

ಬೆಂಗಳೂರು: ಕಳೆದ 11 ದಿನಗಳಲ್ಲಿ ನಾಲ್ಕನೇ ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿರುವುದನ್ನು ಖಂಡಿಸಿ ಮೇ 30ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ.
ಕೇಂದ್ರ ಸರ್ಕಾರ ನಿರಂತರವಾಗಿ ಇಂಧನ ದರಗಳನ್ನು ಹೆಚ್ಚಿಸುವ ಮೂಲಕ ಸಾಮಾನ್ಯ ಜನರ ಮೇಲೆ ಆರ್ಥಿಕ ಹೊರೆ ಹಾಕುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೇವಾಲಾ ಅವರು, ಕೇಂದ್ರ ಸರ್ಕಾರ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 98.6 ಡಾಲರ್‌ಗೆ ಇಳಿದಿದ್ದರೂ ಭಾರತದಲ್ಲಿ ಕಳೆದ 11 ದಿನಗಳಲ್ಲಿ ನಾಲ್ಕು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಿಸಲಾಗಿದೆ ಎಂದು ಆರೋಪಿಸಿದರು.
ಕಚ್ಚಾ ತೈಲದ ಬೆಲೆ ಇಳಿದಾಗ ಅದರ ಲಾಭವನ್ನು ಜನರಿಗೆ ವರ್ಗಾಯಿಸಬೇಕು. ಆದರೆ, ಕೇಂದ್ರ ಸರ್ಕಾರ ದರ ಇಳಿಸದಿರುವುದಕ್ಕೆ ಯಾವುದೇ ಸಮರ್ಥನೆ ಇಲ್ಲ. ಇದು ಕ್ಷಮಿಸಲಾಗದ ನಡೆ. ಗೃಹಬಳಕೆಯ ಹಾಗೂ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳು, ಸಿಎನ್‌ಜಿ ಹಾಗೂ ಇತರ ಅಗತ್ಯ ವಸ್ತುಗಳ ಬೆಲೆಗಳೂ ಏರಿಕೆಯಾಗಿವೆ ಎಂದು ಹೇಳಿದರು.
ಇದೇ ವೇಳೆ 2014ರಿಂದ ಇಲ್ಲಿಯವರೆಗೆ ವಿವಿಧ ತೆರಿಗೆಗಳು ಹಾಗೂ ಇತರೆ ಮಾರ್ಗಗಳ ಮೂಲಕ ಕೇಂದ್ರ ಸರ್ಕಾರ ಸುಮಾರು ರೂ.57 ಲಕ್ಷ ಕೋಟಿ ಸಂಗ್ರಹಿಸಿ ಜನರನ್ನು ಲೂಟಿ ಮಾಡಿದೆ ಎಂದು ಆರೋಪಿಸಿದ ಅವರು, ಇತ್ತೀಚಿನ ಇಂಧನ ದರ ಏರಿಕೆಯನ್ನು “ಹಗಲು-ರಾತ್ರಿ ನಡೆಯುತ್ತಿರುವ ದರೋಡೆ” ಎಂದು ಕಿಡಿಕಾರಿದರು.
ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಧಾನಿ ಆಗುವ ಮೊದಲು ಮೋದಿ ಅವರು ದೇಶದಲ್ಲಿ ‘ಅಚ್ಚೇ ದಿನ್’ ತರುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಕಳೆದ 11 ದಿನಗಳಲ್ಲಿ ನಾಲ್ಕು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ ಎಂದು ಕಿಡಿಕಾರಿದರು.
ಬೆಂಗಳೂರಿನಲ್ಲಿ ಪ್ರಸ್ತುತ ಪೆಟ್ರೋಲ್ ದರ ಲೀಟರ್‌ಗೆ ರೂ.110.93 ಹಾಗೂ ಡೀಸೆಲ್ ದರ ರೂ.98.89ಕ್ಕೆ ತಲುಪಿದೆ. ಶೀಘ್ರದಲ್ಲೇ ಡೀಸೆಲ್ ಬೆಲೆಯೂ ರೂ.100 ಗಡಿ ದಾಟುವ ಸಾಧ್ಯತೆ ಇದೆ. ಕಳೆದ 11 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಲೀಟರ್‌ಗೆ ರೂ.7.52ರಷ್ಟು ಹೆಚ್ಚಳವಾಗಿದ್ದು, ಕೇಂದ್ರ ಸರ್ಕಾರ ದೇಶವನ್ನು ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು.
ರೈತರು, ಕಾರ್ಮಿಕರು, ಮಹಿಳೆಯರು ಸೇರಿದಂತೆ ಎಲ್ಲ ವರ್ಗದ ಜನರು ಈ ಬೆಲೆ ಏರಿಕೆಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಅವರು ಹೇಳಿದರು.
ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಾತನಾಡಿ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ಆದರೆ, ಕೇಂದ್ರ ಸರ್ಕಾರ ನಿರಂತರವಾಗಿ ಇಂಧನ ದರಗಳನ್ನು ಹೆಚ್ಚಿಸುತ್ತಿದೆ ಎಂದು ಟೀಕಿಸಿದರು. ಗ್ಯಾರಂಟಿ ಯೋಜನೆಗಳು ಇಲ್ಲದಿದ್ದರೆ ಜನರ ಪರಿಸ್ಥಿತಿ ಇನ್ನಷ್ಟು ಕಷ್ಟಕರವಾಗುತ್ತಿತ್ತು ಎಂದು ಅಭಿಪ್ರಾಯಪಟ್ಟರು.
ಮೇ 30ರಂದು ನಡೆಯಲಿರುವ ಪ್ರತಿಭಟನೆಗಳ ಮೂಲಕ ಇಂಧನ ದರ ಏರಿಕೆಯ ಪರಿಣಾಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶವಿದೆ ಎಂದು ತಿಳಿಸಿದರು.
ಇದೇ ವೇಳೆ ಪ್ರಧಾನಿ ಅವರ ಮಿತವ್ಯಯ ಕ್ರಮಗಳ ಕರೆಗೆ ಸ್ಪಂದಿಸಿ ಒಂದು ದಿನ ಮೆಟ್ರೋದಲ್ಲಿ ಪ್ರಯಾಣಿಸಿ, ಬಳಿಕ ಮತ್ತೆ ತಮ್ಮ ಖಾಸಗಿ ವಾಹನಗಳನ್ನು ಬಳಸುತ್ತಿರುವ ಬಿಜೆಪಿ ನಾಯಕರ ನಡೆಯನ್ನೂ ಅವರು ಟೀಕಿಸಿದರು.
Advertisement