

ಬೆಳಗಾವಿ/ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಮಧ್ಯೆ ಡಿನ್ನರ್ ಪಾಲಿಟಿಕ್ಸ್ ಜೋರಾಗಿದೆ. ಮೊನ್ನೆ ಬಮುಲ್ ಅಧ್ಯಕ್ಷರಾಗಿರುವ ಮುಖ್ಯಮಂತ್ರಿಗಳ ತಮ್ಮ ಡಿ.ಕೆ. ಸುರೇಶ್ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಆಯ್ದ ಕಾಂಗ್ರೆಸ್ ಶಾಸಕರಿಗೆ ಔತಣಕೂಟ ಏರ್ಪಡಿಸಿದ್ದರು.
ಇದರ ಬೆನ್ನಲ್ಲೇ ಬೆಳಗಾವಿ ಪ್ರವಾಸ ಕೈಗೊಂಡ ಡಿ ಕೆ ಶಿವಕುಮಾರ್ ನಿನ್ನೆ ಗುರುವಾರ ರಾತ್ರಿ ಕಾಂಗ್ರೆಸ್ ನ ಹಾಲಿ, ಮಾಜಿ ಶಾಸಕರು, ಸಂಸದರು, ಸಚಿವರುಗಳಿಗೆ ಡಿನ್ನರ್ ಮೀಟಿಂಗ್ ಆಯೋಜಿಸಿದ್ದರು. ಮೊನ್ನೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಸ ಮುಗಿಸಿ ನಿನ್ನೆ ಕಿತ್ತೂರು ಕರ್ನಾಟಕ ಭಾಗಕ್ಕೆ ತೆರಳಿದ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬೆಳಗಾವಿಯ ಸುವರ್ಣ ಸೌಧದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಈ ಸಭೆಯಲ್ಲಿ ಬಿಜೆಪಿ ಶಾಸಕರು ಕೂಡ ಭಾಗವಹಿಸಿದ್ದರು. ರಾಜ್ಯದ ಜಿಲ್ಲೆಗಳ ಬರದ ಬಗ್ಗೆ ಕೂಡ ಚರ್ಚೆಗಳು ನಡೆಯಿತು.
ಗಮನ ಸೆಳೆದ ಡಿನ್ನರ್ ಮೀಟಿಂಗ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಳಗಾವಿಯಲ್ಲಿ ಪ್ರಾದೇಶಿಕ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಂತರ ಕಾಂಗ್ರೆಸ್ ಹಾಲಿ ಮತ್ತು ಮಾಜಿ ಶಾಸಕರು, ಸಂಸದರು, ಸಚಿವರುಗಳಿಗೆ ಆಯೋದಿಸಿ ಔತಣಕೂಟ ಸದ್ದು ಮಾಡಿದೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರನ್ನು ಒಟ್ಟುಗೂಡಿಸಿ ಆಡಳಿತಾತ್ಮಕ ಕಾರ್ಯಗಳನ್ನು ಸುಗಮಗೊಳಿಸುವುದರ ಜೊತೆಗೆ ಪಕ್ಷದ ಸಮನ್ವಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ಕಾರ್ಯತಂತ್ರದ ಸಭೆಯನ್ನು ಆಯೋಜಿಸಲಾಗಿತ್ತು ಎಂದು ಹೇಳಲಾಗುತ್ತಿದೆ.
ಕಿತ್ತೂರು ಕರ್ನಾಟಕ, ಉತ್ತರ ಕರ್ನಾಟಕ ಭಾಗದ ಶಾಸಕರಿಗೆ ಡಿನ್ನರ್ ಮೀಟಿಂಗ್ ನಡೆಸಿದ್ದು ನಂತರ ಗ್ರೂಪ್ ಫೋಟೋ ತೆಗೆಸಿದ್ದು ವಿಶೇಷ ಗಮನ ಸೆಳೆದಿದೆ. ಈ ಭಾಗದ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಿಎಂ ಡಿ ಕೆ ಶಿವಕುಮಾರ್ ಬಳಸಿದ ತಂತ್ರ ಎಂದು ವಿಶ್ಲೇಷಿಸಲಾಗುತ್ತಿದೆ. ನಾಯಕರಿಗೆ ಡಿನ್ನರ್ ಪಾರ್ಟಿ ಆಯೋಜಿಸಿ ಪಕ್ಷದಲ್ಲಿ ಒಗ್ಗಟ್ಟಿನ ಮಂತ್ರದ ಸಂದೇಶ ರವಾನಿಸಲು ಈ ಹೆಜ್ಜೆ ಇಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಉತ್ತರ ಕರ್ನಾಟಕ ಭಾಗದಿಂದಲೂ ಹಲವು ಶಾಸಕರು ಮಂತ್ರಿ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಅವರಿಗೆ ಡಿನ್ನರ್ ಮೀಟಿಂಗ್ ನಲ್ಲಿ ಸಚಿವ ಸ್ಥಾನ ಸಿಗದಿದ್ದರೆ ಬೇಸರಪಟ್ಟುಕೊಳ್ಳುವ ಹಾಗಿಲ್ಲ ಎಂಬ ಸಂದೇಶ ಡಿ ಕೆ ಶಿವಕುಮಾರ್ ಅವರದ್ದಾಗಿರಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.