ರಂಗೇರಿದ ಬಾಗಲಕೋಟೆ ಉಪಚುನಾವಣೆ ಅಖಾಡ: ಕಾಂಗ್ರೆಸ್- ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ!

ಉಮೇಶ್ ಮೇಟಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಆರ್. ಬಿ. ತಿಮ್ಮಾಪುರ ಹಾಗೂ ಮಾಜಿ ಸಚಿವ ಅಜಯಕುಮಾರ್ ಸರನಾಯಕ ಅವರ ಉಪಸ್ಥಿತಿಯಲ್ಲಿ ತಮ್ಮ ನಾಮಪತ್ರ ಸಲ್ಲಿಸಿದರು.
ಉಮೇಶ್ ಮೇಟಿ ಮತ್ತು ವಿರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ
ಉಮೇಶ್ ಮೇಟಿ ಮತ್ತು ವಿರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ
Updated on

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿದ್ದು, ಸೋಮವಾರ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇಶ್ ಮೇಟಿ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿಮಠ ಅವರು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಉಮೇಶ್ ಮೇಟಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಆರ್. ಬಿ. ತಿಮ್ಮಾಪುರ ಹಾಗೂ ಮಾಜಿ ಸಚಿವ ಅಜಯಕುಮಾರ್ ಸರನಾಯಕ ಅವರ ಉಪಸ್ಥಿತಿಯಲ್ಲಿ ತಮ್ಮ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಬೆಳಿಗ್ಗೆ ತಿಮ್ಮಾಪುರದಲ್ಲಿರುವ ತಮ್ಮ ತಂದೆ, ದಿವಂಗತ ಎಚ್. ವೈ. ಮೇಟಿ ಅವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಬಳಿಕ ಕಿಲ್ಲಾ ರಾಘವೇಂದ್ರ ಸ್ವಾಮಿ ಮಠ ಹಾಗೂ ಪ್ರಸಿದ್ಧ ಕೊತ್ತಲೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆ ಮುಗಿದ ಬಳಿಕ ಸೋಮವಾರ ಮಧ್ಯಾಹ್ನ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಬಹಿರಂಗ ಸಭೆಯನ್ನು ಏರ್ಪಡಿಸಲಾಗಿದೆ. ಈ ಸಮಾವೇಶದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಮತ್ತು ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಘಟಾನುಘಟಿ ನಾಯಕರು ಭಾಗವಹಿಸುತ್ತಿದ್ದಾರೆ. ಈ ಮೂಲಕ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರ ಭರ್ಜರಿ ಪ್ರಚಾರ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ.

ಉಮೇಶ್ ಮೇಟಿ ಮತ್ತು ವಿರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ
ಉಪಚುನಾವಣೆ: ಯುಗಾದಿ ಹಬ್ಬದ ದಿನವೇ ಬಾಗಲಕೋಟೆ, ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಸೋಮವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಸಂಸದರಾದ ಜಗದೀಶ್ ಶೆಟ್ಟರ್, ಪಿ.ಸಿ. ಗದ್ದಿಗೌಡರ, ಗೋವಿಂದ ಕಾರಜೋಳ, ರಾಜ್ಯಸಭೆ ಸದಸ್ಯ ನಾರಾಯಣ ಭಾಂಡಗೆ, ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ್ ಮತ್ತು ಮಾಜಿ ಸಚಿವ ಮುರುಗೇಶ್ ನಿರಾಣಿ ಉಪಸ್ಥಿತರಿದ್ದರು.

ವೀರಣ್ಣ ಚರಂತಿಮಠ ಅವರು ಇದೇ ಕ್ಷೇತ್ರದಿಂದ 2004, 2008 ಹಾಗೂ 2018ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಹಿರಿಯ ನಾಯಕರಾಗಿದ್ದು, ಮತ್ತೊಮ್ಮೆ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ಬಿಜೆಪಿ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆಯ ನಂತರ ನಗರದಲ್ಲಿ ಪಕ್ಷದ ವತಿಯಿಂದ ಬೃಹತ್ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಾವಿರಾರು ಕಾರ್ಯಕರ್ತರೊಂದಿಗೆ ನಡೆದ ಈ ಶಕ್ತಿ ಪ್ರದರ್ಶನದ ಬಳಿಕ ಬಹಿರಂಗ ಸಭೆಯನ್ನು ಆಯೋಜಿಸಲಾಗಿದ್ದು.

ಎರಡೂ ಪ್ರಮುಖ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳು ಒಂದೇ ದಿನ ತಮ್ಮ ಉಮೇದುವಾರಿಕೆ ಸಲ್ಲಿಸಿ, ಘಟಾನುಘಟಿ ನಾಯಕರ ದಂಡನ್ನೇ ಕರೆತಂದಿರುವುದರಿಂದ ಬಾಗಲಕೋಟೆಯಲ್ಲಿ ಚುನಾವಣಾ ಕಣ ರಂಗೇರಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com