

ಬೆಂಗಳೂರು: ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಕೋರಿ ಫಾರ್ಮ್-7 ಅರ್ಜಿಗಳನ್ನು ಸಲ್ಲಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸುವುದನ್ನು ಮುಂದುವರಿಸಿದರೆ, ಪೊಲೀಸ್ ಠಾಣೆಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (ಎಸ್‌ಪಿ) ಕಚೇರಿಗಳಿಗೆ ಮುತ್ತಿಗೆ ಹಾಕುವುದಾಗಿ ಬಿಜೆಪಿ ಎಚ್ಚರಿಕೆ ನೀಡಿದೆ.
ರಾಜ್ಯ ಬಿಜೆಪಿ ಸಹ ಉಸ್ತುವಾರಿ ಕಸಂ ವೆಂಕಟೇಶ್ ಉಪಸ್ಥಿತಿಯಲ್ಲಿ ನಡೆದ ಪಕ್ಷದ ಕೋರ್ ಕಮಿಟಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಈ ಎಚ್ಚರಿಕೆ ನೀಡಿದರು.
ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದರೂ ಕಾಂಗ್ರೆಸ್ ಸರ್ಕಾರ ಬಿಜೆಪಿ ಕಾರ್ಯಕರ್ತರ ವಿರುದ್ಧ ಪೊಲೀಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಇದೇ ವೇಳೆ “ಫಾರ್ಮ್-7 ಅರ್ಜಿಗಳನ್ನು ಸಲ್ಲಿಸಿದ್ದಕ್ಕಾಗಿ ನಮ್ಮ ಕಾರ್ಯಕರ್ತರ ವಿರುದ್ಧ ಸರ್ಕಾರ ಎಫ್‌ಐಆರ್ ದಾಖಲಿಸುವುದನ್ನು ಮುಂದುವರಿಸಿದರೆ, ಪೊಲೀಸ್ ಠಾಣೆಗಳು ಮತ್ತು ಎಸ್‌ಪಿ ಕಚೇರಿಗಳಿಗೆ ಮುತ್ತಿಗೆ ಹಾಕಲು ನಾವು ನಿರ್ಧರಿಸಿದ್ದೇವೆ” ಎಂದು ಹೇಳಿದರು.
ಸಭೆಯಲ್ಲಿ ಖಾಯಂ ನಿವಾಸಿ ಪ್ರಮಾಣಪತ್ರಗಳ (ಪಿಆರ್‌ಸಿ) ವಿತರಣೆ, ಉಪಚುನಾವಣೆ ಹಾಗೂ ಜಿಲ್ಲಾ ಪಂಚಾಯಿತಿ (ಜಿಪಂ), ತಾಲೂಕು ಪಂಚಾಯಿತಿ (ತಾಪಂ) ಚುನಾವಣೆಗಳ ಸಿದ್ಧತೆಗಳ ಬಗ್ಗೆಯೂ ಚರ್ಚಿಸಲಾಯಿತು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಮತ್ತು ಪೌರಾಯುಕ್ತರಿಗೆ ಪಿಆರ್‌ಸಿ ನೀಡುವ ಅಧಿಕಾರವನ್ನು ಸರ್ಕಾರ ವಹಿಸಿರುವುದಕ್ಕೆ ವಿಜಯೇಂದ್ರ ಆಕ್ಷೇಪ ವ್ಯಕ್ತಪಡಿಸಿದರು. ಈ ಅಧಿಕಾರವನ್ನು ತಹಶೀಲ್ದಾರ್ ಮತ್ತು ಅದಕ್ಕಿಂತ ಮೇಲಿನ ಶ್ರೇಣಿಯ ಅಧಿಕಾರಿಗಳಿಗೆ ಮಾತ್ರ ಸೀಮಿತಗೊಳಿಸಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ಸರ್ಕಾರ ಈ ಸಂಬಂಧ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ ಅವರು, ಈ ವಿಚಾರವಾಗಿ ಸರ್ಕಾರಕ್ಕೆ ಪತ್ರ ಬರೆಯುವುದರ ಜೊತೆಗೆ ಚುನಾವಣಾ ಆಯೋಗದ ಗಮನಕ್ಕೂ ತರಲಾಗುವುದು ಎಂದರು.
ಮುಂಬರುವ ಉಪಚುನಾವಣೆಯಲ್ಲಿ ಗೆಲುವಿನ ಗುರಿಯೊಂದಿಗೆ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಜೆಡಿಎಸ್ ನಾಯಕರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ತಿಳಿಸಿದರು.
ಜಿಪಂ ಮತ್ತು ತಾಪಂ ಚುನಾವಣೆಗಳಿಗೆ ಮೀಸಲಾತಿ ವರ್ಗಗಳನ್ನು ಸರ್ಕಾರ ಈಗಾಗಲೇ ಪ್ರಕಟಿಸಿದ್ದು, ಬಿಜೆಪಿ ಚುನಾವಣಾ ಸಿದ್ಧತೆ ಆರಂಭಿಸಿದೆ. ಆದರೆ, ಕೆಲವು ಮೀಸಲಾತಿಗಳು ಆಡಳಿತಾರೂಢ ಪಕ್ಷಕ್ಕೆ ಅನುಕೂಲವಾಗುವಂತೆ ಕಂಡುಬರುತ್ತಿದ್ದು, ಗೊಂದಲಕ್ಕೂ ಕಾರಣವಾಗಿವೆ ಎಂದು ವಿಜಯೇಂದ್ರ ಆರೋಪಿಸಿದರು. ಮೀಸಲಾತಿಯಲ್ಲಿನ ಲೋಪದೋಷಗಳನ್ನು ಸರಿಪಡಿಸಿ, ಯಾವುದೇ ವಿಳಂಬವಿಲ್ಲದೆ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿದರು.
ಪಕ್ಷದ ಕೋರ್ ಕಮಿಟಿಗೆ ಹೊಸ ಸದಸ್ಯರನ್ನು ಸೇರ್ಪಡೆಗೊಳಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಸಮಿತಿಯ ಪುನರ್‌ರಚನೆ ಕುರಿತು ಅಂತಿಮ ನಿರ್ಧಾರವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಕೈಗೊಳ್ಳಲಿದ್ದಾರೆ ಎಂದು ವಿಜಯೇಂದ್ರ ಹೇಳಿದರು.
‘ಸ್ಟಿಂಗ್ ಆಪರೇಷನ್‌ಗಳಲ್ಲಿ ಕಾಂಗ್ರೆಸ್ ನಾಯಕರೇ ಸಿಲುಕಿದ್ದಾರೆ’
ಇದೇ ವಳೆ ಕಾಂಗ್ರೆಸ್ ಸಚಿವರು ಮತ್ತು ಶಾಸಕರನ್ನು ಒಳಗೊಂಡಿರುವ ಎನ್ನಲಾದ ಸ್ಟಿಂಗ್ ಆಪರೇಷನ್‌ಗಳ ಹಿಂದೆ ಬಿಜೆಪಿ ಇದೆ ಎಂಬ ಆರೋಪವನ್ನು ವಿಜಯೇಂದ್ರ ತಳ್ಳಿಹಾಕಿದರು. ಆಡಳಿತಾರೂಢ ಪಕ್ಷದ ನಾಯಕರೇ ತಮ್ಮ ಕೃತ್ಯಗಳ ಸುಳಿಯಲ್ಲಿ ಸಿಲುಕಿದ್ದಾರೆ ಎಂದು ಪ್ರತಿಪಾದಿಸಿದರು.
“ಸ್ಟಿಂಗ್ ಆಪರೇಷನ್‌ಗಳಲ್ಲಿ ಸಿಲುಕಿರುವವರು ಕಾಂಗ್ರೆಸ್‌ನವರೇ. ಅವರೇ ಇಂತಹ ಕಾರ್ಯಾಚರಣೆಗಳನ್ನು ನಡೆಸಿ, ಈಗ ತಾವೇ ಸಿಕ್ಕಿಬಿದ್ದಿದ್ದಾರೆ. ಮೊದಲು ಅವರು ಈ ಪರಿಸ್ಥಿತಿಯಿಂದ ಹೊರಬರಲಿ” ಎಂದು ಹೇಳಿದರು.
ಸಚಿವ ಸಂಪುಟದ ಸದಸ್ಯರು ಆತಂಕಕ್ಕೊಳಗಾದಂತೆ ಕಾಣುತ್ತಿದ್ದಾರೆ, ಕಾಂಗ್ರೆಸ್ ಶಾಸಕ ರವಿ ಗಾಣಿಗ ಅವರ ಹೇಳಿಕೆಗಳನ್ನು ಉಲ್ಲೇಖಿಸಿ, ಅವರ ಆಪ್ತರೂ ಈ ಪ್ರಕರಣದಲ್ಲಿ ಸಿಲುಕಿದ್ದಾರೆ ಎಂದು ಹೇಳಿದರು. ಇದೇ ವೇಳೆ ಈ ಆರೋಪಗಳ ಕುರಿತು ತನಿಖೆ ನಡೆಸುವಂತೆ ಕಾಂಗ್ರೆಸ್ ಸರ್ಕಾರಕ್ಕೆ ಸವಾಲು ಹಾಕಿದರು.
ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ನೀಡಿರುವ ಹೇಳಿಕೆಗಳ ಬಗ್ಗೆಯೂ ಪ್ರಶ್ನೆ ಎತ್ತಿದ ವಿಜಯೇಂದ್ರ ಅವರು, ಸಚಿವರಿಗೆ ಈ ವಿಚಾರದಲ್ಲಿ ಏಕೆ ಆತಂಕವಿದೆ ಮತ್ತು ಪ್ರಕರಣ ಸುಪ್ರೀಂ ಕೋರ್ಟ್‌ವರೆಗೆ ತಲುಪಿದ್ದೇಕೆ ಎಂದು ಪ್ರಶ್ನಿಸಿದರು.
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿಯಲ್ಲಿ ನಡೆದಿವೆ ಎನ್ನಲಾದ ಅಕ್ರಮಗಳ ಕುರಿತು ಪಾರದರ್ಶಕ ತನಿಖೆ ನಡೆಸಬೇಕು ಎಂಬ ಬಿಜೆಪಿ ಆಗ್ರಹವನ್ನು ಅವರು ಪುನರುಚ್ಚರಿಸಿದರು. ತಪ್ಪಿತಸ್ಥರೆಂದು ಸಾಬೀತಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಜಿಪಂ ಮತ್ತು ತಾಪಂ ಚುನಾವಣೆಗಳ ಮೀಸಲಾತಿ ಪಟ್ಟಿಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ ಅವರು, ಆಡಳಿತಾರೂಢ ಕಾಂಗ್ರೆಸ್‌ಗೆ ಅನುಕೂಲವಾಗುವಂತೆ ಮೀಸಲಾತಿ ವರ್ಗಗಳನ್ನು ರೂಪಿಸಲಾಗಿದೆ ಎಂದು ಆರೋಪಿಸಿದರು.
ಈ ಪ್ರಕ್ರಿಯೆಯಿಂದ ಗೊಂದಲವೂ ಸೃಷ್ಟಿಯಾಗಿದೆ ಎಂದ ಅವರು, ಈ ವಿಚಾರವನ್ನು ಪಕ್ಷದಲ್ಲಿ ಮತ್ತಷ್ಟು ಚರ್ಚಿಸಲಾಗುವುದು ಎಂದು ತಿಳಿಸಿದರು.