

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು, ಮುಂದಿನ ಮುಖ್ಯಮುಂತ್ರಿ ಡಿಕೆ ಶಿವಕುಮಾರ್ ಆಗಲಿದ್ದಾರೆ. ಸಿದ್ದರಾಮಯ್ಯನವರು ತಮ್ಮ ಪದತ್ಯಾಗಕ್ಕೂ ಮುನ್ನ ಅವರ ಆಪ್ತ ಅಧಿಕಾರಿಗಳನ್ನು ಬೇರೆಡೆ ವರ್ಗಾಯಿಸಿದ್ದಾರೆ.
ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ, ಸಿಎಂ ವಿಶೇಷ ಕರ್ತವ್ಯಾಧಿಕಾರಿ ರಮೇಶ್ ಪಿ.ಕೋನರೆಡ್ಡಿ, ಸಿಎಂ ಜಂಟಿ ಕಾರ್ಯದರ್ಶಿಯಾಗಿದ್ದ ಟಿ.ಎನ್.ಕೃಷ್ಣಮೂರ್ತಿ ಹಾಗೂ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ ಅವರನ್ನ ವರ್ಗಾವಣೆ ಮಾಡಲಾಗಿದೆ.
ಆಪ್ತ ಅಧಿಕಾರಿಗಳ ವರ್ಗಾವಣೆ
ನಿರ್ಗಮಿತ ಸಿಎಂ ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿಯಾಗಿದ್ದ ಕೆಎಎಸ್ ಅಧಿಕಾರಿ ಡಾ.ವೆಂಕಟೇಶಯ್ಯ ಅವರನ್ನು ವರ್ಗಾವಣೆ ಕೃಷಿ ಮಾರಾಟ ಇಲಾಖೆ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ಸಿಎಂ ವಿಶೇಷ ಕರ್ತವ್ಯಾಧಿಕಾರಿಯಾಗಿದ್ದ ರಮೇಶ್ ಪಿ.ಕೋನರೆಡ್ಡಿ ಅವರನ್ನು ವಿದ್ಯುತ್ ಪ್ರಸರಣ ನಿಗಮದ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ.
ಸಿಎಂ ಜಂಟಿ ಕಾರ್ಯದರ್ಶಿಯಾಗಿದ್ದ ಟಿ.ಎನ್.ಕೃಷ್ಣಮೂರ್ತಿ ನಗರಾಭಿವೃದ್ಧಿ ಇಲಾಖೆ ಜಂಟಿ ಕಾರ್ಯದರ್ಶಿ-2 ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ ಅವರನ್ನು ಕ್ರೈಸ್ತ್ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆಗೆ ವರ್ಗಾಯಿಸಲಾಗಿದೆ.
2023ರಲ್ಲಿ ಎರಡನೇ ಬಾರಿಗೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ವೇಳೆ ಕೆಎಎಸ್ ಅಧಿಕಾರಿ ಡಾ. ವೆಂಕಟೇಶಯ್ಯ ಅವರನ್ನು ಗುತ್ತಿಗೆ ಆಧಾರದ ಮೇಲೆ ಸಿಎಂ ಆಪ್ತ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು. ಜೊತೆಗೆ ಕೆಎಎಸ್(ಹಿರಿಯ ಶ್ರೇಣಿ) ಅಧಿಕಾರಿಯಾಗಿರುವ ರಮೇಶ್ ಪಿ.ಕೋನರೆಡ್ಡಿ ಅವರನ್ನು ಸಿಎಂ ವಿಶೇಷ ಕರ್ತವ್ಯಾಧಿಕಾರಿಯಾಗಿ ನೇಮಿಸಲಾಗಿತ್ತು. ಇದೀಗ ಸಿದ್ದರಾಮಯ್ಯನವರು ಪದತ್ಯಾಗ ಮಾಡುವ ಮೊದಲೇ ಅವರ ಆಪ್ತ ಅಧಿಕಾರಿಗಳನ್ನ ಬೇರೆ ಇಲಾಖೆಗಳಿಗೆ ವರ್ಗಾವಣೆ ಮಾಡಲಾಗಿದೆ.
Advertisement