

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದಂತೆ ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಸುತ್ತಿರುವ ಕೇಂದ್ರ ಸೈಬರ್ ಅಪರಾಧ ವಿಭಾಗದ ಪೊಲೀಸರು, ಖಾಸಗಿ ಸುದ್ದಿ ವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದ್ದಾರೆ.
ರಾಕೇಶ್ ಶೆಟ್ಟಿ ಅವರನ್ನು ವಿಚಾರಣೆ ನಡೆಸಿ ಬಳಿಕ ಬಿಡುಗಡೆ ಮಾಡಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಹಾಜರಾಗುವಂತೆ ಅವರಿಗೆ ನೋಟಿಸ್ ಕೂಡ ನೀಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಳೆದ ಒಂದು ವಾರದಿಂದ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸುತ್ತಿದ್ದ ಸೈಬರ್ ಕ್ರೈಂ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.
ಈ ಬೆಳವಣಿಗೆಯ ಬೆನ್ನಲ್ಲೇ ರಾಕೇಶ್ ಶೆಟ್ಟಿ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಮೈಸೂರಿನ ಖಾಸಗಿ ಹೊಟೇಲ್ ನಲ್ಲಿ ತಂಗಿದ್ದ ರಾಕೇಶ್ ಶೆಟ್ಟಿಯನ್ನು ಮೊನ್ನೆ ಬುಧವಾರ ರಾತ್ರಿ ಪೊಲೀಸರು ವಶಕ್ಕೆ ಪಡೆದು, ನಿನ್ನೆ ಗುರುವಾರ ಮುಂಜಾನೆ ಬೆಂಗಳೂರಿಗೆ ಕರೆ ತಂದಿದ್ದಾರೆ.
ಸ್ಟಿಂಗ್ ಆಪರೇಷನ್ ಪ್ರಕರಣದ ಪ್ರಮುಖ ಆರೋಪಿ ರಾಕೇಶ್ ಶೆಟ್ಟಿ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಪೊಲೀಸ್ ಮಹಾ ನಿರ್ದೇಶಕರು ಮತ್ತು ಮಹಾ ನಿರೀಕ್ಷಕರಿಗೆ ದೂರು ಸಲ್ಲಿಸಿದ್ದರು.
ರಾಕೇಶ್ ಶೆಟ್ಟಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಸಿಸಿಹೆಚ್ ನ್ಯಾಯಾಲಯವು ಇಂದಿಗೆ ಮುಂದೂಡಿದೆ.