

ಬೆಂಗಳೂರು: ಸ್ಟಿಂಗ್ ಆಪರೇಷನ್ ವಿವಾದದ ಕುರಿತು ಕಾಂಗ್ರೆಸ್ ಹೈಕಮಾಂಡ್ನೊಂದಿಗೆ ಈಗಾಗಲೇ ಚರ್ಚಿಸಿದ್ದು, ನವೆಂಬರ್ 1ರಂದು ದೆಹಲಿಗೆ ಭೇಟಿ ನೀಡುವ ಸಂದರ್ಭದಲ್ಲಿ ಸಾಧ್ಯವಾದರೆ ರಾಹುಲ್ ಗಾಂಧಿ ಅವರನ್ನು ಭೇಟಿಯಾಗುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಈ ವಿಚಾರವಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಈಗಾಗಲೇ ಚರ್ಚಿಸಿದ್ದೇನೆ. ಆ ಕುಟುಕು ಕಾರ್ಯಾಚರಣೆಯಲ್ಲಿ(Sting operation) ಏನಿದೆ? ಅದೊಂದು ಸುಳ್ಳು ಮತ್ತು ಕಟ್ಟುಕಥೆ ಎಂದು ಹೇಳಿದರು.
ತಮ್ಮ ದೂರಿನ ಸಂಬಂಧ ಪೊಲೀಸರು ನಡೆಸುತ್ತಿರುವ ತನಿಖೆಯಿಂದ ತೃಪ್ತರಾಗಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತನಿಖೆ ಪ್ರಗತಿಯಲ್ಲಿದೆ. ಇಲ್ಲಿ ತೃಪ್ತಿ ಅಥವಾ ಅತೃಪ್ತಿಯ ಪ್ರಶ್ನೆಯೇ ಇಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು ಎಂಬುದು ನನ್ನ ಒತ್ತಾಯ ಎಂದು ತಿಳಿಸಿದರು.