

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ನಂತರ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶನಿವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.
ಇಂದು ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಡಿಕೆ ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಅದನ್ನು ಮಾಜಿ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಅನುಮೋದಿಸಿದರು. ನಂತರ ಎಲ್ಲಾ ಶಾಸಕರು ಅದಕ್ಕೆ ಒಪ್ಪಿಗೆ ನೀಡಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಮೇಲ್ವಿಚಾರಣೆಯಲ್ಲಿ ನಡೆದ ಸಭೆಯಲ್ಲಿ, ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಶಾಸಕಾಂಗ ಪಕ್ಷದ ಸಭೆಗೂ ಮೊದಲು ವಿಧಾನಸೌಧ ಕೊಠಡಿಯಲ್ಲಿ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿಯೇ ಡಿಕೆಶಿ ಆಗಮಿಸಿದ್ದರು. ಸಿಎಲ್‌ಪಿ ಸಭೆಗೆ ಹಾಜರಾದ ಎಲ್ಲಾ ಶಾಸಕರಿಗೆ ಅವರು ಕುಳಿತ ಸ್ಥಳಕ್ಕೇ ತೆರಳಿ ಡಿ.ಕೆ. ಶಿವಕುಮಾರ್ ಹಸ್ತಲಾಘವ ಮಾಡಿದ್ದು ವಿಶೇಷವಾಗಿತ್ತು.
"ನಾನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಮತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಮುಂದಿನ ನಾಯಕನನ್ನು ನೇಮಿಸುವ ನಿರ್ಧಾರವನ್ನು ಹೈಕಮಾಂಡ್‌ಗೆ ಬಿಡಲಾಗಿದೆ" ಎಂದು ಸಿಎಲ್‌ಪಿ ಸಭೆಯಿಂದ ಹೊರಬಂದ ನಂತರ ಸಿದ್ದರಾಮಯ್ಯ ಹೇಳಿದರು.
ರಾಜ್ಯಪಾಲರ ಭೇಟಿ
ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಡಿಕೆ ಶಿವಕುಮಾರ್ ಅವರು ಸಂಜೆ ಲೋಕಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಸಾಧ್ಯತೆ ಇದೆ.
Advertisement