Sting operation ವಿವಾದ: ‘ಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ’ ಎಂದ ಡಿಕೆಶಿ, ಗೃಹ ಸಚಿವರ ಜೊತೆ ಮಹತ್ವದ ಚರ್ಚೆ, ಪ್ರಿಯಾಂಕ್ ಖರ್ಗೆ ಹೆಗಲಿಗೆ ತನಿಖೆ ಜವಾಬ್ದಾರಿ..!

ಅಕ್ಟೋಬರ್ 16 ರಂದು ಬೆಂಗಳೂರಿನ ಸದಾಶಿವನಗರದಲ್ಲಿರುವ ಮುಖ್ಯಮಂತ್ರಿಯವರ ನಿವಾಸದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವೆ ಸುದೀರ್ಘ ಉನ್ನತ ಮಟ್ಟದ ಸಭೆ ನಡೆಯಿತು.
File photo
ಸಂಗ್ರಹ ಚಿತ್ರOnline Desk
Updated on: 

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಈ ಹಗರಣದ ಸಂಪೂರ್ಣ ತನಿಖೆಯ ಜವಾಬ್ದಾರಿಯನ್ನು ಅವರು ಗೃಹ ಇಲಾಖೆಗೆ ಒಪ್ಪಿಸಿದ್ದಾರೆ.

ಅಕ್ಟೋಬರ್ 16 ರಂದು ಬೆಂಗಳೂರಿನ ಸದಾಶಿವನಗರದಲ್ಲಿರುವ ಮುಖ್ಯಮಂತ್ರಿಯವರ ನಿವಾಸದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವೆ ಸುದೀರ್ಘ ಉನ್ನತ ಮಟ್ಟದ ಸಭೆ ನಡೆಯಿತು.

ಈ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, "ನಾನು ಇಡೀ ಪ್ರಕರಣವನ್ನು ಗೃಹ ಇಲಾಖೆಗೆ ಬಿಟ್ಟಿದ್ದೇನೆ. ಕಾನೂನುಬದ್ಧವಾಗಿ ಅವರೇ ಮುಂದಿನ ತನಿಖೆಯನ್ನು ನಿಭಾಯಿಸಲಿದ್ದಾರೆ," ಎಂದು ಸ್ಪಷ್ಟಪಡಿಸಿದರು. ಅಲ್ಲದೆ, ಈ ವಿವಾದದ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಅವರು ನಿರಾಕರಿಸಿದರು.

ಇಡೀ ಪ್ರಕರಣವನ್ನು ಗೃಹ ಇಲಾಖೆಗೆ ಬಿಟ್ಟಿದ್ದೇನೆ. ಅವರೇ ಅದನ್ನು ನಿರ್ವಹಿಸುತ್ತಿದ್ದಾರೆ. ಎಲ್ಲದಕ್ಕೂ ಕಾಲವೇ ಉತ್ತರ ನೀಡುತ್ತದೆ ಎಂದು ಮಾರ್ಮಿಕವಾಗಿ ನುಡಿದರು.

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಯಾವ ರೀತಿಯ ಆರೋಪವನ್ನಾದರೂ ಮಾಡಲಿ. ನಮಗೆ ಅದರ ಬಗ್ಗೆ ಯಾವುದೇ ಚಿಂತೆ ಇಲ್ಲ. ಸತ್ಯ ಯಾವತ್ತಿದ್ದರೂ ಸತ್ಯವಾಗಿಯೇ ಉಳಿಯುತ್ತದೆ. ಅದನ್ನು ಯಾರಿಂದಲೂ ಅಳಿಸಿಹಾಕಲು ಸಾಧ್ಯವಿಲ್ಲ. ಸೂಕ್ತ ಸಮಯದಲ್ಲಿ ನಾವು ಉತ್ತರ ನೀಡುತ್ತೇವೆ ಎಂದು ಹೇಳಿದರು.

ಏತನ್ಮಧ್ಯ ಪ್ರಿಯಾಂಕ್ ಖರ್ಗೆ ಅವರು ಶಿವಕುಮಾರ್ ಅವರನ್ನು ಭೇಟಿಯಾಗಿ, ಪ್ರಕರಣದ ಪೊಲೀಸ್ ತನಿಖೆಯ ಪ್ರಗತಿ ಹಾಗೂ ಇತ್ತೀಚಿನ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾತುಕತೆ ಮುಗಿದ ಬಳಿಕ ಇಬ್ಬರೂ ಒಂದೇ ಕಾರಿನಲ್ಲಿ ತೆರಳಿದ್ದಾರೆಂದು ತಿಳಿದುಬಂದಿದೆ.

ಪ್ರಕರಣದ ನಿರ್ವಹಣೆ ವಿಚಾರವಾಗಿ ಕುಮಾರಸ್ವಾಮಿ ಮತ್ತು ಪ್ರಿಯಾಂಕ್ ಖರ್ಗೆ ನಡುವೆ ವಾಗ್ದಾಳಿ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.

File photo
ಕಾಂಗ್ರೆಸ್‌ನಲ್ಲಿ ಸ್ಟಿಂಗ್ ಆಪರೇಷನ್ ಕಿಚ್ಚು: ಸಿದ್ದರಾಮಯ್ಯರನ್ನು ಇಂತಹ ಸ್ಥಿತಿಗೆ ತಳ್ಳಬಾರದಿತ್ತು, ಕೋಟಿ ಕೋಟಿ ಹಣ ಎಲ್ಲಿಂದ ಬಂತು..?

ಈ ನಡುವೆ ಸ್ಟಿಂಗ್ ಆಪರೇಷನ್‌ನಲ್ಲಿ ಭಾಗಿಯಾಗಿದ್ದಾರೆ ಎನ್ನಲಾದವರನ್ನು ಬಂಧಿಸಬೇಕು ಮತ್ತು ಪ್ರಕರಣವನ್ನು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ವಹಿಸಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿವೆ.

ಅಕ್ಟೋಬರ್ 15ರಂದು ಕುಮಾರಸ್ವಾಮಿ ಅವರು ಬೆಂಗಳೂರಿನ ನಗರ ಪೊಲೀಸ್ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಿ, ಸ್ಟಿಂಗ್ ಆಪರೇಷನ್‌ನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಆರೋಪಿಸಿರುವ ರಾಕೇಶ್ ಶೆಟ್ಟಿ ಅವರನ್ನು ಬಂಧಿಸುವಂತೆ ಆಗ್ರಹಿಸಿದ್ದರು.

ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಆಯುಕ್ತರು ಭರವಸೆ ನೀಡಿದ ಬಳಿಕ ಅವರು ಪ್ರತಿಭಟನೆಯನ್ನು ಹಿಂಪಡೆದಿದ್ದರು.

ಆದರೆ, ಪ್ರಮುಖ ಆರೋಪಿಯನ್ನು ಬಂಧಿಸಲು ಪೊಲೀಸರಿಗೆ ಎರಡು ದಿನಗಳ ಗಡುವು ನೀಡಿರುವ ಕೇಂದ್ರ ಸಚಿವರು, ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ. ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸಲು ಜೆಡಿಎಸ್ ಶನಿವಾರ ತನ್ನ ಶಾಸಕರು ಮತ್ತು ಪಕ್ಷದ ನಾಯಕರ ಸಭೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಸ್ಟಿಂಗ್ ಆಪರೇಷನ್ ಹಿಂದೆ ರಾಜಕೀಯ ಷಡ್ಯಂತ್ರವಿದೆ ಎಂದು ಆರೋಪಿಸಿರುವ ಕುಮಾರಸ್ವಾಮಿ, ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದವರಿಗೆ ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ಸಂಪರ್ಕವಿದೆ ಎಂದು ದೂರಿದ್ದಾರೆ.

ಇದೇ ವೇಳೆ, ಸಿದ್ದರಾಮಯ್ಯ ಅವರ ಆಪ್ತರು ಹಾಗೂ ಸಚಿವರಾದ ಎಂ.ಬಿ. ಪಾಟೀಲ್ ಮತ್ತು ಕೃಷ್ಣ ಬೈರೇಗೌಡ ಅವರು ಕಾವೇರಿ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿದ್ದಾರೆ.

ಈ ಭೇಟಿ ವೇಳೆ ಅಕ್ಟೋಬರ್ 15ರಂದು ನಡೆದ ಸಚಿವ ಸಂಪುಟ ಸಭೆಯಲ್ಲೂ ಈ ವಿಚಾರ ಚರ್ಚೆಯಾಗಿದೆ ಎಂದು ತಿಳಿದುಬಂದಿದೆ.

ಲಭ್ಯವಿರುವ ಸಾಕ್ಷ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿರುವುದರಿಂದ ಪ್ರತ್ಯೇಕ ಉನ್ನತ ಮಟ್ಟದ ತನಿಖೆಗೆ ಆದೇಶಿಸುವ ಬದಲು, ಪ್ರಸ್ತುತ ನಡೆಯುತ್ತಿರುವ ಪೊಲೀಸ್ ತನಿಖೆಯನ್ನೇ ಮುಂದುವರಿಸಲು ಸರ್ಕಾರ ಒಲವು ತೋರಿದೆ ಎಂದು ಮೂಲಗಳು ತಿಳಿಸಿವೆ. ಸಾಕ್ಷ್ಯಗಳ ಪರಿಶೀಲನೆ ಬಳಿಕ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

ಈ ನಡುವೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂಬ ಕುಮಾರಸ್ವಾಮಿ ಅವರ ಬೇಡಿಕೆಯನ್ನು ಪ್ರಿಯಾಂಕ್ ಖರ್ಗೆ ತಳ್ಳಿಹಾಕಿದ್ದು, ಕರ್ನಾಟಕ ಪೊಲೀಸರೇ ತನಿಖೆ ನಡೆಸಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಸೈಬರ್ ಕ್ರೈಂ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಹಲವು ರಾಜಕೀಯ ನಾಯಕರ ನಡುವೆ ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿರುವ ಈ ಪ್ರಕರಣದಲ್ಲಿ, ಪರಿಶೀಲಿಸದ ಮತ್ತು ಮಾನಹಾನಿಕರ ಎನ್ನಲಾದ ವಿಡಿಯೊಗಳ ಪ್ರಸಾರವನ್ನು ತಡೆಯುವಂತೆ ಕೋರಿ ಸಿದ್ದರಾಮಯ್ಯ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಈ ಸಂಬಂಧ ಅವರಿಗೆ ಮಧ್ಯಂತರ ಪರಿಹಾರವೂ ದೊರೆತಿದೆ.

ಕುಮಾರಸ್ವಾಮಿ ನೀಡಿರುವ ಗಡುವು ಸಮೀಪಿಸುತ್ತಿರುವುದರಿಂದ, ತನಿಖೆಯ ಪ್ರಗತಿ ಮತ್ತು ಪ್ರತಿಪಕ್ಷಗಳ ಬೇಡಿಕೆಗಳಿಗೆ ಸರ್ಕಾರ ನೀಡುವ ಪ್ರತಿಕ್ರಿಯೆ ಮುಂದಿನ ರಾಜಕೀಯ ಬೆಳವಣಿಗೆಗಳ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com