ಹಿರಿಯೂರು ಉಪ ಚುನಾವಣೆ ಬಿಜೆಪಿ-ಜೆಡಿಎಸ್ ಮಧ್ಯೆ ಟಿಕೆಟ್‌ಗೆ ಪೈಪೋಟಿ; ಜೆಡಿಎಸ್ ಮನವೊಲಿಸುವ ವಿಶ್ವಾಸವಿದೆ ಎಂದ ಆರ್. ಅಶೋಕ್

ಈ ಕುರಿತು ಮಾತನಾಡಿದ ಅಶೋಕ್, ಜೆಡಿಎಸ್ ನಾಯಕ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದರು. ಹಿರಿಯೂರು ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡುವಂತೆ ಜೆಡಿಎಸ್ ನಾಯಕರನ್ನು ಬಿಜೆಪಿ ಕೇಂದ್ರ ನಾಯಕರು ಮನವೊಲಿಸುವ ವಿಶ್ವಾಸವಿದೆ ಎಂದರು.
R Ashok and H D Kumaraswamy
ಆರ್ ಅಶೋಕ್, ಹೆಚ್ ಡಿ ಕುಮಾರಸ್ವಾಮಿ
Updated on: 

ಬೆಂಗಳೂರು: ಉಪ ಚುನಾವಣೆ ದಿನಾಂಕ ಘೋಷಣೆಯಾಗದ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ. ಈ ನಡುವೆ, ಬಿಜೆಪಿ ಹಿರಿಯ ನಾಯಕ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಸ್ಪರ್ಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದು, ಮೈತ್ರಿ ಪಕ್ಷ ಜೆಡಿಎಸ್ ಮನವೊಲಿಸುವ ಆಶಯವನ್ನೂ ಹೊರಹಾಕಿದ್ದಾರೆ.

ಅಶೋಕ್ ಅವರ ಈ ಹೇಳಿಕೆಯು ಬಿಜೆಪಿ ಮತ್ತು ಜೆಡಿಎಸ್ ನಡುವಿನ ಕ್ಷೇತ್ರ ಹಂಚಿಕೆ ವಿಚಾರ ಇನ್ನೂ ಇತ್ಯರ್ಥವಾಗಿಲ್ಲ ಎಂಬುದನ್ನು ಸೂಚಿಸಿದೆ.

ಈ ಕುರಿತು ಮಾತನಾಡಿದ ಅಶೋಕ್, ಜೆಡಿಎಸ್ ನಾಯಕ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದರು. ಹಿರಿಯೂರು ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡುವಂತೆ ಜೆಡಿಎಸ್ ನಾಯಕರನ್ನು ಬಿಜೆಪಿ ಕೇಂದ್ರ ನಾಯಕರು ಮನವೊಲಿಸುವ ವಿಶ್ವಾಸವಿದೆ ಎಂದರು.

ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಯೋಜನಾ ಇಲಾಖೆ ಸಚಿವರಾಗಿದ್ದ ಹಿರಿಯೂರು ಶಾಸಕ ಡಿ. ಸುಧಾಕರ್ ಅವರು ಕಳೆದ ಮೇ ತಿಂಗಳಲ್ಲಿ ನಿಧನರಾದ ಹಿನ್ನೆಲೆಯಲ್ಲಿ ಕ್ಷೇತ್ರ ತೆರವಾಗಿದೆ. ಚುನಾವಣಾ ಆಯೋಗ ಇನ್ನೂ ಉಪಚುನಾವಣೆ ದಿನಾಂಕ ಪ್ರಕಟಿಸಿಲ್ಲ.

ಈ ಕ್ಷೇತ್ರವನ್ನು ನಮ್ಮ ಪಕ್ಷಕ್ಕೆ ಬಿಟ್ಟುಕೊಡಬೇಕು ಎಂಬ ನಿರ್ಧಾರಕ್ಕೆ ರಾಜ್ಯ ಬಿಜೆಪಿ ಘಟಕ ಬಂದಿದೆ. ಈ ಬಗ್ಗೆ ನಾನು ಕುಮಾರಸ್ವಾಮಿ ಅವರೊಂದಿಗೂ ಮಾತನಾಡುತ್ತೇನೆ. ಅಂತಿಮವಾಗಿ ನಮ್ಮ ಕೇಂದ್ರ ನಾಯಕರು ಜೆಡಿಎಸ್ ನಾಯಕರನ್ನು ಮನವೊಲಿಸಿ ಕ್ಷೇತ್ರವನ್ನು ಬಿಜೆಪಿಗೆ ಕೊಡಿಸುವ ವಿಶ್ವಾಸವಿದೆ ಎಂದು ಅಶೋಕ್ ಸುದ್ದಿಗಾರರಿಗೆ ತಿಳಿಸಿದರು.

ಆದರೆ, ಬಿಜೆಪಿ ಕೇಂದ್ರ ನಾಯಕತ್ವ ತೆಗೆದುಕೊಳ್ಳುವ ನಿರ್ಧಾರಕ್ಕೆ ರಾಜ್ಯ ಘಟಕ ಬದ್ಧವಾಗಿರಲಿದೆ ಎಂದು ಅವರು ಸ್ಪಷ್ಟಪಡಿಸಿದರು.

R Ashok and H D Kumaraswamy
ಹಿರಿಯೂರು ಉಪಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಗೊಂದಲ?: HDK ಅಸಮಾಧಾನ

ಈಗಾಗಲೇ ಹಿರಿಯೂರು ಉಪ ಚುನಾವಣೆಯ ಉಸ್ತುವಾರಿಗಾಗಿ ಬಿಜೆಪಿ ಒಂಬತ್ತು ನಾಯಕರನ್ನು ನಿಯೋಜಿಸಿದೆ. ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವ ಬಿ. ಶ್ರೀರಾಮುಲು, ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜ್, ಶಾಸಕ ಎಂ. ಚಂದ್ರಪ್ಪ, ಮಾಜಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ಮಾಜಿ ಸಂಸದ ಎಸ್. ಮುನಿಸ್ವಾಮಿ ಮತ್ತು ಜಿಲ್ಲಾ ಬಿಜೆಪಿ ಅಧ್ಯಕ್ಷ ಚಿದಾನಂದ ಎಂ. ಗೌಡ ಅವರಿಗೆ ಚುನಾವಣೆಯ ಜವಾಬ್ದಾರಿ ವಹಿಸಲಾಗಿದೆ.

ಇತ್ತೀಚೆಗೆ ಕುಮಾರಸ್ವಾಮಿ ಅವರು ಹಿರಿಯೂರು ಉಪ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಜೆಡಿಎಸ್ ನಾಯಕರು ಮತ್ತು ಕಾರ್ಯಕರ್ತರು ಒಲವು ಹೊಂದಿದ್ದಾರೆ ಎಂದು ಹೇಳಿದ್ದರು.

ಹಿರಿಯೂರು ಉಪಚುನಾವಣೆಯಲ್ಲಿ ಒಮ್ಮತದ ಎನ್‌ಡಿಎ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಈಗಾಗಲೇ ಬಿಜೆಪಿ ರಾಷ್ಟ್ರೀಯ ನಾಯಕರೊಂದಿಗೆ ಮಾತುಕತೆ ನಡೆಸಿದ್ದೇನೆ ಎಂದು ತಿಳಿಸಿದ್ದರು.

ಈ ವಾರ ರಾಜ್ಯಮಟ್ಟದ ಸಮನ್ವಯ ಸಮಿತಿ ರಚಿಸಲು ಎರಡೂ ಪಕ್ಷಗಳು ನಿರ್ಧರಿಸಿವೆ. ಬಳಿಕ ಜಿಲ್ಲಾ ಮಟ್ಟದಲ್ಲಿಯೂ ಇದೇ ರೀತಿಯ ಸಮಿತಿಗಳನ್ನು ರಚಿಸಲಾಗುವುದು ಎಂದು ಅಶೋಕ್ ಹೇಳಿದರು.

ಜಿಲ್ಲಾ ಮಟ್ಟದ ಸಮಿತಿಗಳು ಎರಡೂ ಪಕ್ಷಗಳ ಕಾರ್ಯಕರ್ತರ ಅಭಿಪ್ರಾಯಗಳನ್ನು ಸಂಗ್ರಹಿಸಲಿವೆ. ಅವರ ಪ್ರತಿಕ್ರಿಯೆ ಮತ್ತು ಜಿಲ್ಲೆಗಳಿಂದ ಬರುವ ವರದಿಗಳ ಆಧಾರದ ಮೇಲೆ ರಾಜ್ಯಮಟ್ಟದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X