Sting operation ಸುಳಿಯಲ್ಲಿ 'ಕೈ' ಪಾಳಯ: ಡ್ಯಾಮೇಜ್ ಕಂಟ್ರೋಲ್‌ಗೆ ಮುಂದು; ದಿಢೀರ್ ಸಿದ್ದು ಭೇಟಿಯಾದ ಡಿಕೆಶಿ, ಒಂದೂವರೆ ಗಂಟೆ ರಹಸ್ಯ ಮಾತುಕತೆ..!

ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ನಡೆದ ಸಿದ್ದರಾಮಯ್ಯ ಅವರೊಂದಿಗಿನ ಸಭೆಯಲ್ಲಿ ಹಲವು ರಾಜಕೀಯ ಹಾಗೂ ಸಂಘಟನಾತ್ಮಕ ವಿಚಾರಗಳು ಚರ್ಚೆಯಾಗಿವೆ ಎಂದು ತಿಳಿದುಬಂದಿದೆ.
The meeting, which lasted over one-and-a-half hours, also covered a range of political and organisational issues.
ಸಿದ್ದರಾಮಯ್ಯ ಅವರನ್ನು ಭೇಟಿಯಾದ ಡಿಕೆ.ಶಿವಕುಮಾರ್.
Updated on: 

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ಬಿರುಗಾಳಿ ಎಬ್ಬಿಸಿದ್ದು, ಈ ನಡುವೆ ಡ್ಯಾಮೇಜ್ ಕಂಟ್ರೋಲ್'ಗೆ ಮುಂದಾಗಿರುವ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ದಿಢೀರ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಇಬ್ಬರೂ ನಾಯಕರು ಸುಮಾರು ಒಂದೂವರೆ ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಸೋಮವಾರ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಡಿಕೆ.ಶಿವಕುಮಾರ್ ಅವರು ದೀಪಾವಳಿ ಹಬ್ಬದ ಶುಭಾಶಯ ಕೋರಿದರು. ಬಳಿಕ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರೊಂದಿಗೂ ಮುಖ್ಯಮಂತ್ರಿಗಳು ಚರ್ಚೆ ನಡೆಸಿದರು.

ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ನಡೆದ ಸಿದ್ದರಾಮಯ್ಯ ಅವರೊಂದಿಗಿನ ಸಭೆಯಲ್ಲಿ ಹಲವು ರಾಜಕೀಯ ಹಾಗೂ ಸಂಘಟನಾತ್ಮಕ ವಿಚಾರಗಳು ಚರ್ಚೆಯಾಗಿವೆ ಎಂದು ತಿಳಿದುಬಂದಿದೆ.

ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಡೆದಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ವಿವಾದ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ 2028ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಸಿದ್ಧತೆಗಳ ಕುರಿತು ಇಬ್ಬರೂ ನಾಯಕರು ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು ಎಂದು ತಿಳಿದುಬಂದಿದೆ.

ಸ್ಟಿಂಗ್ ಆಪರೇಷನ್ ವಿವಾದದಿಂದ ಪಕ್ಷ ಹಾಗೂ ಕಾಂಗ್ರೆಸ್ ಸರ್ಕಾರದ ಮೇಲೆ ಉಂಟಾಗಿರುವ ರಾಜಕೀಯ ಪರಿಣಾಮಗಳ ಬಗ್ಗೆಯೂ ಚರ್ಚೆ ನಡೆದಿದೆ. ಇದರ ಜತೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ), ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳ ಸಿದ್ಧತೆಗಳ ಬಗ್ಗೆಯೂ ಇಬ್ಬರು ನಾಯಕರು ಸಮಾಲೋಚಿಸಿದ್ದಾರೆ.

2028ರ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವುದು ಹಾಗೂ ಸರ್ಕಾರದಲ್ಲಿ ಬಾಕಿ ಉಳಿದಿರುವ ಆಡಳಿತಾತ್ಮಕ ಮತ್ತು ಸಂಘಟನಾತ್ಮಕ ವಿಚಾರಗಳೂ ಚರ್ಚೆಗೆ ಬಂದಿವೆ ಎಂದು ಮೂಲಗಳು ತಿಳಿಸಿವೆ.

The meeting, which lasted over one-and-a-half hours, also covered a range of political and organisational issues.
ಸಿದ್ದರಾಮಯ್ಯ, ನನ್ನ ನಡುವೆ ಯಾವುದೇ ಮುನಿಸಿಲ್ಲ: ಸಿಎಂ ಡಿ.ಕೆ ಶಿವಕುಮಾರ್!

ಇತ್ತೀಚೆಗೆ ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿ ಕಾಂಗ್ರೆಸ್ ಹಿನ್ನಡೆ ಅನುಭವಿಸಿರುವ ಹಿನ್ನೆಲೆಯಲ್ಲಿ, ಮುಂಬರುವ ಚುನಾವಣೆಗಳನ್ನು ಪಕ್ಷದ ನಾಯಕರು ಒಗ್ಗಟ್ಟಿನಿಂದ ಎದುರಿಸಬೇಕೆಂದು ಸಿದ್ದರಾಮಯ್ಯ ಒತ್ತಿ ಹೇಳಿದ್ದಾರೆ ಎನ್ನಲಾಗಿದೆ.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ನಮ್ಮ ಪಕ್ಷದ ನಾಯಕರು. ಅವರೊಂದಿಗೆ ಸರ್ಕಾರ ಮತ್ತು ಪಕ್ಷ ಸಂಘಟನೆಗೆ ಸಂಬಂಧಿಸಿದ ಹಲವು ವಿಚಾರಗಳನ್ನು ಚರ್ಚಿಸಿದ್ದೇನೆ ಎಂದು ತಿಳಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶಗಳ ಕುರಿತು ಚರ್ಚಿಸಲಾಗಿದೆ. ಈ ಸಂಬಂಧ ಎಲ್ಲಾ ಶಾಸಕರ ಸಭೆಯನ್ನು ಕರೆಯಲಾಗಿದೆ. ಬಳಿಕ ವಿವಿಧ ಸಮುದಾಯಗಳಿಗೆ ಸೇರಿದ ಶಾಸಕರೊಂದಿಗೂ ಸಭೆ ನಡೆಸಲಾಗುವುದು ಎಂದರು.

ಪಕ್ಷದ ವಿಚಾರಗಳು ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಬಗ್ಗೆಯೂ ಸಮಾಲೋಚನೆ ನಡೆಸಿದ್ದೇವೆ ಎಂದು ಹೇಳಿದರು.

ಜಾತಿ ಗಣತಿ ವರದಿ ಜಾರಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷ ನೀಡಿರುವ ಭರವಸೆಗೆ ಬದ್ಧವಾಗಿದೆ. ಆರಂಭದಿಂದಲೂ ಜಾತಿ ಗಣತಿ ವಿಚಾರದಲ್ಲಿ ಪಕ್ಷ ಸಿದ್ಧತೆ ಮಾಡಿಕೊಂಡಿದ್ದು, ಅದನ್ನು ಜಾರಿಗೊಳಿಸುವ ಬದ್ಧತೆಯನ್ನು ಮುಂದುವರಿಸಲಿದೆ. ಇದೇ ವೇಳೆ ನ್ಯಾಯಾಲಯದ ವಿಚಾರಣೆ ಹಾಗೂ ತೀರ್ಪುಗಳ ಮೇಲೂ ನಿಗಾ ಇರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಇಬ್ಬರು ಹಿರಿಯ ನಾಯಕರ ನಡುವಿನ ಭಿನ್ನಾಭಿಪ್ರಾಯಗಳ ಕುರಿತು ರಾಜಕೀಯ ವಲಯದಲ್ಲಿ ಊಹಾಪೋಹಗಳು ಹರಿದಾಡುತ್ತಿರುವ ಸಂದರ್ಭದಲ್ಲೇ ಈ ಭೇಟಿ ನಡೆದಿರುವುದು ಮಹತ್ವ ಪಡೆದುಕೊಂಡಿದೆ. ಅದರಲ್ಲೂ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಡೆದಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ವಿವಾದದ ಬಳಿಕ ಈ ಬೆಳವಣಿಗೆ ಮತ್ತಷ್ಟು ಕುತೂಹಲ ಮೂಡಿಸಿದೆ.

ಅಕ್ಟೋಬರ್ 6ರಂದು ಸಿದ್ದರಾಮಯ್ಯ ಅವರು ತಮ್ಮ ವಿರುದ್ಧದ ಸ್ಟಿಂಗ್ ವಿಡಿಯೊ ನಕಲಿಯಾಗಿದ್ದು, ತಮ್ಮ ವರ್ಚಸ್ಸಿಗೆ ಧಕ್ಕೆ ತರುವ ಹಾಗೂ ಬ್ಲ್ಯಾಕ್‌ಮೇಲ್ ಮಾಡುವ ಉದ್ದೇಶದಿಂದ ಸೃಷ್ಟಿಸಲಾಗಿದೆ ಎಂದು ಆರೋಪಿಸಿ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದರು. ಈ ಸಂಬಂಧ ಮಾಧ್ಯಮ ಸಂಸ್ಥೆಗಳು ವಿಡಿಯೊವನ್ನು ಪ್ರಕಟಿಸದಂತೆ ಅಥವಾ ಪ್ರಸಾರ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆಯನ್ನೂ ಪಡೆದಿದ್ದರು.

ಬೆಂಗಳೂರು ಪೊಲೀಸರ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪ್ರಾಥಮಿಕ ತನಿಖೆ ನಡೆಸಿ, ಸಂಗ್ರಹಿಸಿದ ದಾಖಲೆಗಳು ಹಾಗೂ ಹೇಳಿಕೆಗಳಲ್ಲಿ ಆರೋಪಿತ ಘಟನೆ ನಡೆದಿರುವುದಕ್ಕೆ ಪೂರಕವಾದ ಸಾಕ್ಷ್ಯಗಳು ಕಂಡುಬಂದಿಲ್ಲ ಎಂದು ತಿಳಿಸಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿತ್ತು. ಆದರೆ, ವಿಡಿಯೊ ಚಿತ್ರೀಕರಣ ಮತ್ತು ಪ್ರಸಾರದ ಹಿಂದಿನ ಸಂಚಿನ ಕುರಿತು ತನಿಖೆ ಮುಂದುವರಿದಿದೆ.

ಮುಂದಿನ ತನಿಖೆಯ ಭಾಗವಾಗಿ ಮಾಜಿ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಅವರನ್ನು ಸೋಮವಾರ ಸಿಸಿಬಿ ವಿಚಾರಣೆ ನಡೆಸಿದೆ. ವಿಡಿಯೊ ಚಿತ್ರೀಕರಣ ಮತ್ತು ಪ್ರಸಾರದಲ್ಲಿ ಅವರ ಪಾತ್ರದ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಮೊಬೈಲ್ ಫೋನ್ ಮತ್ತು ಲ್ಯಾಪ್‌ಟಾಪ್ ಸೇರಿದಂತೆ ಎಲೆಕ್ಟ್ರಾನಿಕ್ ಸಾಧನಗಳನ್ನು ಒದಗಿಸುವಂತೆಯೂ ಕೇಳಲಾಗಿದೆ. ಈ ವಿವಾದದ ಹಿನ್ನೆಲೆಯಲ್ಲಿ ಕೃಪಾ ಆಳ್ವ ಅವರನ್ನು ಈ ಹಿಂದೆ ಕಾಂಗ್ರೆಸ್ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿತ್ತು.

ಇತ್ತೀಚೆಗೆ ದೆಹಲಿ ಪ್ರವಾಸ ಕೈಗೊಂಡಿದ್ದ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್‌ಗೆ ಸ್ಟಿಂಗ್ ಆಪರೇಷನ್ ವಿವಾದದ ಕುರಿತು ಮಾಹಿತಿ ನೀಡಿದ್ದರು ಎನ್ನಲಾಗಿದೆ. ಈ ವೇಳೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನೂ ಭೇಟಿಯಾಗಿದ್ದರು.

ಇಬ್ಬರು ನಾಯಕರ ನಡುವಿನ ಸೋಮವಾರದ ಭೇಟಿ ಸಕಾರಾತ್ಮಕ ರಾಜಕೀಯ ಬೆಳವಣಿಗೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ಬಣ್ಣಿಸಿದ್ದಾರೆ.

ಇಬ್ಬರ ನಡುವಿನ ಭಿನ್ನಾಭಿಪ್ರಾಯಗಳನ್ನು ಬಳಸಿಕೊಂಡು ರಾಜಕೀಯ ಲಾಭ ಪಡೆಯಲು ಬಿಜೆಪಿ ಮತ್ತು ಜೆಡಿಎಸ್ ಪ್ರಯತ್ನಿಸಬಹುದು. ಹೀಗಾಗಿ ಈ ಭೇಟಿ ಮಹತ್ವದ್ದಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದೇ ವೇಳೆ ನಿಗಮ ಮತ್ತು ಮಂಡಳಿಗಳಿಗೆ ಬಾಕಿ ಉಳಿದಿರುವ ನೇಮಕಾತಿಗಳು ಶೀಘ್ರ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಡಿಸೆಂಬರ್ 2ರಿಂದ ಬೆಳಗಾವಿಯಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೂ ಮುನ್ನ ಐವರು ಸದಸ್ಯರನ್ನು ವಿಧಾನ ಪರಿಷತ್‌ಗೆ ನಾಮನಿರ್ದೇಶನ ಮಾಡುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X