

ಕರ್ನಾಟಕದಲ್ಲಿ ಮುಂದಿನ ಎರಡು ದಿನಗಳಲ್ಲಿ ನಾಯಕತ್ವ ಬದಲಾವಣೆ ಸಾಧ್ಯತೆ ಕುರಿತು ತೀವ್ರ ಊಹಾಪೋಹಗಳ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಗುರುವಾರ ಮೇ 28ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಲು ಸಮಯ ಕೇಳಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ಇಂದು ಬುಧವಾರ ತಿಳಿಸಿವೆ.
ಈ ಬೆಳವಣಿಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ ಸಲ್ಲಿಸಿ, ಅವರ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಹಸ್ತಾಂತರಿಸುವ ಸಾಧ್ಯತೆ ಇದೆ ಎಂಬ ಊಹಾಪೋಹಗಳಿಗೆ ಮತ್ತಷ್ಟು ಇಂಬು ನೀಡಿದೆ.
ಹೌದು, ಮುಖ್ಯಮಂತ್ರಿಗಳು ನಾಳೆ ರಾಜ್ಯಪಾಲರನ್ನು ಭೇಟಿ ಮಾಡಲು ಸಮಯ ಕೇಳಿದ್ದಾರೆ ಎಂದು ಮುಖ್ಯಮಂತ್ರಿ ಅವರಿಗೆ ಆಪ್ತರಾಗಿರುವ ಉನ್ನತ ಮೂಲವೊಂದು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದೆ.
ಕಾಂಗ್ರೆಸ್ ಮೂಲಗಳ ಪ್ರಕಾರ, ಸಿದ್ದರಾಮಯ್ಯ ಅವರು ರಾಜ್ಯಪಾಲ ಗೆಹ್ಲೋಟ್ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸುವ ಸಾಧ್ಯತೆ ಇದೆ.
ಕಾಂಗ್ರೆಸ್ ನಾಯಕತ್ವ, ಅದರಲ್ಲೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರೊಂದಿಗೆ ಒಟ್ಟಿಗೆ ಹಾಗೂ ಪ್ರತ್ಯೇಕವಾಗಿ ಹಲವು ಗಂಟೆಗಳ ಚರ್ಚೆ ನಡೆಸಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ರಾಜ್ಯಸಭಾ ಚುನಾವಣೆಯ ಬಳಿಕ ನಾಯಕತ್ವ ಬದಲಾವಣೆಯ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಸಿದ್ದರಾಮಯ್ಯಗೆ ರಾಜ್ಯಸಭೆ ಸ್ಥಾನ?
ಮೂಲಗಳ ಪ್ರಕಾರ, ಡಿ ಕೆ ಶಿವಕುಮಾರ್ ಬೆಂಬಲಿಗರ ವಲಯವು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನ ತ್ಯಜಿಸಬೇಕೆಂದು ಒತ್ತಾಯಿಸುತ್ತಿದ್ದು, ಅವರಿಗೆ ಕೇಂದ್ರ ಮಟ್ಟದ ಜವಾಬ್ದಾರಿ ನೀಡುವ ಸೂತ್ರವನ್ನೂ ಪ್ರಸ್ತಾಪಿಸಲಾಗಿದೆ. ಆದರೆ ಸಿದ್ದರಾಮಯ್ಯ ಅವರು ಅದನ್ನು ಒಪ್ಪಿಕೊಂಡಿಲ್ಲ ಎನ್ನಲಾಗಿದೆ. ಅವರಿಗೆ ರಾಜ್ಯಸಭಾ ಸ್ಥಾನವನ್ನೂ ಆಫರ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ನಾಯಕತ್ವ ವಿವಾದದ ಕೇಂದ್ರಬಿಂದುವಾಗಿ ಡಿಕೆ ಶಿವಕುಮಾರ್ ಅವರ ಮುಖ್ಯಮಂತ್ರಿ ಸ್ಥಾನ ಬೇಡಿಕೆ ಇದೆ. 2023ರ ವಿಧಾನಸಭಾ ಚುನಾವಣೆಯ ವೇಳೆ ಸಿದ್ದರಾಮಯ್ಯ ಅವರು ಮೊದಲ ಎರಡೂವರೆ ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿ, ಉಳಿದ ಅವಧಿಗೆ ಡಿ ಕೆ ಶಿವಕುಮಾರ್ ಅವರಿಗೆ ಅವಕಾಶ ನೀಡಲಾಗುವುದು ಎಂಬ ಭರವಸೆ ನೀಡಲಾಗಿತ್ತು ಎಂದು ಅವರು ಹೇಳುತ್ತಿದ್ದಾರೆ.
ಇದೇ ವೇಳೆ, ಇಂದು ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ನಡೆದಿರುವ ಚರ್ಚೆಗಳ ಬಗ್ಗೆ ನಾಳೆ ಮಾತನಾಡುವುದಾಗಿ ತಿಳಿಸಿದ್ದಾರೆ. ಅವರು ವಿಧಾನಸೌಧದಲ್ಲಿ ಭಾರತದ ಮೊದಲ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರ 62ನೇ ಪುಣ್ಯತಿಥಿಯ ಅಂಗವಾಗಿ ಪುಷ್ಪ ನಮನ ಸಲ್ಲಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಅವರು ಮೊದಲ ಪ್ರಧಾನಮಂತ್ರಿಯಾಗಿದ್ದರು. 17 ವರ್ಷಗಳ ಕಾಲ ಈ ದೇಶದ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿದರು. ಅವರು ಸಮಾಜವಾದಿಯೂ ಆಗಿದ್ದರು, ಬಂಡವಾಳಶಾಹಿಯೂ ಆಗಿದ್ದರು ಎಂದು ಅವರು ಹೇಳಿದರು.
ಪಕ್ಷದ ಹೈಕಮಾಂಡ್ ಜೊತೆಗಿನ ಮಾತುಕತೆ ಕುರಿತು ವಿಶೇಷವಾಗಿ ಕೇಳಿದಾಗ, “ಅದರ ಬಗ್ಗೆ ನಾಳೆ ಮಾತನಾಡುತ್ತೇನೆ” ಎಂದು ಉತ್ತರಿಸಿದರು.
ಇನ್ನೊಂದೆಡೆ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ನಾಳೆ ಗುರುವಾರ ಬೆಂಗಳೂರಿನ ‘ಕಾವೇರಿ’ ಅಧಿಕೃತ ನಿವಾಸದಲ್ಲಿ ಸಿದ್ದರಾಮಯ್ಯ ಅವರೊಂದಿಗೆ ಮಹತ್ವದ ಉಪಹಾರ ಸಭೆ ನಡೆಸಲಿದ್ದಾರೆ.
Advertisement