

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಐದು ವರ್ಷಗಳನ್ನು ಪೂರ್ಣಗೊಳಿಸುತ್ತದೆ, ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೂ ನಾನು ಬದ್ಧನಾಗಿದ್ದೇನೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದ್ದಾರೆ.
ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಿಎಂ, “ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಈ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಅವರು ತೆಗೆದುಕೊಳ್ಳುವ ನಿರ್ಧಾರವನ್ನು ನಾನು ಪಾಲಿಸುತ್ತೇನೆ. ಕರೆ ಬಂದರೆ ದೆಹಲಿಗೆ ಹೋಗುತ್ತೇನೆ. ರಾಹುಲ್ ಗಾಂಧಿ ಸಮಯ ನೀಡಿದರೆ ಭೇಟಿ ಮಾಡುತ್ತೇನೆ ಎಂದು ಹೇಳಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಲಿದೆ ಎಂದು ಪುನರುಚ್ಚರಿಸಿದ ಅವರು, ಹೈಕಮಾಂಡ್ ಬಯಸಿದರೆ ತಾವು ಮುಖ್ಯಮಂತ್ರಿಯಾಗಿ ಮುಂದುವರೆಯುವುದಾಗಿ ಹೇಳಿದರು.
ಇದೇ ವೇಳೆ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿನ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಈ ಎರಡೂ ಉಪಚುನಾವಣೆಗಳ ಜೊತೆಗೆ ಹಿಂದಿನ ಮೂರು ಉಪಚುನಾವಣೆಗಳ ಫಲಿತಾಂಶವೂ ಜನರು ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಮೆಚ್ಚಿದ್ದಾರೆ ಎಂಬುದನ್ನು ತೋರಿಸುತ್ತದೆ. ಜನರ ಆಶೀರ್ವಾದ ಮತ್ತು ಪ್ರೀತಿ ನಮ್ಮ ಸರ್ಕಾರದೊಂದಿಗಿದೆ” ಎಂದರು. ಬಳಿಕ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಶೀಘ್ರದಲ್ಲೇ ನಡೆಯಲಿವೆ ಎಂದು ತಿಳಿಸಿದರು.
ಪ್ರತಿಪಕ್ಷಗಳ ತಂತ್ರಗಳು ವಿಫಲವಾದವು ಎಂಬ ಪ್ರಶ್ನೆಗೆ ಉತ್ತರಿಸಿ, ಅವರಿಗೆ ಯಾವ ತಂತ್ರವೂ ಇರಲಿಲ್ಲ. ಅವರು ಕೇವಲ ಷಡ್ಯಂತ್ರಗಳಲ್ಲಿ ತೊಡಗಿದ್ದರು” ಎಂದು ಟೀಕಿಸಿದರು.
ಇದೇ ವೇಳೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರುಎಣಿಕೆ ವಿಚಾರದಲ್ಲಿಯೂ ಪ್ರತಿಕ್ರಿಯಿಸಿದ ಸಿಎಂ, ಹೈಕೋರ್ಟ್ ಆದೇಶದಂತೆ ತಿರಸ್ಕೃತ ಅಂಚೆ ಮತಪತ್ರಗಳ ಮರುಪರಿಶೀಲನೆ ವೇಳೆ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಪರ ಇದ್ದ 255 ಮತಪತ್ರಗಳನ್ನು ಅಮಾನ್ಯಗೊಳಿಸಲಾಗಿದೆ. “ಇದರ ಹಿಂದೆ ಷಡ್ಯಂತ್ರವಿದೆ. ನಾವು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ” ಎಂದು ಹೇಳಿದರು.
ರೈಲ್ವೆ ಉದ್ಯೋಗಿಗಳಿಗೆ ಬಡ್ತಿ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದಿರುವ ಕುರಿತು ಮಾತನಾಡಿದ ಅವರು, ಇದು ಕನ್ನಡ ಭಾಷೆಯ ಬಗ್ಗೆ ಕೇಂದ್ರ ಸರ್ಕಾರದ ಮನೋಭಾವವನ್ನು ತೋರಿಸುತ್ತದೆ ಎಂದು ಕಿಡಿಕಾರಿದರು.
Advertisement