಶಿವಕುಮಾರ್ ಪಾಳಯ ನಾಯಕತ್ವ ಬದಲಾವಣೆಗೆ ಒತ್ತಾಯಿಸುತ್ತಿರುವುದರಿಂದ, ರಾಜ್ಯ ಬಜೆಟ್‌ಗೆ ಮುಂಚಿತವಾಗಿ ಸಂಪುಟ ಪುನರ್ರಚನೆಯ ಬೇಡಿಕೆಯನ್ನು ಮುಂದಿಡಲು ಸಿಎಂ ಸಿದ್ದರಾಮಯ್ಯ ಜಾರ್ಜ್ ಅವರನ್ನು ತಮ್ಮ ದೂತರನ್ನಾಗಿ ಕಳುಹಿಸಿದ್ದಾರೆಯೇ ಎಂಬ ಊಹಾಪೋಹಗಳು ದಟ್ಟವಾಗಿವೆ.
ತುಮಕೂರಿನಲ್ಲಿದ್ದ ಸಿದ್ದರಾಮಯ್ಯ ಅವರಿಗೆ ಶಿವಕುಮಾರ್ ಅವರ ದೆಹಲಿ ಭೇಟಿಯ ಬಗ್ಗೆ ತಿಳಿದಿರಲಿಲ್ಲವಂತೆ, ಡಿಸಿಎಂ ದೆಹಲಿ ಭೇಟಿ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದು ಹೇಳಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ವೀಕ್ಷಕರಾಗಿ ನೇಮಕವಾಗಿದ್ದಾರೆ.
ತುಮಕೂರಿನಲ್ಲಿ ರಾಜ್ಯಮಟ್ಟದ ಕರ್ನಾಟಕ ಕ್ರೀಡಾಕೂಟವನ್ನು ಉದ್ಘಾಟಿಸುವ ಮೊದಲು ಸಿಎಂ ಸಿದ್ದರಾಮಯ್ಯ ಮಾಜಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಮನೆಯಲ್ಲಿ ಏರ್ಪಡಿಸಿದ್ದ ಔತಣಕೂಟದಲ್ಲಿ ಭಾಗವಹಿಸಿದ್ದರು. ನಂತರ ಮಾಜಿ ಸಚಿವ ರಾಜಣ್ಣ ಅವರನ್ನು ಸಂಪುಟಕ್ಕೆ ಮರುಸೇರ್ಪಡೆಗೊಳಿಸುವ ಬಗ್ಗೆ ಹೈಕಮಾಂಡ್ ಜೊತೆ ಮಾತನಾಡುವುದಾಗಿ ಸಿಎಂ ತಿಳಿಸಿದ್ದಾರೆ.
ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ ಜಾರ್ಜ್ ಅವರು ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ 10 ಜನಪಥ್ ನಿವಾಸದಲ್ಲಿ ರಾಹುಲ್ ಅವರೊಂದಿಗೆ ಸುಮಾರು 40 ನಿಮಿಷಗಳ ಕಾಲ ಮಾತುಕತೆ ನಡೆಸಿದರು.
ಕೆ.ಜೆ ಜಾರ್ಜ್ ಅವರು ರಾಜ್ಯದ ರಾಜಕೀಯ ಮತ್ತು ಸಂಪುಟ ಪುನಾರಚನೆಯ ಅಗತ್ಯವನ್ನು ರಾಹುಲ್ ಅವರಿಗೆ ಮನವರಿಕೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. "ಜಾರ್ಜ್ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ವೀಕ್ಷಕರಾಗಿದ್ದಾರೆ... ಆ ಸಂಬಂಧ ಮಾತುಕತೆಗಳು ಸಹ ನಡೆದಿರಬಹುದು" ಎಂದು ಹೇಳಲಾಗುತ್ತಿದೆ.
ಆದರೆ, ಕೆ.ಜೆ.ಜಾರ್ಜ್ ಅವರು ರಾಹುಲ್‌ಗಾಂಧಿ ಅವರನ್ನು ಭೇಟಿ ಮಾಡುವ ಮೊದಲು ಡಿ.ಕೆ.ಶಿವಕುಮಾರ್ ಅವರು ದೆಹಲಿಯಲ್ಲಿ ಜಾರ್ಜ್ ಅವರನ್ನು ಭೇಟಿ ಮಾಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರಾಹುಲ್‌ಗಾಂಧಿ ಅವರೊಂದಿಗೆ ಕೆ.ಜೆ.ಜಾರ್ಜ್ ಅವರು ರಾಜ್ಯ ರಾಜಕೀಯ ಬೆಳವಣಿಗೆ ಕುರಿತು ಚರ್ಚಿಸಿದ್ದಾರೆಯೇ ಎಂಬ ಕುತೂಹಲ ಇದೀಗ ಉಂಟಾಗಿದೆ. ಶಿವಕುಮಾರ್ ದೆಹಲಿಯಲ್ಲಿಯೇ ಇದ್ದು, ಶನಿವಾರವೂ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ.
ಶಿವಕುಮಾರ್ ಅವರು ಸೋನಿಯಾ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಭೇಟಿಯಾಗುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕು.
Advertisement