

ಬೆಂಗಳೂರು: ಮೈಸೂರಿನಲ್ಲಿ ರಹಸ್ಯ ಹೈಟೆಕ್ ಡ್ರಗ್ಸ್ ಘಟಕ ಕಾರ್ಯ ನಿರ್ವಹಿಸುತ್ತಿದ್ದುದನ್ನು ಎನ್'ಸಿಬಿ ಬಯಲುಗೊಳಿಸಿದ್ದು, ಇದರೊಂದಿಗೆ ರಾಜ್ಯದ ಗೃಹ ಸಚಿವರ ಹಾಗೂ ಗೃಹ ಇಲಾಖೆಯ ವೈಫಲ್ಯ ಬಯಲಾಗಿದೆ ಎಂದು ಬಿಜೆಪಿ ಕಿಡಿಕಾರಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಮೈಸೂರಿನಲ್ಲಿ ರಹಸ್ಯ ಹೈಟೆಕ್ ಡ್ರಗ್ಸ್ ಘಟಕ ಕಾರ್ಯ ನಿರ್ವಹಿಸುತ್ತಿದ್ದುದನ್ನು ಎನ್'ಸಿಬಿ ಬಯಲುಗೊಳಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ಮೈಸೂರಿನಲ್ಲಿ ಡ್ರಗ್ಸ್ ದಂಧೆಯ ಜಾಲ, ತಯಾರಿಕಾ ಘಟಕವನ್ನು ಮಹಾರಾಷ್ಟ್ರ ಪೊಲೀಸ್ ಪತ್ತೆ ಮಾಡಿತ್ತು. ರಾಜ್ಯದ ಗೃಹ ಇಲಾಖೆಯ ಅಸಮರ್ಥ್ಯಕ್ಕೆ ಗೃಹ ಸಚಿವ ಪರಮೇಶ್ವರ್ ಅವರೇ ನೇರ ಹೊಣೆ ಎಂದು ಹೇಳಿದ್ದಾರೆ.
ವಿಶೇಷವಾಗಿ ನಮ್ಮ ಯುವಜನತೆ, ಶಾಲಾ ಮಕ್ಕಳು ಕೂಡ ಈ ಡ್ರಗ್ಸ್ ನಂತಹ ಅಪಾಯಕಾರಿ ಜಾಲಕ್ಕೆ ಬಲಿಯಾಗುತ್ತಿರುವ ವರದಿಗಳು ಪದೇ ಪದೇ ಹೊರಬರುತ್ತಿದ್ದರೂ, ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ, ಅಸಾಮರ್ಥ್ಯ, ವೈಫಲ್ಯಗಳು ಅದರ ಆದ್ಯತೆ ಮತ್ತು ಕಾಳಜಿಗಳನ್ನು ಬಯಲು ಮಾಡಿದೆ. ಪರಿಸ್ಥಿತಿ ಕೈಮೀರುವ ಮುನ್ನ, ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು, ನಮ್ಮ ಪೊಲೀಸ್ ಇಲಾಖೆಗೆ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡಿ, ರಾಜ್ಯದಲ್ಲಿ ಡ್ರಗ್ಸ್ ದಂಧೆಯನ್ನು ಮಟ್ಟ ಹಾಕಬೇಕು ಎಂದು ಆಗ್ರಹಿಸಿದ್ದಾರೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾತನಾಡಿ, ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ನಮ್ಮ ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಇದರ ಬಗ್ಗೆ ಪ್ರಸ್ತಾಪ ಮಾಡಿದ ಸಂದರ್ಭದಲ್ಲಿ "ಡ್ರಗ್ಸ್ ದಂಧೆ ಎಲ್ಲ ರಾಜ್ಯಗಳಲ್ಲಿಯೂ ಇದೆ" ಎಂದು ಇದರ ಗಂಭೀರತೆ ಅರಿಯದೆ ಗೃಹ ಸಚಿವ ಪರಮೇಶ್ವರ್ ಅವರು ಉಡಾಫೆ ಉತ್ತರ ಕೊಟ್ಟಿದ್ದರು. ಶೌರ್ಯ, ಸಾಹಸ, ದಕ್ಷತೆಗೆ ಹೆಸರುವಾಸಿಯಾಗಿದ್ದ ಕರ್ನಾಟಕ ಪೊಲೀಸ್ ಇಲಾಖೆ ಕಾಂಗ್ರೆಸ್ ಸರ್ಕಾರದ ಅಸಮರ್ಥತೆಯಿಂದ ನಿತ್ರಾಣವಾಗಿದೆ.
ಕರ್ನಾಟಕದಲ್ಲಿ ನಡೆಯುತ್ತಿರುವ ಡ್ರಗ್ಸ್ ದಂಧೆ ಪತ್ತೆ ಹಚ್ಚಲು, ಡ್ರಗ್ಸ್ ದಂಧೆಕೋರರನ್ನು ಹಾಕಲು ಮಹಾರಾಷ್ಟ ಪೊಲೀಸರು ಬರಬೇಕಾದರೆ ಕರ್ನಾಟಕದ ಪೊಲೀಸ್ ಇಲಾಖೆ ಏನು ಮಾಡುತ್ತಿದೆ? ರಾಜ್ಯದ ಗುಪ್ತಚರ ಇಲಾಖೆ ಏನು ಮಾಡುತ್ತಿದೆ?
ಯುವ ಜನಾಂಗದ ಭವಿಷ್ಯಕ್ಕೆ ಮಾರವಾಗಿರುವ ಈ ಡ್ರಗ್ಸ್ ದಂಧೆಯನ್ನ ಅತ್ಯಂತ ಗಂಭೀರವಾಗಿ ಪರಿಗಣಿಸಿ ಇದಕ್ಕೆ ಕಡಿವಾಣ ಹಾಕಲು ಕೂಡಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
Advertisement