

ಕೋಲಾರ: ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಂಗಳವಾರ ಕಾಂಗ್ರೆಸ್ ನಾಯಕರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇಂದು ಕೋಲಾರದಲ್ಲಿ ಬಿಜೆಪಿ ಆಯೋಜಿಸಿದ್ದ ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ' ಪಾದಯಾತ್ರೆ ವೇಳೆ ಮಾತನಾಡಿದ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ಇಡೀ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಹೊರಟಿದೆ ಎಂದರು.
ಕಾಂಗ್ರೆಸ್ ಅರಾಜಕತೆ ಸೃಷ್ಠಿ ಮಾಡಿದ್ದೇ ಆದರೆ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರುಗಳು, ಕಾಂಗ್ರೆಸ್ ನಾಯಕರನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ ಎಚ್ಚರಿಕೆ ನೀಡಿದರು.
ಎಸ್‌ಐಆರ್ ಹೆಸರಲ್ಲಿ ಅರಾಜಕಥೆ ಸೃಷ್ಟಿಸಲು ಕಾಂಗ್ರೆಸ್ ಮುಂದಾಗಿದೆ, ಅದರ ವಿರುದ್ದ ನಮ್ಮ ಹೋರಾಟ. ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವ ನಿತ್ಯೋತ್ಸವ ಅಗಬೇಕಿತ್ತು. ಅದು ಬಿಟ್ಟು ಬೆಲೆ ಏರಿಕೆಯ ನಿತ್ಯೋತ್ಸವ ಮಾಡಲು ಕಾಂಗ್ರೆಸ್ ಹೊರಟಿದೆ. ಇದನ್ನು ರಾಜ್ಯದ ಪ್ರತಿಯೊಬ್ಬರು ಖಂಡಿಸುತ್ತೇವೆ. ರಾಜ್ಯದಲ್ಲಿ ನಡೆಯುತ್ತಿರುವ ಸ್ಟಿಂಗ್ ವಿಚಾರ ಸಿದ್ದರಾಮಯ್ಯ ಅವರನ್ನ ಹದ್ದುಬಸ್ತ್ನಲ್ಲಿ ಇಡಲು ಮಾಡುತ್ತಿರುವ ಹುನ್ನಾರ ಎಂದು ಆರೋಪಿಸಿದರು.
ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಕಾಂಗ್ರೆಸ್ 'ರಾಜಕೀಯಗೊಳಿಸುತ್ತಿದೆ' ಮತ್ತು ಅರಾಜತೆಗೆ ಪ್ರಚೋದನೆ ನೀಡಲು ಯುವಜನರನ್ನು ದಾರಿತಪ್ಪಿಸುತ್ತಿದೆ ಎಂದು ಆರೋಪಿಸಿ, ಬಿಜೆಪಿ ಇಂದು ಕೋಲಾರದಲ್ಲಿ 'ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ' ಎಂಬ ಘೋಷಣೆಯೊಂದಿಗೆ ಪಾದಯಾತ್ರೆ ನಡೆಸಿತು.
ಈ ಪಾದಯಾತ್ರೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ಹರೀಶ್ ದ್ವಿವೇದಿ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.