

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಯಾವುದೇ ಭಿನ್ನಾಭಿಪ್ರಾಯ ಅಥವಾ ಗೊಂದಲ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನನ್ನ ಮತ್ತು ಸಿದ್ದರಾಮಯ್ಯ ಅವರ ನಡುವೆ ಭಿನ್ನಾಭಿಪ್ರಾಯವಿದೆ ಎಂಬ ಭಾವನೆ ಮೂಡಿಸಲು ಕೆಲವರು ಉದ್ದೇಶಪೂರ್ವಕವಾಗಿ ಪ್ರಯತ್ನಿಸುತ್ತಿದ್ದಾರೆ. ಅದರಿಂದ ರಾಜಕೀಯ ಲಾಭ ಪಡೆಯುವ ಲೆಕ್ಕಾಚಾರ ಅವರದ್ದಾಗಿದೆ. ಆದರೆ, ಇಂತಹ ಪ್ರಯತ್ನಗಳು ಹೆಚ್ಚು ಕಾಲ ಯಶಸ್ವಿಯಾಗುವುದಿಲ್ಲ" ಎಂದು ಹೇಳಿದರು.
ನಮ್ಮದು ಸುಮಾರು 30 ವರ್ಷಗಳ ರಾಜಕೀಯ ಹಾಗೂ ವೈಯಕ್ತಿಕ ಸಂಬಂಧ. ನಮ್ಮಿಬ್ಬರ ನಡುವೆ ಯಾವುದೇ ಗೊಂದಲ ಇಲ್ಲ. ನಾನು ಮಾತನಾಡಿದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರ ಹೆಸರನ್ನೇ ಉಲ್ಲೇಖಿಸಿರಲಿಲ್ಲ. ಅದಕ್ಕೆ ಅವರ ಹೆಸರನ್ನು ಸೇರಿಸಿದ್ದು ಮಾಧ್ಯಮವೇ" ಎಂದು ಸ್ಪಷ್ಟನೆ ನೀಡಿದರು.
ಕಾಂಗ್ರೆಸ್ ನಾಯಕರು ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ನಡೆದ ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆ ಕುರಿತು ನಮ್ಮ ಅಭಿಪ್ರಾಯವನ್ನು ಪಕ್ಷದ ಹೈಕಮಾಂಡ್‌ಗೆ ತಿಳಿಸಿದ್ದೇವೆ. ಅಂತಿಮ ತೀರ್ಮಾನವನ್ನು ಪಕ್ಷದ ವರಿಷ್ಠರು ಕೈಗೊಳ್ಳಲಿದ್ದಾರೆ" ಎಂದರು.
ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ಶೀಘ್ರದಲ್ಲೇ ನಡೆಯುವ ವಿಶ್ವಾಸ ವ್ಯಕ್ತಪಡಿಸಿದ ಅವರು, ಹೊಸ ಮುಖಗಳಿಗೆ ಅವಕಾಶ ನೀಡುವುದರಿಂದ ಪಕ್ಷ ಮತ್ತಷ್ಟು ಬಲಿಷ್ಠವಾಗಲಿದೆ. ಅವರಿಗೆ ಸಚಿವ ಸ್ಥಾನ ನೀಡುವುದು ಭವಿಷ್ಯದಲ್ಲಿ ಪಕ್ಷಕ್ಕೆ ದೊಡ್ಡ ಆಸ್ತಿಯಾಗಲಿದೆ ಎಂದು ಹೇಳಿದರು.
ಜೊತೆಗೆ, ಬೆಳಗಾವಿ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಮತ್ತೊಂದು ಸ್ಥಾನ ನೀಡಬೇಕು ಎಂಬ ಬೇಡಿಕೆಯನ್ನು ಪುನರುಚ್ಚರಿಸಿದ ಸತೀಶ್ ಜಾರಕಿಹೊಳಿ, ಜಿಲ್ಲೆಯ ಸಮರ್ಪಕ ಪ್ರತಿನಿಧಿತ್ವಕ್ಕೆ ಆದ್ಯತೆ ನೀಡುವಂತೆ ಒತ್ತಾಯಿಸಿದರು.