

ಮೈಸೂರು: ಮುಂಬರುವ ರಾಜ್ಯಸಭೆ ಚುನಾವಣೆಗೆ ತಾನೂ ಆಕಾಂಕ್ಷಿಯಾಗಿದ್ದು, ಈ ಕುರಿತು ಪಕ್ಷದ ಹೈಕಮಾಂಡ್‌ಗೆ ಈಗಾಗಲೇ ತಿಳಿಸಿರುವುದಾಗಿ ಮಾಜಿ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರು ಸೋಮವಾರ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗಿದ್ದರೂ ಪಕ್ಷ ವಹಿಸುವ ಯಾವುದೇ ಜವಾಬ್ದಾರಿಯನ್ನು ನಿರ್ವಹಿಸಲು ಸಿದ್ಧನಿದ್ದೇನೆ ಎಂದು ಹೇಳಿದರು.
ರಾಜ್ಯಸಭೆಗೆ ನನ್ನನ್ನೂ ಪರಿಗಣಿಸಬೇಕೆಂದು ಪಕ್ಷದ ಹೈಕಮಾಂಡ್‌ಗೆ ತಿಳಿಸಿದ್ದೇನೆ. ಆದರೆ, ಅಂತಿಮವಾಗಿ ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳುತ್ತದೆಯೋ ಅದನ್ನು ಗೌರವಿಸಿ ಪಾಲಿಸುತ್ತೇನೆ ಎಂದು ತಿಳಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯಿಸಿ, ಈ ವಿಚಾರ ಸಂಪೂರ್ಣವಾಗಿ ಪಕ್ಷದ ಹೈಕಮಾಂಡ್ ವ್ಯಾಪ್ತಿಗೆ ಸೇರಿದ್ದು, ಅದರ ಬಗ್ಗೆ ವೈಯಕ್ತಿಕ ಅಭಿಪ್ರಾಯ ವ್ಯಕ್ತಪಡಿಸುವುದಿಲ್ಲ ಎಂದು ತಿಳಿಸಿದರು.
ಪ್ರಸ್ತುತ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷ ಸಂಘಟನೆಯನ್ನು ಬಲಪಡಿಸಲು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ಅವಧಿಗೂ ಇನ್ನೂ ಒಂದು ವರ್ಷ ಬಾಕಿಯಿದೆ. ಪಕ್ಷದಲ್ಲಿ ಬದಲಾವಣೆ ಅಗತ್ಯವಿದ್ದರೆ ಹೈಕಮಾಂಡ್ ಆಂತರಿಕವಾಗಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.
ಇತ್ತೀಚಿನ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಕುರಿತು ಮಾತನಾಡಿ, ಇದು ಜಾಗತಿಕ ಆರ್ಥಿಕ ಪರಿಸ್ಥಿತಿಯ ಪರಿಣಾಮ ಎಂದು ಸಮರ್ಥಿಸಿಕೊಂಡರು.
ಹಲವು ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಇಂಧನ ದರ ಏರಿಕೆ ಪ್ರಮಾಣ ಕಡಿಮೆ ಇದೆ ಎಂದು ಅವರು ಅಭಿಪ್ರಾಯಪಟ್ಟರು.
ಕರ್ನಾಟಕದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಕಾಂಗ್ರೆಸ್ ವಿರೋಧಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ರಾಜ್ಯ ಸರ್ಕಾರ ತನ್ನ ಮೂರು ವರ್ಷಗಳ ಆಡಳಿತ ವೈಫಲ್ಯಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದ್ದು, ಈಗ ಚುನಾವಣೆ ನಡೆದರೆ ಕಾಂಗ್ರೆಸ್ 50 ಸ್ಥಾನಗಳನ್ನು ಗೆಲ್ಲುವುದೂ ಕಷ್ಟವಾಗಬಹುದು. ಅದಕ್ಕಾಗಿ ಸರ್ಕಾರ ಪ್ರತಿಯೊಂದು ವಿಷಯವನ್ನೂ ವಿರೋಧಿಸುತ್ತಿದೆ ಎಂದು ಟೀಕಿಸಿದರು.
ರಸಗೊಬ್ಬರಗಳ ಅಕ್ರಮ ದಾಸ್ತಾನು ವಿಚಾರದ ಕುರಿತು ಮಾತನಾಡಿದ, ಕೇಂದ್ರ ಸರ್ಕಾರ ರೈತರಿಗೆ ಸಬ್ಸಿಡಿ ಮೂಲಕ ಕೈಗೆಟುಕುವ ದರದಲ್ಲಿ ರಸಗೊಬ್ಬರ ಪೂರೈಕೆ ಮಾಡುತ್ತಿದೆ. ಆದರೆ, ಕೆಲವು ವ್ಯಾಪಾರಿಗಳು ಯೂರಿಯಾ ಸೇರಿದಂತೆ ವಿವಿಧ ರಸಗೊಬ್ಬರಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿ ಕೃತಕ ಕೊರತೆ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದರು.
Advertisement