

ಖಾತೆ ಹಂಚಿಕೆ ಕುರಿತು ಅಸಮಾಧಾನಗೊಂಡಿರುವ ಕರ್ನಾಟಕದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಚಿವ ರಾಮಲಿಂಗಾ ರೆಡ್ಡಿ ಅವರು ಇಂದು ಶುಕ್ರವಾರ ಅಧಿಕಾರ ವಹಿಸಿಕೊಂಡ 48 ಗಂಟೆಯೊಳಗೆ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿರುವುದಾಗಿ ಘೋಷಿಸಿದರು.
ತಮಗೆ ಮೂರು ವರ್ಷಗಳ ಹಿಂದೆಯೇ ಬೆಂಗಳೂರು ಅಭಿವೃದ್ಧಿ ಖಾತೆ ನೀಡುವುದಾಗಿ ಭರವಸೆ ನೀಡಲಾಗಿತ್ತು ಎಂದು ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ, "ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ನಾನು ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಆದ್ದರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಅಂಗೀಕರಿಸುವಂತೆ ವಿನಂತಿಸುತ್ತೇನೆ. ನಾನು ಶಾಸಕನಾಗಿಯೂ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿಯೂ ಮುಂದುವರೆಯುತ್ತೇನೆ" ಎಂದು ಹೇಳಿದ್ದಾರೆ.
ಯಾರ ಮೇಲೂ ಕೋಪವಿಲ್ಲ, ಕಾಂಗ್ರೆಸ್‌ನಲ್ಲೇ ಇರ್ತೇನೆ
ನನಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲಾಗಲಿ ಅಥವಾ ಸಿದ್ದರಾಮಯ್ಯ ಅವರ ಮೇಲಾಗಲಿ ಯಾವುದೇ ವೈಯಕ್ತಿಕ ಕೋಪವಿಲ್ಲ. ನಾನು ಯಾವ ಕಾರಣಕ್ಕಾಗಿ ರಾಜೀನಾಮೆ ನೀಡಿದ್ದೇನೆ ಎಂಬ ಸತ್ಯ ಜನರಿಗೆ ಗೊತ್ತಾಗಬೇಕಷ್ಟೇ. ನಾನು ಕಳೆದ 53 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಒಬ್ಬ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಪಕ್ಷ ನನಗೆ ಸಾಕಷ್ಟು ಅವಕಾಶಗಳನ್ನು ಮಾಡಿಕೊಟ್ಟಿದೆ. ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆಯೇ ಹೊರತು, ಕಾಂಗ್ರೆಸ್ ಪಕ್ಷಕ್ಕಲ್ಲ. ನನ್ನ ಜೀವನದಲ್ಲಿ ಎಂದಿಗೂ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿಲ್ಲ, ಮುಂದೆಯೂ ನೀಡುವುದಿಲ್ಲ ಎಂದು ರಾಮಲಿಂಗಾ ರೆಡ್ಡಿ ನುಡಿದರು.
ಆತ್ಮಸಾಕ್ಷಿ ಉಲ್ಲೇಖಿಸಿದ ರಾಮಲಿಂಗಾ ರೆಡ್ಡಿ
ಈ ಹಿಂದೆ ನೀಡಿದ್ದ ಭರವಸೆ ಈಡೇರದಿರುವ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ಹೊರಹಾಕಿರುವ ರಾಮಲಿಂಗಾ ರೆಡ್ಡಿ, ನಾನಾಗಿ ಬೆಂಗಳೂರು ಅಭಿವೃದ್ಧಿ ಖಾತೆ ಕೇಳಿರಲಿಲ್ಲ. ಆದರೂ 2023ರಲ್ಲಿ ಡಿಕೆ ಶಿವಕುಮಾರ್ ಹಾಗೂ ಅವರ ಸಹೋದರ ಡಿಕೆ ಸುರೇಶ್ ನನ್ನ ಮನೆಗೆ ಬಂದು ಭರವಸೆ ನೀಡಿದ್ದರು. ಎರಡೂವರೆ ವರ್ಷದ ಬಳಿಕ ಸಿಎಂ ಆದಾಗ ನಿಮಗೇ ಆ ಖಾತೆಯನ್ನು ಕೊಡುವುದಾಗಿ ಹೇಳಿದ್ದರು. ಆದರೆ, ಇದೀಗ ಬೇರೆ ಖಾತೆ ಕೊಟ್ಟಿದ್ದಾರೆ. ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಳ್ಳಲಾರೆ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
Advertisement