

ಬೆಂಗಳೂರು/ಮೈಸೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯ ಸಿದ್ಧತೆಯಲ್ಲಿ ತೊಡಗಿರುವ ಬೆನ್ನಲ್ಲೇ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬ ಘೋಷಣೆ ಕಾಂಗ್ರೆಸ್‌ನಲ್ಲಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜಕೀಯದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದೆ ಎಂಬ ಅವರ ಹೇಳಿಕೆಯೂ ಪಕ್ಷದೊಳಗೆ ಹಾಗೂ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ಬದಲಾಗುತ್ತಿರುವ ಕರ್ನಾಟಕದ ರಾಜಕೀಯ ಪರಿಸ್ಥಿತಿಯಲ್ಲಿ ತಮ್ಮ ಪ್ರಸ್ತುತತೆಯನ್ನು ಉಳಿಸಿಕೊಳ್ಳುವ ಪ್ರಯತ್ನವಾಗಿ ಸಿದ್ದರಾಮಯ್ಯ ಈ ಘೋಷಣೆ ಮಾಡಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ಈಗ ಎಲ್ಲರ ಗಮನ ಸಚಿವ ಸಂಪುಟ ವಿಸ್ತರಣೆಯತ್ತ ನೆಟ್ಟಿದ್ದು, ಸಿದ್ದರಾಮಯ್ಯ ತಮ್ಮ ಆಪ್ತ ಶಾಸಕರಿಗೆ ಸಚಿವ ಸ್ಥಾನ ಕೊಡಿಸುವಲ್ಲಿ ಯಶಸ್ವಿಯಾಗುತ್ತಾರೆಯೇ ಎಂಬ ಕುತೂಹಲ ಹೆಚ್ಚಿದೆ. ಭಾನುವಾರ ಅವರ ನಿವಾಸದಲ್ಲಿ ಹಾಗೂ ನಿನ್ನೆ ಸೋಮವಾರ ದೆಹಲಿಯ ಕರ್ನಾಟಕ ಭವನದಲ್ಲಿ ಹಲವು ಶಾಸಕರು ಸಿದ್ದರಾಮಯ್ಯ ಸುತ್ತ ಸೇರಿದ್ದರಿಂದ, ಅವರು ಇನ್ನೂ ಕಾಂಗ್ರೆಸ್‌ನಲ್ಲಿ ಪ್ರಭಾವಿ ನಾಯಕ ಎಂಬ ಸಂದೇಶ ರವಾನೆಯಾಗಿದೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಿದ್ದರಾಮಯ್ಯ ಅವರ ಹೇಳಿಕೆ ಕಾಂಗ್ರೆಸ್ ಹೈಕಮಾಂಡ್‌ಗೆ ಎಚ್ಚರಿಕೆ ನೀಡುವ ಪ್ರಯತ್ನ ಎಂದು ಟೀಕಿಸಿದರು. ನನ್ನನ್ನು ಕಡೆಗಣಿಸಿದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳುತ್ತದೆ ಎಂಬ ಸಂದೇಶವನ್ನು ಹೈಕಮಾಂಡ್‌ಗೆ ರವಾನಿಸಲು ಈ ನಾಟಕ ಮಾಡುತ್ತಿದ್ದಾರೆ ಎಂದು ಅವರು ವ್ಯಂಗ್ಯವಾಡಿದರು.
ಮುಡಾ ಹಗರಣವನ್ನು ಉಲ್ಲೇಖಿಸಿದ ಅಶೋಕ್, ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಭ್ರಷ್ಟಾಚಾರ ಶೇ.60ರಷ್ಟು ಹೆಚ್ಚಾಗಿತ್ತು ಎಂದು ಆರೋಪಿಸಿದರು. ಕಳೆದ ಹತ್ತು ವರ್ಷಗಳಿಂದಲೂ ಸಿದ್ದರಾಮಯ್ಯ ನಿವೃತ್ತಿ ಘೋಷಿಸುತ್ತಿದ್ದಾರೆ, ಬಳಿಕ ಕಾರ್ಯಕರ್ತರ ಒತ್ತಾಯದ ನೆಪವೊಡ್ಡಿ ಮತ್ತೆ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂದು ಟೀಕಿಸಿದರು.
ರಾಜ್ಯದ ಜನರು ಅವರ ಮಾತನ್ನು ನಂಬುವುದಿಲ್ಲ. ಅವರು ಸ್ಪರ್ಧಿಸದಿದ್ದರೆ ಅವರ ಪುತ್ರ ಡಾ. ಯತೀಂದ್ರ ಸ್ಪರ್ಧಿಸುವುದಿಲ್ಲವೇ? ಭ್ರಷ್ಟಾಚಾರದ ಬಗ್ಗೆ ಮಾತನಾಡುವವರು ಅವರ ಕುಟುಂಬದ ಯಾರೂ ಚುನಾವಣೆಗೆ ಸ್ಪರ್ಧಿಸಬಾರದು ಎಂದು ಅಶೋಕ್ ಹೇಳಿದರು.
ಇನ್ನೊಂದೆಡೆ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗಲು ನೀಡಿರುವ ಕಾರಣ ಶೇ.100ರಷ್ಟು ಸತ್ಯ. ಹಣದ ಪ್ರಭಾವ ಹೆಚ್ಚಾಗಿರುವುದರಿಂದ ರಾಜಕೀಯ ಹದಗೆಟ್ಟಿದೆ ಎಂದು ಹೇಳಿದರು.
ಕಾಂಗ್ರೆಸ್ ಬಲವಾಗಿರಬೇಕಾದರೆ ಸಿದ್ದರಾಮಯ್ಯ ಅಗತ್ಯ. ಅವರಿಲ್ಲದೆ ಪಕ್ಷಕ್ಕೆ ಕಷ್ಟವಾಗಲಿದೆ. ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿಯಾದರೂ, ರಾಜ್ಯಸಭೆ ಸದಸ್ಯರಾಗಿ ರಾಷ್ಟ್ರೀಯ ಮಟ್ಟದಲ್ಲಿ ಪ್ರಮುಖ ಪಾತ್ರ ವಹಿಸಬಹುದು ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಅಭಿಪ್ರಾಯಪಟ್ಟರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ, ಸಿದ್ದರಾಮಯ್ಯ ಚುನಾವಣಾ ರಾಜಕೀಯದಿಂದ ನಿವೃತ್ತಿಯಾದರೂ ಕಾಂಗ್ರೆಸ್‌ನ್ನು ಬಲಪಡಿಸುವ ಕೆಲಸದಲ್ಲಿ ಸಕ್ರಿಯರಾಗಿರಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಡಿ ಕೆ ಶಿವಕುಮಾರ್ ಬಣದ ಶಾಸಕರೊಬ್ಬರು, 2028ರ ವಿಧಾನಸಭೆ ಚುನಾವಣೆವರೆಗೆ ಸಿದ್ದರಾಮಯ್ಯ ಅವರನ್ನು ತೃಪ್ತಿಯಾಗಿರಿಸುವ ಪ್ರಯತ್ನ ನಡೆಯಲಿದ್ದು, ಅದರ ಭಾಗವಾಗಿಯೇ ಯತೀಂದ್ರ ಅವರಿಗೆ ಸಚಿವ ಸ್ಥಾನ ನೀಡುವ ಚರ್ಚೆ ನಡೆದಿದೆ ಎಂದು ಹೇಳಿದರು.