

ಬೆಂಗಳೂರು: ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್‌ನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಸೆಪ್ಟೆಂಬರ್ 10ರಂದು ಚುನಾವಣೆ ನಡೆಯಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಬಣದ ರಾಜಕೀಯ ಹಣಾಹಣಿಗೆ ವೇದಿಕೆಯಾಗುವ ಸಾಧ್ಯತೆ ಇದೆ.
ಸದ್ಯ ಶತಾಯಗತಾಯ ಅಪೆಕ್ಸ್ ಬ್ಯಾಂಕ್ಗೆ ಮತ್ತೊಮ್ಮೆ ಅಧ್ಯಕ್ಷರಾಗಲು ಕೆಎನ್ ರಾಜಣ್ಣ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇದಕ್ಕೆ ಪೂರಕವೆಂಬಂತೆ ರಾಜಣ್ಣ ಅವರು ದೆಹಲಿಯಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ಭೇಟಿಗೂ ಸಮಯ ಕೇಳಿದ್ದಾರೆ ಎನ್ನಲಾಗಿದೆ.
ಅಧ್ಯಕ್ಷ ಸ್ಥಾನಕ್ಕಾಗಿ ಮಾಜಿ ಸಚಿವ ಕೆಎನ್ ರಾಜಣ್ಣ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್. ರವಿ ನಡುವೆ ಪ್ರಮುಖ ಪೈಪೋಟಿ ಏರ್ಪಟ್ಟಿದೆ. ಇದರ ನಡುವೆ ಯಲ್ಲಾಪುರ ಶಾಸಕ ಅರಬೈಲ್ ಶಿವರಾಮ ಹೆಬ್ಬಾರ್, ಮಾಜಿ ಸಚಿವ ಶಿವಾನಂದ ಪಾಟೀಲ್ ಹಾಗೂ ಬಿಜೆಪಿ ನಾಯಕ, ಮಾಜಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್ ಕೂಡ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿದ್ದಾರೆ.
ಈ ಚುನಾವಣೆಯನ್ನು ಕೇವಲ ಸಹಕಾರ ಕ್ಷೇತ್ರದ ಹುದ್ದೆಯ ಆಯ್ಕೆ ಎಂದು ನೋಡಲಾಗುತ್ತಿಲ್ಲ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಿಗರ ನಡುವಿನ ಪ್ರತಿಷ್ಠೆಯ ಹೋರಾಟವಾಗಿಯೂ ಇದು ಕುತೂಹಲ ಮೂಡಿಸಿದೆ. ಇಬ್ಬರೂ ನಾಯಕರು ತಮ್ಮ ಆಪ್ತ ಅಭ್ಯರ್ಥಿಗಳ ಪರವಾಗಿ ರಾಜಕೀಯ ಲೆಕ್ಕಾಚಾರ ನಡೆಸುತ್ತಿದ್ದಾರೆ ಎನ್ನಲಾಗಿದೆ.
ರಾಜಣ್ಣ ಅವರಿಗೆ ಈ ಹಿಂದೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನ ನೀಡುವ ಭರವಸೆ ಇತ್ತು ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ. ಹೀಗಾಗಿ ಈ ಬಾರಿ ಸ್ಥಾನವನ್ನು ತಮ್ಮದಾಗಿಸಿಕೊಳ್ಳಲು ಅವರು ಸಕ್ರಿಯವಾಗಿ ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ನಿರ್ದೇಶಕರ ಬೆಂಬಲದ ವಿಚಾರದಲ್ಲಿಯೂ ರಾಜಣ್ಣ ಬಲಿಷ್ಠರಾಗಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ. ಒಟ್ಟು 19 ನಿರ್ದೇಶಕರ ಪೈಕಿ 11 ಮಂದಿ ರಾಜಣ್ಣ ಪರವಾಗಿದ್ದಾರೆ ಎನ್ನಲಾಗಿದೆ.
ಇನ್ನೊಂದೆಡೆ, ವಿಧಾನ ಪರಿಷತ್ ಸದಸ್ಯ ಹಾಗೂ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತ ಸಂಬಂಧಿಯಾಗಿರುವ ಎಸ್. ರವಿ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ಮಾಡುವ ಪ್ರಯತ್ನ ನಡೆಯುತ್ತಿದೆ ಎನ್ನಲಾಗಿದೆ. ಹೀಗಾಗಿ ರಾಜಣ್ಣ ಮತ್ತು ಎಸ್. ರವಿ ನಡುವಿನ ಪೈಪೋಟಿ ಇದೀಗ ಮತ್ತಷ್ಟು ತೀವ್ರವಾಗಿದೆ.
ಹಿಂದೆಯೂ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಡಿಕೆ ಶಿವಕುಮಾರ್ ಮತ್ತು ಕೆಎನ್ ರಾಜಣ್ಣ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಆ ಸಂದರ್ಭದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶ ಮಾಡಿತ್ತು. ಅಧಿಕಾರ ಹಸ್ತಾಂತರದ ವಿಚಾರದಲ್ಲಿ ಚರ್ಚೆಗಳು ತೀವ್ರವಾಗಿದ್ದ ಸಮಯದಲ್ಲಿ ರಾಜಣ್ಣ ಅವರು ಸಿದ್ದರಾಮಯ್ಯ ಅವರೇ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಬೇಕು ಎಂಬ ನಿಲುವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದರು.