ಸ್ಟಿಂಗ್ ಆಪರೇಷನ್ ವಿವಾದ: ನಮ್ಮ ಸಮಸ್ಯೆ ನಾವೇ ಬಗೆಹರಿಸಿಕೊಳ್ಳುತ್ತೇವೆ, ಹೈಕಮಾಂಡ್ ಮಧ್ಯಪ್ರವೇಶ ಅಗತ್ಯವಿಲ್ಲ; DCM ಪರಮೇಶ್ವರ್ ಸ್ಪಷ್ಟನೆ

ಇಂತಹ ಸಮಸ್ಯೆಗಳನ್ನು ಬಗೆಹರಿಸಲು ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಇದ್ದಾರೆ. ಪ್ರತಿಯೊಂದು ವಿಚಾರದಲ್ಲೂ ಹೈಕಮಾಂಡ್ ಮಧ್ಯಪ್ರವೇಶಿಸಬೇಕೆಂದು ಪದೇಪದೇ ನಿರೀಕ್ಷಿಸುವುದರಿಂದ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ.
Dr G Parameshwar
ಡಾ ಜಿ ಪರಮೇಶ್ವರ್
Updated on: 

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಡೆದಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ವಿವಾದದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶದ ಅಗತ್ಯವಿಲ್ಲ, ನಮ್ಮ ಸಮಸ್ಯೆಯನ್ನು ನಾವೇ ಬಗೆಹರಿಸಿಕೊಳ್ಳುತ್ತೇವೆಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಭಾನುವಾರ ಹೇಳಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ರಾಜ್ಯ ಮಟ್ಟದಲ್ಲೇ ಚರ್ಚಿಸಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಹೈಕಮಾಂಡ್ ತಕ್ಷಣ ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸುವ ಅಗತ್ಯವಿಲ್ಲ. ಮುಖ್ಯಮಂತ್ರಿ ಮತ್ತು ಪಕ್ಷದ ಅಧ್ಯಕ್ಷರು ಈ ವಿಚಾರವಾಗಿ ಚರ್ಚಿಸಿ ಸ್ಥಳೀಯವಾಗಿಯೇ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.

ಇಂತಹ ಸಮಸ್ಯೆಗಳನ್ನು ಬಗೆಹರಿಸಲು ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಇದ್ದಾರೆ. ಪ್ರತಿಯೊಂದು ವಿಚಾರದಲ್ಲೂ ಹೈಕಮಾಂಡ್ ಮಧ್ಯಪ್ರವೇಶಿಸಬೇಕೆಂದು ಪದೇಪದೇ ನಿರೀಕ್ಷಿಸುವುದರಿಂದ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ ಎಂದು ತಿಳಿಸಿದ್ದಾರೆ.

ಇದೇ ವೇಳೆ ರಾಜ್ಯದಲ್ಲಿನ ಬೆಳವಣಿಗೆಗಳನ್ನು ಬಗೆಹರಿಸಲು ಕಾಂಗ್ರೆಸ್‌ನ ಹಿರಿಯ ನಾಯಕರ ತಂಡವೊಂದು ಕರ್ನಾಟಕಕ್ಕೆ ಬರಲಿದೆ ಎಂಬ ವರದಿಗಳ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಈ ವಿವಾದದಿಂದ ಸರ್ಕಾರದ ಕಾರ್ಯಚಟುವಟಿಕೆಗಳು ಮರೆಮಾಚಲ್ಪಡುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ ಅವರು, ಆಡಳಿತ ಮತ್ತು ಅಭಿವೃದ್ಧಿಗೆ ಸಂಬಂಧಿಸಿದ ವಿಚಾರಗಳಿಗೆ ಸಾರ್ವಜನಿಕ ವಲಯದಲ್ಲಿ ಹೆಚ್ಚಿನ ಗಮನ ಸಿಗಬೇಕು ಎಂದು ಹೇಳಿದರು.

Dr G Parameshwar
ಕೈ ಪಾಳಯದಲ್ಲಿ 'ಸ್ಟಿಂಗ್ ಆಪರೇಷನ್' ಕೋಲಾಹಲ: ನ.2ಕ್ಕೆ ದೆಹಲಿಗೆ ಮಾಜಿ ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿಗೆ ದೂರು ಸಲ್ಲಿಕೆ..?

ರಾಜ್ಯ ಕಾಂಗ್ರೆಸ್‌ನಲ್ಲಿ ರಾಜಕೀಯ ವ್ಯವಹಾರಗಳ ಸಮಿತಿ ರಚಿಸಿರುವ ಕುರಿತು ಮಾತನಾಡಿ, ಈ ಉಪಕ್ರಮ ಕೈಗೊಳ್ಳುವ ಮೊದಲು ಶಿವಕುಮಾರ್ ಅವರು ಪಕ್ಷದ ಹೈಕಮಾಂಡ್‌ನೊಂದಿಗೆ ಸಮಾಲೋಚನೆ ನಡೆಸಿರಬಹುದು ಎಂದು ಅಭಿಪ್ರಾಯಪಟ್ಟರು.

ಪ್ರಮುಖ ರಾಜಕೀಯ ಮತ್ತು ನೀತಿ ನಿರೂಪಣೆಯ ವಿಚಾರಗಳಲ್ಲಿ ಮುಖ್ಯಮಂತ್ರಿ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳುವುದನ್ನು ತಪ್ಪಿಸಿ, ಸಾಮೂಹಿಕ ನಿರ್ಧಾರಕ್ಕೆ ಅವಕಾಶ ಕಲ್ಪಿಸುವುದು ಸಮಿತಿಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಈ ಸಮಿತಿಯು ಮತ್ತೊಂದು ಅಧಿಕಾರ ಕೇಂದ್ರವಾಗಿ ರೂಪುಗೊಳ್ಳಬಹುದು ಎಂಬ ಆತಂಕವನ್ನು ತಳ್ಳಿಹಾಕಿದ ಅವರು, ಸದಸ್ಯರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಇದು ವೇದಿಕೆಯಾಗಲಿದೆ. ದೈನಂದಿನ ಆಡಳಿತದಲ್ಲಿ ಸಮಿತಿ ಹಸ್ತಕ್ಷೇಪ ಮಾಡುವುದಿಲ್ಲ ಎಂದರು.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ 149 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿರುವ ಸಮೀಕ್ಷೆಯ ಕುರಿತು ಪ್ರತಿಕ್ರಿಯಿಸಿದ ಅವರು, ಈಗಲೇ ಯಾವುದೇ ತೀರ್ಮಾನಕ್ಕೆ ಬರುವುದು ಅವಸರದ ಕ್ರಮವಾಗುತ್ತದೆ ಎಂದರು.

ಚುನಾವಣೆ ನಡೆಯುವ ಸಮಯದಲ್ಲಿನ ರಾಜಕೀಯ ಪರಿಸ್ಥಿತಿ ಮತ್ತು ಜನರ ಮನೋಭಾವದ ಮೇಲೆ ಫಲಿತಾಂಶ ನಿರ್ಧಾರವಾಗಲಿದೆ. ಕಾಂಗ್ರೆಸ್ ಈ ಸಮೀಕ್ಷೆಯನ್ನು ಸವಾಲಾಗಿ ಸ್ವೀಕರಿಸಿ, ಜನರ ಬೆಂಬಲ ಗಳಿಸಲು ತನ್ನ ಪ್ರಯತ್ನಗಳನ್ನು ತೀವ್ರಗೊಳಿಸಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com