SIR ಕುರಿತು ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ಸತೀಶ್ ಜಾರಕಿಹೊಳಿ; Video

ಈ ಸಂಬಂಧ ವಿವರವಾದ ಲಿಖಿತ ಹೇಳಿಕೆ ಹಾಗೂ ವಿಡಿಯೊ ಸಂದೇಶ ಬಿಡುಗಡೆ ಮಾಡಿರುವ ಹಿರಿಯ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ, ತಮ್ಮ ಹಿಂದಿನ ಹೇಳಿಕೆಯನ್ನು ‘ತಪ್ಪಾಗಿ ಅರ್ಥೈಸಲಾಗಿದೆ’ ಎಂದು ತಿಳಿಸಿದ್ದಾರೆ. ಎಸ್‌ಐಆರ್ ಪ್ರಕ್ರಿಯೆಯನ್ನು ಸಮರ್ಥಿಸುವ ಉದ್ದೇಶ ತಮಗಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Satish Jarakiholi
ಸತೀಶ್ ಜಾರಕಿಹೊಳಿ
Updated on: 

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಸಮರ್ಪಕವಾಗಿ ನಡೆಸಲಾಗಿದೆ ಎಂಬ ಅರ್ಥ ಬರುವಂತೆ ತಾವು ಈ ಹಿಂದೆ ನೀಡಿದ್ದ ಹೇಳಿಕೆಗೆ ವ್ಯಾಪಕ ರಾಜಕೀಯ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಇಂದು ಬೆಳಗ್ಗೆ ಸಾಮಾಜಿಕ ಜಾಲತಾಣ ‘ಎಕ್ಸ್’ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಈ ಸಂಬಂಧ ವಿವರವಾದ ಲಿಖಿತ ಹೇಳಿಕೆ ಹಾಗೂ ವಿಡಿಯೊ ಸಂದೇಶ ಬಿಡುಗಡೆ ಮಾಡಿರುವ ಹಿರಿಯ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ, ತಮ್ಮ ಹಿಂದಿನ ಹೇಳಿಕೆಯನ್ನು ‘ತಪ್ಪಾಗಿ ಅರ್ಥೈಸಲಾಗಿದೆ’ ಎಂದು ತಿಳಿಸಿದ್ದಾರೆ. ಎಸ್‌ಐಆರ್ ಪ್ರಕ್ರಿಯೆಯನ್ನು ಸಮರ್ಥಿಸುವ ಉದ್ದೇಶ ತಮಗಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿ ಬದಲಾವಣೆ ಮಾಡಲು ಬಿಜೆಪಿ ನಡೆಸಿದೆ ಎನ್ನಲಾದ ಪ್ರಯತ್ನಗಳನ್ನು ರಾಜ್ಯ ಕಾಂಗ್ರೆಸ್ ಹೇಗೆ ತಡೆಗಟ್ಟಿದೆ ಎಂಬುದನ್ನು ವಿವರಿಸುವುದು ತಮ್ಮ ಉದ್ದೇಶವಾಗಿತ್ತೇ ಹೊರತು, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಸಮರ್ಥಿಸುವುದಲ್ಲ ಎಂದು ಲಿಖಿತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Satish Jarakiholi
'ಕರ್ನಾಟಕದಲ್ಲಿ SIR ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ; ಬೇರೆ ರಾಜ್ಯಗಳ ಬಗ್ಗೆ ನಮ್ಮ ಆಕ್ಷೇಪ': ಸಚಿವ ಸತೀಶ್ ಜಾರಕಿಹೊಳಿ ವ್ಯತಿರಿಕ್ತ ಹೇಳಿಕೆ; Video

ಎಸ್‌ಐಆರ್ ಕುರಿತು ನಾನು ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಮಾಧ್ಯಮಗಳ ಮುಂದೆ ನಾನು ನೀಡಿದ ಹೇಳಿಕೆಯನ್ನು ಸಂದರ್ಭದಿಂದ ಬೇರ್ಪಡಿಸಿ ಅರ್ಥೈಸಲಾಗಿದೆ. ಇತರ ರಾಜ್ಯಗಳಿಗೆ ಹೋಲಿಸಿದರೆ, ಕರ್ನಾಟಕದಲ್ಲಿ ನಮೂನೆ-7 ನ್ನು ಬಳಸಿಕೊಂಡು ಕಾಂಗ್ರೆಸ್ ಬೆಂಬಲಿತ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಬಿಜೆಪಿ ನಡೆಸಿದ ಸಂಚನ್ನು ನಮ್ಮ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ಹೋರಾಟ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ವಿಫಲಗೊಳಿಸಲಾಗಿದೆ ಎಂಬುದನ್ನು ತಿಳಿಸುವುದು ನನ್ನ ಉದ್ದೇಶವಾಗಿತ್ತು. ಎಸ್‌ಐಆರ್ ಪ್ರಕ್ರಿಯೆ ಸರಿಯಾಗಿದೆ ಎಂಬ ಅರ್ಥದಲ್ಲಿ ನಾನು ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಅರ್ಹ ಮತದಾರರ ಹೆಸರುಗಳನ್ನು ಅನಧಿಕೃತವಾಗಿ ಮತದಾರರ ಪಟ್ಟಿಯಿಂದ ತೆಗೆದುಹಾಕುವ ಪ್ರಯತ್ನಗಳ ವಿರುದ್ಧದ ಹೋರಾಟ ತಮ್ಮ ತವರು ಜಿಲ್ಲೆ ಬೆಳಗಾವಿಯಿಂದಲೇ ಆರಂಭವಾಗಿತ್ತು. ಅರ್ಹ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ತಾವು ಬಲವಾಗಿ ವಿರೋಧಿಸುವುದಾಗಿ ಹೇಳಿದ್ದಾರೆ.

ಇದರೊಂದಿಗೆ ಬಿಡುಗಡೆ ಮಾಡಿರುವ ವಿಡಿಯೊ ಸಂದೇಶದಲ್ಲಿಯೂ ಮತದಾರರ ಪಟ್ಟಿಯಲ್ಲಿನ ಲೋಪದೋಷಗಳ ಕುರಿತು ನಡೆಯುತ್ತಿರುವ ಪರಿಶೀಲನೆಯನ್ನು ವಿವರಿಸಿರುವ ಲೋಕೋಪಯೋಗಿ ಸಚಿವರು, ತಮ್ಮದೇ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಿರುವ ವಿಷಯವನ್ನು ಪ್ರಸ್ತಾಪಿಸಿದ್ದಾರೆ.

‘ಮಾಧ್ಯಮದವರು ನನಗೆ ಹಲವು ಪ್ರಶ್ನೆಗಳನ್ನು ಕೇಳಿದಾಗ, ಬೇರೆ ಬೇರೆ ರಾಜ್ಯಗಳಲ್ಲಿ ನಮೂನೆ-7 ನ್ನು ಬಳಸಿಕೊಂಡು ಕಾಂಗ್ರೆಸ್ ಬೆಂಬಲಿತ ಮತದಾರರ ಮತಗಳನ್ನು ಕಸಿದುಕೊಳ್ಳುವ ಪ್ರಯತ್ನಗಳು ನಡೆದಿವೆ ಎಂಬುದನ್ನು ವಿವರಿಸಲು ಪ್ರಯತ್ನಿಸಿದ್ದೆ. ರಾಹುಲ್ ಗಾಂಧಿ ಅವರ ನೇತೃತ್ವದ ಹೋರಾಟ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ಇಂತಹ ಪ್ರಯತ್ನಗಳನ್ನು ತಡೆಯಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಯಮಕನಮರಡಿ ಕ್ಷೇತ್ರದಲ್ಲಿ 17 ಸಾವಿರ ಮತದಾರರ ಹೆಸರು ಕೈಬಿಟ್ಟಿರುವುದು ಪತ್ತೆ

ತಮ್ಮ ಕ್ಷೇತ್ರದಲ್ಲಿನ ಪರಿಸ್ಥಿತಿಯನ್ನು ವಿವರಿಸಿದ ಸಚಿವರು, ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 17 ಸಾವಿರ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿರುವುದು ಕಂಡುಬಂದಿದೆ ಎಂದು ತಿಳಿಸಿದ್ದಾರೆ.

ಈ ಪ್ರಕರಣ ಬೆಳಗಾವಿ ಜಿಲ್ಲೆಯಿಂದಲೇ ಆರಂಭವಾಗಿತ್ತು. ಈ ಸಂಬಂಧ ಪೊಲೀಸ್ ಪ್ರಕರಣವೂ ದಾಖಲಾಗಿದ್ದು, ಹಲವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ನಂತರ ನಮ್ಮ ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು 17 ಸಾವಿರ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಿರುವುದು ಕಂಡುಬಂದಿದೆ ಎಂದು ಹೇಳಿದ್ದಾರೆ.

ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಇನ್ನೂ ನಮ್ಮ ಕೈಗೆ ಬಂದಿಲ್ಲ. ಅದು ಲಭ್ಯವಾದ ಬಳಿಕ ಪಟ್ಟಿಯಿಂದ ಕೈಬಿಡಲಾದ ಮತದಾರರು ಬೇರೆಡೆಗೆ ಸ್ಥಳಾಂತರಗೊಂಡಿದ್ದಾರೆಯೇ, ಮೃತಪಟ್ಟಿದ್ದಾರೆಯೇ ಅಥವಾ ಒಂದಕ್ಕಿಂತ ಹೆಚ್ಚು ಬಾರಿ ಹೆಸರು ನೋಂದಣಿಯಾಗಿದೆಯೇ ಎಂಬುದನ್ನು ಪರಿಶೀಲಿಸಲಾಗುವುದು. ಆ ಬಳಿಕ ಈ ಕುರಿತು ಸ್ಪಷ್ಟ ಮಾಹಿತಿಯನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು ಬಳಸುವ ಅಧಿಕೃತ ಅರ್ಜಿ ನಮೂನೆ-7ರ ದುರ್ಬಳಕೆ ಆರೋಪಗಳ ಕುರಿತು ರಾಜ್ಯದಲ್ಲಿ ರಾಜಕೀಯ ಚರ್ಚೆ ತೀವ್ರಗೊಂಡಿರುವ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಈ ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X