ದಾವಣಗೆರೆ ದಕ್ಷಿಣದಲ್ಲಿ 'ಕೈ' ಗೆ ಬಂಡಾಯದ ಬಿಸಿ: ನಾನೊಬ್ಬ ಪೈಲ್ವಾನ್, ಹಿಂದೆ ಸರಿಯುವ ಮಾತೇ ಇಲ್ಲ; ಪಕ್ಷೇತರ ಅಭ್ಯರ್ಥಿಯಾಗಿ ಸಾದಿಕ್ ಸ್ಪರ್ಧೆ!

ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಂಗ್ರೆಸ್ ಮುಖಂಡ ಸಾದಿಕ್ ಪೈಲ್ವಾನ್ ಮಾ.23ರಂದು ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದಾಗಿ ಪ್ರಕಟಿಸಿದ್ದಾರೆ.
sadiq pailwan
ಸಾದಿಕ್ ಪೈಲ್ವಾನ್
Updated on

ಬೆಂಗಳೂರು : ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಇದರ ಬೆನ್ನಲ್ಲೇ ಎರಡೂ ಕ್ಷೇತ್ರಗಳಲ್ಲಿಯೂ ಬಂಡಾಯ ಏರ್ಪಟ್ಟಿದೆ

ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಮಲ್ಲಿಕಾರ್ಜುನ್‌ಗೆ ಹೈಕಮಾಂಡ್ ಟಿಕೆಟ್ ಪ್ರಕಟಿಸಿದೆ. ಹೀಗಾಗಿ ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಂಗ್ರೆಸ್ ಮುಖಂಡ ಸಾದಿಕ್ ಪೈಲ್ವಾನ್ ಮಾ.23ರಂದು ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದಾಗಿ ಪ್ರಕಟಿಸಿದ್ದಾರೆ.

ಮುಸ್ಲಿಮ್ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದ ಅಲ್ಪಸಂಖ್ಯಾತರು, ಇದೀಗ ಕಾಂಗ್ರೆಸ್ ಪಕ್ಷದ ವಿರುದ್ಧವೇ ಸಿಡಿದೆದ್ದಿದ್ದಾರೆ. ಟಿಕೆಟ್ ಕೈತಪ್ಪಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಸಾದಿಕ್ ಪೈಲ್ವಾನ್, ಸ್ವಪಕ್ಷದ ವಿರುದ್ಧವೇ ತೊಡೆತಟ್ಟಿದ್ದು, ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸವಾಲು ಹಾಕಿದ್ದಾರೆ.

ಬಾಲ್ಯದಿಂದಲೂ ನಾನೊಬ್ಬ ಪೈಲ್ವಾನ್. ಒಮ್ಮೆ ಅಖಾಡಕ್ಕಿಳಿದರೆ ಮತ್ತೆ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಸಾದಿಕ್ ಪೈಲ್ವಾನ್ ಪಕ್ಷದ ಹೈಕಮಾಂಡ್‌ಗೆ ಸೆಡ್ಡು ಹೊಡೆದಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ಕೊಡುವಂತೆ ಕೇಳಿದ್ದೆವು. ನಾನೂ ಪ್ರಬಲ ಆಕಾಂಕ್ಷಿಯಾಗಿದ್ದೆ. ಮುಸ್ಲಿಮರಿಗೆ ಟಿಕೆಟ್ ಸಿಕ್ಕಿಲ್ಲ. ಹಾಗಾಗಿ, ನಾನು ಪಕ್ಷೇತರನಾಗಿಯೇ ಸ್ಪರ್ಧಿಸುತ್ತೇನೆ ಎಂದು ಬಂಡಾಯದ ಕಹಳೆ ಮೊಳಗಿಸಿದ್ದಾರೆ.

sadiq pailwan
ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್ ವಿರುದ್ಧ ಮುಸ್ಲಿಂರ ಆಕ್ರೋಶ ಸ್ಫೋಟ; ಸಾಮೂಹಿಕ ನಾಮಪತ್ರ ಸಲ್ಲಿಕೆಗೆ ನಿರ್ಧಾರ

ಎದುರಾಳಿಯಾಗಿ ಆನೆಯೇ ಇದ್ದರೂ ನಾನು ಸೆಡ್ಡು ಹೊಡೆಯುತ್ತೇನೆ. ದಕ್ಷಿಣ ಕ್ಷೇತ್ರದಲ್ಲಿ ನನಗೆ ಕಾಂಗ್ರೆಸ್ ಪಕ್ಷವೇ ಎದುರಾಳಿ. ಯಾರು ಏನೇ ಹೇಳಿದರೂ ನಾನು ಸ್ಪರ್ಧೆ ಮಾಡುವುದು ಶತಃಸಿದ್ಧ. ಮಾ.23 ರಂದು ಇಲ್ಲಿನ ಅರಳೀ ಮರ ವೃತ್ತದಿಂದ ಪಾದಯಾತ್ರೆ ಮೂಲಕ ತೆರಳಿ, ಚುನಾವಣಾಧಿಕಾರಿಗೆ ಇನ್ನೊಂದು ಸಲ ನನ್ನ ನಾಮಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದರು

ಈ ಮಧ್ಯೆ ಈಗಾಗಲೇ ಮಾ.20ರಂದು ನಾಮಪತ್ರ ಸಲ್ಲಿಸಿರುವ ಮೆಹಬೂಬ್ ಪಕ್ಷೇತರ ಅಭ್ಯರ್ಥಿಯಾಗಿದ್ದು, ಕಾಂಗ್ರೆಸ್ ಪಕ್ಷದಿಂದ ಮುಸ್ಲಿಮ್ ಅಭ್ಯರ್ಥಿಗೆ ಟಿಕೆಟ್ ನೀಡಿಲ್ಲ. ಆದುದರಿಂದ ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ಸೋಲಿನ ರುಚಿಯುಣಿಸಲು ನಮ್ಮ ಸಮುದಾಯ ಸಜ್ಜಾಗಿದೆ. ಅಲ್ಪಸಂಖ್ಯಾತರ ಮತಗಳಿಂದಲೇ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷಕ್ಕೆ ಉಪ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮಾ.20ರಂದು ಪಕ್ಷದ ‘ಬಿ ಫಾರಂ’ ಇಲ್ಲದೆ ನಾಮಪತ್ರ ಸಲ್ಲಿಕೆ ಮಾಡಿದ್ದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ್, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಹಾಗೂ ಪಕ್ಷೇತರರು ಸೇರಿದಂತೆ ಒಟ್ಟು 8 ಮಂದಿಯಿಂದ 9 ನಾಮಪತ್ರ ಸಲ್ಲಿಕೆಯಾಗಿದ್ದವು. ಮಾ.23ರಂದು ಕಾಂಗ್ರೆಸ್ ಅಭ್ಯರ್ಥಿ ಮತ್ತೊಮ್ಮೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com