

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿರುವ ನಡುವೆ, ಹೊಸ ಸರ್ಕಾರದಲ್ಲಿ 3ರಿಂದ 4 ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆಗಳನ್ನು ಸೃಷ್ಟಿಸುವ ಸಾಧ್ಯತೆ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆ ಆರಂಭವಾಗಿದೆ.
ವಿವಿಧ ಸಮುದಾಯಗಳಿಗೆ ರಾಜಕೀಯ ಪ್ರತಿನಿಧಿತ್ವ ನೀಡುವ ಉದ್ದೇಶದಿಂದ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಹೆಜ್ಜೆ ಇಡಲು ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಉಪಮುಖ್ಯಮಂತ್ರಿ ಸ್ಥಾನಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಕೈಗಾರಿಕಾ ಸಚಿವ ಎಂಬಿ.ಪಾಟೀಲ್, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ.
2028 ಚುನಾವಣೆಗೆ ಸಮುದಾಯ ಸಮೀಕರಣ?
ಕಾಂಗ್ರೆಸ್ ಹೈಕಮಾಂಡ್ 2028ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ವಿವಿಧ ಸಮುದಾಯಗಳಿಗೆ ಸಮತೋಲನ ಸಾಧಿಸುವ ತಂತ್ರ ರೂಪಿಸುತ್ತಿದೆ ಎನ್ನಲಾಗಿದೆ.
ದಲಿತ, ಲಿಂಗಾಯತ, ಮುಸ್ಲಿಂ ಹಾಗೂ ಕುರುಬ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡುವ ಉದ್ದೇಶದಿಂದ ಬಹು ಡಿಸಿಎಂ ಫಾರ್ಮುಲಾ ಬಳಕೆ ಮಾಡಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.
ಪ್ರಿಯಾಂಕ್ ಖರ್ಗೆ ಡಿಸಿಎಂ ಬಹುತೇಕ ಖಚಿತ?
ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರರಾಗಿರುವ ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಸ್ಥಾನ ಬಹುತೇಕ ಖಚಿತ ಎನ್ನಲಾಗುತ್ತಿದ್ದು, ಪಕ್ಷದ ರಾಷ್ಟ್ರೀಯ ನಾಯಕತ್ವವೂ ಅವರ ಪರ ಒಲವು ತೋರಿದೆ ಎಂದು ಮೂಲಗಳು ತಿಳಿಸಿವೆ.
ಎಂಬಿ ಪಾಟೀಲ್‌ಗೆ ಲಿಂಗಾಯತ ಕೋಟಾ?
ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಅವರ ಹೆಸರು ವೀರಶೈವ-ಲಿಂಗಾಯತ ಸಮುದಾಯದ ಪ್ರತಿನಿಧಿಯಾಗಿ ಪರಿಗಣನೆಯಲ್ಲಿದೆ. ಉತ್ತರ ಕರ್ನಾಟಕದಲ್ಲಿ ಪ್ರಭಾವ ಹೊಂದಿರುವ ನಾಯಕನಾಗಿ ಅವರನ್ನು ಪಕ್ಷ ಪ್ರಮುಖ ಸ್ಥಾನಕ್ಕೆ ತರುವ ಸಾಧ್ಯತೆ ಇದೆ.
ಜಮೀರ್‌ಗೆ ಒಲಿಯುತ್ತಾ ಅದೃಷ್ಟಾ?
ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕಾಗಿ ಮಾಡಿದ ಕೆಲಸದ ಹಿನ್ನೆಲೆಯಲ್ಲಿ ಡಿಸಿಎಂ ಹುದ್ದೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಇತ್ತೀಚೆಗೆ ಶಿವಾಜಿನಗರ ಶಾಸಕ ರಿಜ್ವಾನ್ ಅರ್ಹದ್ ಅವರೊಂದಿಗೆ ಭಿನ್ನಾಭಿಪ್ರಾಯ ಮರೆತು, ಮುಸ್ಲಿಂ ಸಮುದಾಯಕ್ಕೆ ಹೊಸ ಸಂಪುಟದಲ್ಲಿ ಸಮರ್ಪಕ ಪ್ರಾತಿನಿಧ್ಯ ಸಿಗಬೇಕು ಎಂಬ ಚರ್ಚೆಯನ್ನೂ ನಡೆಸಿದ್ದಾರೆಂದು ತಿಳಿದುಬಂದಿದೆ.
ಡಿಸಿಎಂ ಹುದ್ದೆಗೆ ಯತೀಂದ್ರ ಹೆಸರೇಕೆ?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸ್ಥಾನ ತ್ಯಾಗಕ್ಕೆ ಮನವರಿಕೆ ಮಾಡಲು ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಪ್ರಮುಖ ಸ್ಥಾನ ನೀಡುವ ಕುರಿತು ಮಾತುಕತೆ ನಡೆದಿದ್ದು, ಇದರಂತೆ ಯತೀಂದ್ರ ಅವರಿಗೆ ಡಿಸಿಎಂ ಹುದ್ದೆ ಸಿಗಲಿದೆ ಎಂದು ಹೇಳಲಾಗುತ್ತಿದೆ.
ಮೂಲವೊಂದರ ಪ್ರಕಾರ, ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರು ದೆಹಲಿಯಲ್ಲಿ ನಾಯಕತ್ವ ಬದಲಾವಣೆ ಮಾತುಕತೆ ನಡೆಯುವ ಮೊದಲೇ ಪ್ರಿಯಾಂಕ್, ಪಾಟೀಲ್ ಮತ್ತು ಜಮೀರ್ ಅವರಿಗೆ ಕರೆ ಮಾಡಿ ಹೈಕಮಾಂಡ್ ನಿರ್ಧಾರದ ಬಗ್ಗೆ ತಿಳಿಸಿದ್ದರು ಎಂದು ತಿಳಿದುಬಂದಿದೆ.
ಇನ್ನೂ ಹಲವರ ಹೆಸರು ಚರ್ಚೆಯಲ್ಲಿ
ಉಪಮುಖ್ಯಮಂತ್ರಿ ಸ್ಥಾನಕ್ಕೆ ಗೃಹ ಸಚಿವ ಜಿ.ಪರಮೇಶ್ವರ್, ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಮೈಸೂರು ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರ ಹೆಸರುಗಳೂ ಕೇಳಿಬರುತ್ತಿವೆ.
Advertisement