

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮುಂದುವರಿದಿರುವ ಬಣ ಬಡಿದಾಟ ಮತ್ತು ನಾಯಕತ್ವದ ಗೊಂದಲದ ನಡುವೆ, 2028ರ ವಿಧಾನಸಭೆ ಚುನಾವಣೆಗೆ ಎನ್‌ಡಿಎ ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿ ರೇಸ್‌ನಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (ಎಚ್‌ಡಿಕೆ) ಅವರ ಹೆಸರು ಮುನ್ನೆಲೆಗೆ ಬಂದಿದ್ದು, ಈ ಬೆಳವಣಿಗೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗಳು ಜೋರಾಗುವಂತೆ ಮಾಡಿದೆ.
ರಾಜ್ಯ ರಾಜಕೀಯಕ್ಕೆ ಸೂಕ್ತ ಸಮಯದಲ್ಲಿ ಮರಳುವ ಬಗ್ಗೆ ಕುಮಾರಸ್ವಾಮಿ ನೀಡಿರುವ ಸುಳಿವು, ಬಿಜೆಪಿ-ಜೆಡಿಎಸ್ ಮೈತ್ರಿಯ ಹೊಸ ರಾಜಕೀಯ ಸಮೀಕರಣಗಳಿಗೆ ಕಾರಣವಾಗಿದ್ದು, ಮುಂಬರುವ ಚುನಾವಣೆಯ ನಾಯಕತ್ವದ ಲೆಕ್ಕಾಚಾರಗಳ ಬಗ್ಗೆ ಕುತೂಹಲ ಹೆಚ್ಚಿಸಿದೆ.
ರಾಜ್ಯ ಬಿಜೆಪಿಯಲ್ಲಿ ಮುಂದುವರಿದಿರುವ ಆಂತರಿಕ ಭಿನ್ನಾಭಿಪ್ರಾಯ, ಬಣ ರಾಜಕೀಯ ಹಾಗೂ ನಾಯಕತ್ವದ ಗೊಂದಲದ ನಡುವೆ ಜೆಡಿಎಸ್, ಕುಮಾರಸ್ವಾಮಿಯವರನ್ನು ಮೈತ್ರಿಕೂಟದ ಪ್ರಮುಖ ಮುಖವಾಗಿ ಬಿಂಬಿಸಲು ಪ್ರಯತ್ನಿಸುತ್ತಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ನಡುವೆ ಉತ್ತಮ ಸಮನ್ವಯ ಸಾಧಿಸಲು ಶೀಘ್ರದಲ್ಲೇ ಸಮನ್ವಯ ಸಮಿತಿ ರಚನೆಯಾಗುವ ಸಾಧ್ಯತೆಯಿದ್ದು, ಈ ಸಂಬಂಧ ಕುಮಾರಸ್ವಾಮಿ ಇತ್ತೀಚೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ರಾಜ್ಯ ರಾಜಕೀಯದಲ್ಲಿ ತಮ್ಮ ಪ್ರಭಾವವನ್ನು ಮತ್ತಷ್ಟು ಬಲಪಡಿಸುವ ಜೊತೆಗೆ ಬಿಜೆಪಿ ಹೈಕಮಾಂಡ್‌ನ ವಿಶ್ವಾಸವನ್ನೂ ಉಳಿಸಿಕೊಳ್ಳಲು ಕುಮಾರಸ್ವಾಮಿ ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಇರುವ ಉತ್ತಮ ಬಾಂಧವ್ಯವು ಜೆಡಿಎಸ್‌ಗೆ ರಾಜಕೀಯವಾಗಿ ನೆರವಾಗಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.
ಇದರ ಜೊತೆಗೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಿಬಿನ್ ಅವರೊಂದಿಗೂ ಕುಮಾರಸ್ವಾಮಿ ಉತ್ತಮ ಸಂಬಂಧ ಬೆಳೆಸಿಕೊಂಡಿದ್ದಾರೆ. ಜೂನ್ 18ರಂದು ನಡೆದ ಕರ್ನಾಟಕ ವಿಧಾನ ಪರಿಷತ್‌ನ ಏಳು ಸ್ಥಾನಗಳ ಚುನಾವಣೆಯಲ್ಲಿ ಎನ್‌ಡಿಎ ಶಾಸಕರ ಅಡ್ಡಮತದಾನದ ಕುರಿತು ಅವರು ನಿತಿನ್ ನಿಬಿನ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ.
ಕಳೆದ ಕೆಲವು ತಿಂಗಳಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಆಕ್ರಮಣಕಾರಿ ಧೋರಣೆ ಅನುಸರಿಸುತ್ತಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯ ಬಿಡದಿ ಟೌನ್‌ಶಿಪ್ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿಯೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ಈ ಮೂಲಕ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡಲು ಅವರು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ.
ಜೆಡಿಎಸ್ ಅನ್ನು ಕೇವಲ ಹಳೆಯ ಮೈಸೂರು ಭಾಗದ ಒಕ್ಕಲಿಗರ ಪಕ್ಷ ಎಂಬ ಹಣೆಪಟ್ಟಿಯಿಂದ ಹೊರತರುವ ಪ್ರಯತ್ನವೂ ಕುಮಾರಸ್ವಾಮಿ ಮಾಡುತ್ತಿದ್ದಾರೆ.
ರಾಜ್ಯದಲ್ಲಿ ಬರ ಮತ್ತು ಪ್ರವಾಹ ಪರಿಸ್ಥಿತಿಯನ್ನು ಅಧ್ಯಯನ ಮಾಡಲು ಬಿಜೆಪಿಗಿಂತ ಮೊದಲೇ ಜೆಡಿಎಸ್ ಸಮಿತಿಗಳನ್ನು ರಚಿಸಿರುವುದು ಇದಕ್ಕೆ ಉದಾಹರಣೆಯಾಗಿದೆ. ಈ ಸಮಿತಿಗಳು ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ರೈತರ ಹಾಗೂ ಜನರ ಸಮಸ್ಯೆಗಳ ಕುರಿತು ಮಾಹಿತಿ ಸಂಗ್ರಹಿಸುತ್ತಿವೆ.
ಈ ಅಭಿಯಾನದ ಭಾಗವಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೋಮವಾರದಿಂದ ಮೂರು ದಿನಗಳ ಕಾಲ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಬರ ಅಧ್ಯಯನ ಸಮಿತಿಯ ಮುಖ್ಯಸ್ಥ ಬಂಡೆಪ್ಪ ಕಾಶೆಂಪುರ ಸೇರಿದಂತೆ ಹಿರಿಯ ನಾಯಕರ ತಂಡ ಅವರೊಂದಿಗೆ ಇರಲಿದೆ.
ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿ, ಅವರಿಗೆ ಸಿಗಬೇಕಾದ ಪರಿಹಾರಕ್ಕಾಗಿ ಹೋರಾಟ ಮುಂದುವರಿಸುವುದಾಗಿ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಅಧ್ಯಯನ ಸಮಿತಿಗಳು ಸಲ್ಲಿಸುವ ವರದಿಯನ್ನು ಜೆಡಿಎಸ್ ಪ್ರತ್ಯೇಕವಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿ, ರಾಜ್ಯಕ್ಕೆ ಅಗತ್ಯವಿರುವ ಆರ್ಥಿಕ ನೆರವು ನೀಡುವಂತೆ ಮನವಿ ಮಾಡುವ ಸಾಧ್ಯತೆಯೂ ಇದೆ.
ಇದೇ ವೇಳೆ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಕೂಡ ಮಂಡ್ಯ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳು ರಾಜ್ಯಾದ್ಯಂತ ಜನಪರ ಹೋರಾಟಗಳನ್ನು ತೀವ್ರಗೊಳಿಸಲು ಮುಂದಾಗಿವೆ.
ಈ ಬೆಳವಣಿಗೆಗಳ ನಡುವೆ, 2028ರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಚರ್ಚೆ ಈಗಾಗಲೇ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ.