ಸಚಿವ ಸಂಪುಟ ವಿಸ್ತರಣೆ ಕಸರತ್ತು: ಜೂನ್ 27ಕ್ಕೆ ದೆಹಲಿಗೆ CM ಡಿಕೆಶಿ; ಕೇರಳ ರೆಸಾರ್ಟ್‌ನಲ್ಲಿ ಸಿದ್ದು 'ಕ್ಯಾಂಪ್'; ಹೆಚ್ಚಿದ ಕುತೂಹಲ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗರೊಂದಿಗೆ ಐದು ದಿನಗಳ ವಿಶ್ರಾಂತಿಗಾಗಿ ಕೇರಳದ ಕೊಚ್ಚಿಗೆ ತೆರಳಿದ್ದಾರೆ.
CM DK Shivakumar
ಡಿಕೆ.ಶಿವಕುಮಾರ್
Updated on

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಗಳು ಜೋರಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಜೂನ್ 27ರಂದು ದೆಹಲಿಗೆ ಭೇಟಿ ನೀಡಿ ಪಕ್ಷದ ಹೈಕಮಾಂಡ್ ನಾಯಕರೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಪ್ರಸ್ತುತ ರಾಜ್ಯ ಸಚಿವ ಸಂಪುಟದಲ್ಲಿ 20 ಹುದ್ದೆಗಳು ಖಾಲಿ ಇದ್ದು, ಅವುಗಳ ಭರ್ತಿಗೆ ಸಂಬಂಧಿಸಿದಂತೆ ಅಂತಿಮ ಹಂತದ ಮಾತುಕತೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.

ಇನ್ನೊಂದೆಡೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿದೇಶ ಪ್ರವಾಸದಿಂದ ಜೂನ್ 28ರಂದು ಭಾರತಕ್ಕೆ ಮರಳುವ ನಿರೀಕ್ಷೆಯಿದೆ. ಅವರ ಆಗಮನದ ಬಳಿಕ ಸಚಿವ ಸಂಪುಟ ವಿಸ್ತರಣೆ ಕುರಿತು ಮಹತ್ವದ ನಿರ್ಧಾರಗಳು ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗರೊಂದಿಗೆ ಐದು ದಿನಗಳ ವಿಶ್ರಾಂತಿಗಾಗಿ ಕೇರಳದ ಕೊಚ್ಚಿಗೆ ತೆರಳಿದ್ದಾರೆ.

CM DK Shivakumar
ಸಚಿವ ಸಂಪುಟ ವಿಸ್ತರಣೆ ಮಾಡುವುದು ಹೈಕಮಾಂಡ್ ನಿರ್ಧಾರ; ಕೊಟ್ಟ ಪಟ್ಟಿ ಅನುಷ್ಠಾನಗೊಳಿಸುವುದು ನನ್ನ ಕೆಲಸ: CM ಡಿ.ಕೆ ಶಿವಕುಮಾರ್

ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಸೇರಿದ ರೆಸಾರ್ಟ್‌ನಲ್ಲಿ ಅವರು ತಂಗಲಿದ್ದು, ಮಾಜಿ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್ ಹಾಗೂ ಸಚಿವ ಸ್ಥಾನದ ಆಕಾಂಕ್ಷಿಗಳಾದ ಶಾಸಕರಾದ ಹಂಪನಗೌಡ ಬಾದರ್ಲಿ ಮತ್ತು ಎ.ಎಸ್. ಪೊನ್ನಣ್ಣ ಸಹ ಅವರೊಂದಿಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್‌ನ ಹಲವು ಶಾಸಕರು ತಮ್ಮದೇ ರೀತಿಯಲ್ಲಿ ಲಾಬಿ ನಡೆಸುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಸಲೀಂ ಅಹ್ಮದ್, ಅಶೋಕ್ ಪಟ್ಟಣ, ವಿಜಯಾನಂದ ಕಾಶಪ್ಪನವರ್, ಶರತ್ ಬಚ್ಚೇಗೌಡ, ಎ.ಆರ್. ಕೃಷ್ಣಮೂರ್ತಿ ಸೇರಿದಂತೆ ಹಲವರು ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ತಮ್ಮ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ವಿಧಾನಸಭೆ ಸಭಾಧ್ಯಕ್ಷರ ಹುದ್ದೆಗೆ ಬಿ.ಆರ್. ಪಾಟೀಲ್, ದಿನೇಶ್ ಗುಂಡೂರಾವ್ ಹಾಗೂ ಎಚ್.ಕೆ. ಪಾಟೀಲ್ ಅವರ ಹೆಸರುಗಳು ಕೇಳಿಬರುತ್ತಿವೆ. ಆದರೆ, ಈ ಹುದ್ದೆ ಸ್ವೀಕರಿಸಲು ಅವರು ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com