

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಹಲವು ದಿನಗಳ ಕುತೂಹಲಕ್ಕೆ ಮಂಗಳವಾರ ತೆರೆ ಬೀಳುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಇಂದು (ಮಂಗಳವಾರ) ನವದೆಹಲಿಯಲ್ಲಿ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಲಿದ್ದು, ಈ ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಅಂತಿಮ ಒಪ್ಪಿಗೆ ದೊರೆಯುವ ನಿರೀಕ್ಷೆಯಿದೆ.
ಮೂಲಗಳ ಪ್ರಕಾರ ಬೆಳಿಗ್ಗೆ 11.30ಕ್ಕೆ ಸಭೆ ನಿಗದಿಯಾಗಿದ್ದು, ಈ ವೇಳೆ ಸಚಿವರ ಪಟ್ಟಿಗೆ ಅಂತಿಮ ಮುದ್ರೆ ಬೀಳುವ ಸಾಧ್ಯತೆ ಇದೆ.
ಇತ್ತೀಚೆಗೆ ಮೂವರು ನಾಯಕರು ಪ್ರತ್ಯೇಕವಾಗಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದರು. ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೂ ಚರ್ಚೆ ನಡೆಸಿ, ರಾಹುಲ್ ಗಾಂಧಿ ಸೂಚನೆಯಂತೆ ಪಟ್ಟಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ ಎನ್ನಲಾಗಿದೆ.
ಪಕ್ಷದ ಚುನಾವಣಾ ತಂತ್ರಗಾರ ಸುನಿಲ್ ಕನುಗೋಲು ಅವರ ಸಲಹೆಯ ಮೇರೆಗೆ ಸಚಿವ ಸಂಪುಟಕ್ಕೆ ಹೊಸ ಮುಖಗಳಿಗೆ ಆದ್ಯತೆ ನೀಡುವ ಬಗ್ಗೆ ರಾಹುಲ್ ಗಾಂಧಿ ಒಲವು ತೋರಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಒಂದು-ಎರಡು ದಿನಗಳಲ್ಲಿ ಪ್ರಮಾಣ ವಚನ ಸಾಧ್ಯ
ಮುಖ್ಯಮಂತ್ರಿಗಳ ಕಚೇರಿಯಿಂದ ರಾಜಭವನಕ್ಕೂ ಮಾಹಿತಿ ರವಾನೆಯಾಗಿದ್ದು, ಒಂದು ಅಥವಾ ಎರಡು ದಿನಗಳಲ್ಲಿ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
20 ಸ್ಥಾನಗಳು ಭರ್ತಿ; ಇಬ್ಬರು ಮಹಿಳೆಯರಿಗೆ ಅವಕಾಶ?
ಸಚಿವ ಸಂಪುಟದಲ್ಲಿರುವ ಎಲ್ಲಾ 20 ಖಾಲಿ ಸ್ಥಾನಗಳನ್ನು ಭರ್ತಿ ಮಾಡಿ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚಿಸುವ ಸಾಧ್ಯತೆ ಇದೆ. ಈ ಪೈಕಿ ಇಬ್ಬರು ಮಹಿಳೆಯರಿಗೆ ಅವಕಾಶ ನೀಡುವ ಸಾಧ್ಯತೆ ಇದ್ದು, ಮಾಜಿ ಸಚಿವೆ ಹಾಗೂ ಎಂಎಲ್‌ಸಿ ಉಮಾಶ್ರೀ ಅವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ. ಅವರು ಕಳೆದ ಕೆಲವು ದಿನಗಳಿಂದ ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ.
ಸಭಾಧ್ಯಕ್ಷರ ಹುದ್ದೆಗೂ ಚರ್ಚೆ
ಸಚಿವ ಸಂಪುಟ ವಿಸ್ತರಣೆಯ ಜೊತೆಗೆ ವಿಧಾನಸಭೆಯ ಸಭಾಧ್ಯಕ್ಷರ ನೇಮಕ ಕುರಿತೂ ತೀರ್ಮಾನವಾಗುವ ಸಾಧ್ಯತೆ ಇದೆ. ಹಿರಿಯ ಕಾಂಗ್ರೆಸ್ ನಾಯಕರು ಎಚ್.ಕೆ. ಪಾಟೀಲ್ ಮತ್ತು ಬಿ.ಆರ್. ಪಾಟೀಲ್ ಅವರ ಹೆಸರುಗಳು ಈ ಹುದ್ದೆಗೆ ಪರಿಗಣನೆಯಲ್ಲಿವೆ ಎಂದು ಮೂಲಗಳು ತಿಳಿಸಿವೆ.
ದೆಹಲಿ ಸೇರಿರುವ ಸಚಿವಾಕಾಂಕ್ಷಿಗಳು
ಹೈಕಮಾಂಡ್ ಸಚಿವರ ಪಟ್ಟಿಯನ್ನು ಅಂತಿಮಗೊಳಿಸುತ್ತಿದೆ ಎಂಬ ಮಾಹಿತಿ ಹೊರಬಿದ್ದ ಬೆನ್ನಲ್ಲೇ ಹಲವು ಸಚಿವಾಕಾಂಕ್ಷಿ ಶಾಸಕರು ದೆಹಲಿಯಲ್ಲೇ ಉಳಿದುಕೊಂಡಿದ್ದಾರೆ. ಇನ್ನೂ ಕೆಲವರು ಸೋಮವಾರ ಸಂಜೆ ದೆಹಲಿಗೆ ತೆರಳಿದ್ದಾರೆ.
ಆರ್.ವಿ. ದೇಶಪಾಂಡೆ, ಬಸವರಾಜ ರಾಯರೆಡ್ಡಿ, ಆರ್.ಬಿ. ತಿಮ್ಮಾಪುರ ಸೇರಿದಂತೆ ಸುಮಾರು 30ರಿಂದ 40 ಕಾಂಗ್ರೆಸ್ ಶಾಸಕರು ದೆಹಲಿಯಲ್ಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಜನ್ಮದಿನದ ಶುಭಾಶಯ ತಿಳಿಸುವ ನೆಪದಲ್ಲಿ ಅವರು ಸಚಿವ ಸ್ಥಾನಕ್ಕಾಗಿ ತಮ್ಮ ಹಕ್ಕು ಮಂಡಿಸುತ್ತಿದ್ದಾರೆ ಎನ್ನಲಾಗಿದೆ.
ಸಚಿವ ಸ್ಥಾನ ಸಿಗದವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ?
ಸಚಿವ ಸ್ಥಾನ ಸಿಗದೇ ನಿರಾಸೆಗೊಳ್ಳುವ ನಾಯಕರನ್ನು ಸಮಾಧಾನಪಡಿಸಲು ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನಗಳು ಹಾಗೂ ಪಕ್ಷದ ಪ್ರಮುಖ ಹುದ್ದೆಗಳನ್ನು ನೀಡುವ ಯೋಜನೆಯನ್ನೂ ಕಾಂಗ್ರೆಸ್ ಹೈಕಮಾಂಡ್ ರೂಪಿಸಿದೆ ಎಂದು ಮೂಲಗಳು ಹೇಳಿವೆ.