

ಬೆಂಗಳೂರು: ದೇಶದಲ್ಲಿ ಪ್ರಧಾನಿ ಮೋದಿ ವರ್ಚಸ್ಸು ಕಡಿಮೆಯಾಗುತ್ತಿದೆ, ಎಸ್ಐಆರ್ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿಯವರು ಗೆಲ್ಲಲಾಗಲ್ಲ. ದೇಶದಲ್ಲಿ ಎಸ್ಐಆರ್ ವಿರುದ್ಧದ ಈ ಹೋರಾಟ ಎರೆನೇ ಸಂಗ್ರಾಮ. ಇದರಲ್ಲಿ ನಾವು ಯಶಸ್ಸು ಗಳಿಸುತ್ತೇವೆ. 2029ರಲ್ಲಿ ಯಾವ ಕಾರಣಕ್ಕೂ ಬಿಜೆಪಿ ಅಧಿಕಾರಕ್ಕೆ ಬರಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಎಸ್ಐಆರ್ ವಿರೋಧಿಸಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ದೇಶಾದ್ಯಂತ ಎಸ್ಐಆರ್ ಪ್ರಕ್ರಿಯೆ ಕಾನೂನು ಪ್ರಕಾರ ನಡೆದಿಲ್ಲ. ಅದಕ್ಕಾಗಿ SIR ರದ್ದಾಗಬೇಕು. ಸಿಇಸಿ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಜ್ಞಾನೇಶ್ ಕುಮಾರ್ ಆಯ್ಕೆ ಆಗಿದ್ದು ಹೇಗೆ ಗೊತ್ತಾ? ಎಂದು ವಿವರಣೆ ನೀಡಿದ ಅವರು, 2024ರಲ್ಲಿ ಲೋಕಸಭಾ ಚುನಾವಣೆಯಲ್ಲಿ NDA 240 ಸ್ಥಾನ ಮಾತ್ರ ಗೆಲ್ತು. ಬಿಜೆಪಿಗೆ ಮೆಜಾರಿಟಿ ಬರಲಿಲ್ಲ, ಅದಕ್ಕೋಸ್ಕರ ಮೋದಿ, ಅಮಿತ್ ಶಾ ಕುತಂತ್ರ ಮಾಡಿದ್ರು. ಐಎಎಸ್ ಅಧಿಕಾರಿ ಜ್ಞಾನೇಶ್ ಕುಮಾರ್ ಇತಿಹಾಸ ಸರಿ ಇಲ್ಲ. ಜ್ಞಾನೇಶ್ ಕುಮಾರ್ ಕೇರಳದಲ್ಲಿ ಐಎಎಸ್ ಅಧಿಕಾರಿಯಾಗಿದ್ದರು. ಆಯ್ಕೆ ಸಮಿತಿಯಲ್ಲಿ ಪ್ರಧಾನಿ, ಸಿಜೆಐ, ವಿಪಕ್ಷ ನಾಯಕರು ಇರ್ತಾರೆ. ಆದರೆ ಇವರನ್ನು ಆಯ್ಕೆ ಮಾಡುವ ಮೊದಲೇ ಸಮಿತಿ ಬದಲಾಯಿಸ್ತಾರೆ.
ಸಿಜೆಐ ತೆಗೆದು ಸಂಪುಟದವರನ್ನು ಸದಸ್ಯರನ್ನಾಗಿ ಮಾಡಿಕೊಳ್ಳುತ್ತಾರೆ. ಇದಕ್ಕೆ ರಾಹುಲ್ ಗಾಂಧಿ ವಿರೋಧ ಮಾಡಿದ್ದರೂ ಜ್ಞಾನೇಶ್ ಕುಮಾರ್ ಅವರನ್ನು ಆಯ್ಕೆ ಮಾಡ್ತಾರೆ. ಆಮೇಲೆ ಎಸ್ಐಆರ್ ಏಕಮುಖವಾಗಿ ಮಾಡುವ ಮೂಲಕ ಜ್ಞಾನೇಶ್ ಕುಮಾರ್ ಅವರನ್ನು ಬಿಜೆಪಿಯ ಕೈಗೊಂಬೆ ಮಾಡಿಕೊಳ್ತಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯು ಕಾನೂನು ಹಾಗೂ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಈ ಪ್ರಕ್ರಿಯೆಯನ್ನು ಕೂಡಲೇ ರದ್ದುಗೊಳಿಸಬೇಕು ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಎಸ್ಐಆರ್ ರದ್ದತಿ ಮತ್ತು ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆ ಎಂಬ ಎರಡು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ದೇಶಾದ್ಯಂತ ಹೋರಾಟ ನಡೆಯುತ್ತಿದೆ. ನವೆಂಬರ್ 1ರಂದು ದೆಹಲಿಯಲ್ಲಿ ಈ ಸಂಬಂಧ ಬೃಹತ್ ಪ್ರತಿಭಟನಾ ಸಮಾವೇಶ ನಡೆದಿದ್ದು, ಕರ್ನಾಟಕದಲ್ಲಿಯೂ ಕಾಂಗ್ರೆಸ್ ಹಾಗೂ ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳು ಹೋರಾಟವನ್ನು ಮುಂದುವರಿಸಿವೆ. ಇದು ಕೇವಲ ಮತದಾರರ ಪಟ್ಟಿಯ ಪರಿಷ್ಕರಣೆಗೆ ಸಂಬಂಧಿಸಿದ ವಿಚಾರವಲ್ಲ. ದೇಶದ ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾರರ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಮಹತ್ವದ ಹೋರಾಟವಾಗಿದೆ ಎಂದು ತಿಳಿಸಿದರು.
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕೇವಲ 240 ಸ್ಥಾನಗಳನ್ನು ಗೆದ್ದಿದ್ದು, ಸ್ವಂತ ಬಲದಿಂದ ಬಹುಮತ ಪಡೆಯಲು ಸಾಧ್ಯವಾಗಲಿಲ್ಲ. ಮಿತ್ರಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚುನಾವಣಾ ವ್ಯವಸ್ಥೆಯ ಮೇಲೆ ಪ್ರಭಾವ ಬೀರುವ ಪ್ರಯತ್ನಗಳನ್ನು ಆರಂಭಿಸಿದ್ದಾರೆ. ಚುನಾವಣಾ ಆಯೋಗದ ಸ್ವಾಯತ್ತತೆಗೆ ಧಕ್ಕೆ ತರುವ ಮೂಲಕ ತಮ್ಮ ರಾಜಕೀಯ ಹಿತಾಸಕ್ತಿಗಳನ್ನು ಸಾಧಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.