Karnataka Budget 2026: ರಾಜ್ಯದ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ದಾರುಣ ಬಜೆಟ್ ಇದು- ಕುಮಾರಸ್ವಾಮಿ ಕಿಡಿ

ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ. ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
HD Kumaraswamy
ಎಚ್‌ಡಿ ಕುಮಾರಸ್ವಾಮಿ
Updated on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ದಾಖಲೆಯ 17ನೇ ಬಜೆಟ್ ಮಂಡಿಸಿರುವುದಾಗಿ ಸಂಭ್ರಮಿಸಬಹುದು. ಆದರೆ ರಾಜ್ಯದ ಜನ ಅದರ ಪರಿಣಾಮಗಳ ಹೊರೆಯನ್ನು ಹೊರಬೇಕಾಗಿದೆ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಶುಕ್ರವಾರ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ 2026-27ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಮುಖ್ಯಮಂತ್ರಿಗಳು ರಾಜ್ಯದ ಆರ್ಥಿಕತೆಯನ್ನು ಅವ್ಯವಸ್ಥೆಗೆ ತಳ್ಳಿದ್ದಾರೆ ಎಂದು ಆರೋಪಿಸಿದರು.

ಬಜೆಟ್ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕುಮಾರಸ್ವಾಮಿ, ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ. ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಒಂದು ಮಾತು ಸ್ಪಷ್ಟ; ಕರ್ನಾಟಕದ ಆರ್ಥಿಕತೆ ಹಿಂಜರಿಕೆಯತ್ತ ಸಾಗಿದೆ. ಸಿಎಜಿ ವರದಿ, ರಿಸರ್ವ್ ಬ್ಯಾಂಕ್ ಕೊಟ್ಟಿರುವ ಎಚ್ಚರಿಕೆಗಿಂತ ದೊಡ್ಡ ಆರ್ಥಿಕ ಅಪಾಯಕ್ಕೆ ಸಿಲುಕಿದೆ ಕರ್ನಾಟಕ. ಮುಂದಿನ ದಿನಗಳು ಇನ್ನೂ ದುರ್ಬರವಾಗಿವೆ. ಕಾಂಗ್ರೆಸ್ ಸರಕಾರವನ್ನು ರಾಜ್ಯದ ಜನರು ಕ್ಷಮಿಸುವುದಿಲ್ಲ.

HD Kumaraswamy
Karnataka Budget 2026: ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟ ಕಾಂಗ್ರೆಸ್ ಸರ್ಕಾರ; ಬಜೆಟ್ ವಿರುದ್ಧ ಬಿಜೆಪಿ ಪ್ರತಿಭಟನೆ

ಈ ಆಯವ್ಯಯ ಕರ್ಣಕಠೋರ ಮತ್ತು ರಾಜ್ಯಕ್ಕೆ ಭಾರ. ಏಕೆಂದರೆ, ಮುಖ್ಯಮಂತ್ರಿಗಳು ಕೇಂದ್ರದ ನಿಂದನೆಯನ್ನು ಈ ಬಾರಿಯೂ ಮುಂದುವರಿಸಿದರು, ಅದು ಅಗತ್ಯವಿರಲಿಲ್ಲ. ಒಕ್ಕೂಟ ವ್ಯವಸ್ಥೆಯ ಮೂಲತತ್ವವನ್ನೇ ಮರೆತು ತಮ್ಮ ಸರಕಾರದ ಕೆಟ್ಟ ಮಾದರಿಯನ್ನು ಪ್ರಚಾರ ಮಾಡಿಕೊಂಡು ಆತ್ಮರತಿ ಮೆರೆದಿದ್ದಾರೆ. 16ನೇ ಹಣಕಾಸು ಆಯೋಗದಲ್ಲಿ ರಾಜ್ಯದ ತೆರಿಗೆ ಪಾಲನ್ನು 3.61%ರಿಂದ 4.7%ಗೆ ಏರಿಸಲಾಗಿದೆ. ಇದರಿಂದ ಅನಾಮತ್ತಾಗಿ ₹11,000 ಕೋಟಿಗೂ ಹೆಚ್ಚು ಹಣ ರಾಜ್ಯಕ್ಕೆ ಹರಿದುಬರುತ್ತದೆ. ಕೇಂದ್ರದಿಂದ ಹಣ ಬರುವುದು ಕಡಿಮೆ ಆಗಿಲ್ಲ ಎಂಬುದನ್ನು ಅವರ ಬಜೆಟ್ ಪುಸ್ತಕವೇ ಹೇಳುತ್ತದೆ!

ಆದಾಯದ ಕೊರತೆ, ಸತತವಾಗಿ ಹೆಚ್ಚುತ್ತಿರುವ ಸಾಲದ ಪ್ರಮಾಣ ಕಳವಳಕಾರಿ. ಅನುದಾನ ಹಂಚಿಕೆಯಲ್ಲಿ ತಾಳಮೇಳವಿಲ್ಲ. ಲೆಕ್ಕಾಚಾರ ಹಳಿತಪ್ಪಿದೆ ಎಂಬುದಕ್ಕೆ ಬಜೆಟ್ ಪುಸ್ತಕವೇ ಸ್ಪಷ್ಟ ಸಾಕ್ಷಿ. ನಿರೀಕ್ಷೆಗಳನ್ನು ಸೃಷ್ಟಿಸಿ, ಅತೀವ ನಿರಾಸೆ ಉಂಟು ಮಾಡಿದ್ದಾರೆ ಮುಖ್ಯಮಂತ್ರಿಗಳು.

ರಾಜ್ಯದ್ದು ಈಗ ₹4.48 ಲಕ್ಷ ಕೋಟಿ ಗಾತ್ರದ ಬಜೆಟ್. ರಾಜ್ಯದ ಈಗಿನ ಒಟ್ಟು ಸಾಲ ₹8.24 ಲಕ್ಷ ಕೋಟಿ! ಈ ಸಾಲ ₹1.16 ಲಕ್ಷ ಕೋಟಿಯಿಂದ ₹1.32 ಲಕ್ಷ ಕೋಟಿಗೆ ಏರಿದೆ!! ಮುಂದಿನ ವರ್ಷಕ್ಕೆ ₹9 ಲಕ್ಷ ಕೋಟಿ ಮೀರುವುದು ಗ್ಯಾರಂಟಿ. ಈ ಸಾಲದ ಗ್ಯಾರಂಟಿ ಭೀತಿ ಹುಟ್ಟಿಸುತ್ತದೆ.

ಸಾಲ ಮಾಡುತ್ತಿದ್ದೀರಿ, ಸರಿ. ಅದನ್ನು ಏನಕ್ಕೆ ಬಳಕೆ ಮಾಡುತ್ತಿದ್ದೀರಿ? ಸಾಲಕ್ಕೆ ತಕ್ಕಂತೆ ಬಂಡವಾಳ ವೆಚ್ಚವೂ ಆಗಬೇಕಲ್ಲವೇ? ದುರಂತವೆಂದರೆ, ಬಂಡವಾಳ ವೆಚ್ಚ ಎಲ್ಲಿದೆಯೋ ಕಳೆದ ಮೂರು ವರ್ಷಗಳಿಂದ ಅಲ್ಲೇ ಇದೆ. ಇವರು ಸಾಲ ಮಾಡಿ ಮೋಜು ಮಾಡುತ್ತಿದ್ದಾರೆ. ಸಾಲದ ಮೇಲೆ ಸಾಲ ಮಾಡಿ 140ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರಿಗೆ ಕ್ಯಾಬಿನೆಟ್ ದರ್ಜೆ, ಸ್ಟೇಟ್ ಮಿನಿಸ್ಟರ್ ದರ್ಜೆ ದಯಪಾಲಿಸಿ ಪೊಗದಸ್ತಾಗಿ ಸಾಕುತ್ತಿದ್ದಾರೆ. ಅನುತ್ಪಾದಕ ವೆಚ್ಚಕ್ಕೆ ಹಣ ಪೋಲಾಗುತ್ತಿದ್ದು, ಈ ಸರಕಾರ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರವಾಗಿದೆ. ಸಾಲದ ದುಡ್ಡು ಅವರ ಕಿಸೆಗೆ ಹೋಗಿ ಸೇರುತ್ತಿದೆ. ವೋಟು ಕೊಟ್ಟ ಮಹಾಪಾಪಕ್ಕೆ ಜನತೆಯನ್ನು ಶಾಶ್ವತವಾಗಿ ಸಾಲದ ಕೂಪಕ್ಕೆ ನೂಕುವ ದಾರುಣ ಬಜೆಟ್ ಇದಾಗಿದೆ ಎಂದು ಟೀಕಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com