'ಕೈ' ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ, ನಾಳೆ ಚುನಾವಣೆ ನಡೆದರೂ ಕಾಂಗ್ರೆಸ್ ಸೋಲು ಖಚಿತ: ರಾಧಾ ಮೋಹನ್ ದಾಸ್ ಅಗರ್ವಾಲ್

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮಾತ್ರವಲ್ಲ, ಖರ್ಗೆ ಸೇರಿ ಮೂವರು ಮುಖ್ಯಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದಾರೆ.
BJP National General Secretary Radha Mohan Das Agarwal
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರ್ವಾಲ್
Updated on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ನಡುವೆ ಭಿನ್ನಾಭಿಪ್ರಾಯ ಸೃಷ್ಟಿಸಿ, ಮಲ್ಲಿಕಾರ್ಜುನ ಖರ್ಗೆಯವರು ಕರ್ನಾಟಕ ಮುಖ್ಯಮಂತ್ರಿಯಾಗಲು ಬಯಸುತ್ತಿದ್ದಾರೆಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ಗುರುವಾರ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮಾತ್ರವಲ್ಲ, ಖರ್ಗೆ ಸೇರಿ ಮೂವರು ಮುಖ್ಯಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದಾರೆ. ಕಳೆದ ಆರು-ಏಳು ತಿಂಗಳಿನಿಂದ ರಾಜ್ಯ ಸರ್ಕಾರದ ಸಂಪೂರ್ಣ ಸ್ಥಗಿತಗೊಂಡಂತಾಗಿದೆ ಎಂದು ಟೀಕಿಸಿದರು.

ಇದು ಓಲೈಕೆ ರಾಜಕಾರಣದ ಮೇಲೆ ನಿಂತಿರುವ ಭ್ರಷ್ಟ ಸರ್ಕಾರ. ಕಾಂಗ್ರೆಸ್ ನೀಡಿದ ಗ್ಯಾರಂಟಿಗಳು ಪೂರ್ಣಗೊಂಡಿಲ್ಲ. ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ ಎಂದು ಆರೋಪಿಸಿದರು.

ಇದೇ ವೇಳೆ ಹಲವು ಕಾಂಗ್ರೆಸ್ ಶಾಸಕರು ಬಿಜೆಪಿಯ ಸಂಪರ್ಕದಲ್ಲಿದ್ದಾರೆ ಎಂಬ ಸ್ಫೋಟಕ ಹೇಳಿಕೆಯನ್ನೂ ಅಗರ್‌ವಾಲ್ ನೀಡಿದರು.

ರಾಜ್ಯದ ಜನರು ಈಗಾಗಲೇ ತೀರ್ಮಾನ ಮಾಡಿದ್ದಾರೆ. ನಾಳೆ ಚುನಾವಣೆ ನಡೆದರೂ ಕಾಂಗ್ರೆಸ್ ಸೋಲುತ್ತದೆ, ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕಾತಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, “ಈಗಾಗಲೇ ರಾಜ್ಯಾಧ್ಯಕ್ಷರಿದ್ದಾರೆ. ಅವರು ಕೆಲಸ ಮಾಡುತ್ತಿದ್ದಾರೆ. ವಿಜಯೇಂದ್ರ ಅವರನ್ನು ಮುಂದುವರಿಸಬೇಕೇ ಅಥವಾ ಬೇಡವೇ ಎಂಬ ತೀರ್ಮಾನವನ್ನು ಬೆಂಗಳೂರಿನಲ್ಲಿ ಕೂತು ತೆಗೆದುಕೊಳ್ಳುವುದಿಲ್ಲ. ಪಕ್ಷದ ರಾಷ್ಟ್ರೀಯ ನಾಯಕತ್ವಕ್ಕೆ ರಾಜ್ಯದ ಎಲ್ಲಾ ಬೆಳವಣಿಗೆಗಳ ಮಾಹಿತಿ ಇದೆ. ಶೀಘ್ರದಲ್ಲೇ ಅಂತಿಮ ನಿರ್ಧಾರ ಪ್ರಕಟವಾಗಲಿದೆ ಎಂದು ಹೇಳಿದರು.

BJP National General Secretary Radha Mohan Das Agarwal
ಸಿದ್ದರಾಮಯ್ಯ ಸರಕಾರಕ್ಕೆ 3 ವರ್ಷಗಳು: ಭಾರವಾದ ಹೆಜ್ಜೆಗಳು (ನೇರ ನೋಟ)

ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷವು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದ್ದು, ಮುಂದಿನ ಚರ್ಚೆಗಳು ನಡೆಯಲಿವೆ ಎಂದರು.

ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರನ್ನು ರಾಜ್ಯಸಭೆಗೆ ಮರುನಾಮನಿರ್ದೇಶನ ಮಾಡುವ ವಿಚಾರ ಮೈತ್ರಿ ಪಕ್ಷಗಳ ಒಳಗಿನ ವಿಚಾರವಾಗಿದ್ದು, ಇದರ ಬಗ್ಗೆ ಅಂತಿಮ ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಹೇಳಿದರು.

ಇದರ ನಡುವೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಿಬಿನ್ ಅವರು ಭಾನುವಾರ ಬೆಂಗಳೂರಿಗೆ ಭೇಟಿ ನೀಡಲಿದ್ದು, ರಾಜ್ಯ ಕೋರ್ ಸಮಿತಿ ಸಭೆ ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಚುನಾವಣೆ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಸಿದ್ಧತೆಗಳನ್ನೂ ಅವರು ಪರಿಶೀಲಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com