ಕೋಣಗಳ ಓಟದ ಪಂದ್ಯವನ್ನು ನಡೆಸುವ ವಿಧಾನವನ್ನು ಅವಲಂಬಿಸಿ ಕಂಬಳದಲ್ಲಿ ಮತ್ತೆ ನಾಲ್ಕು ಬಗೆಗಳಿವೆ. ಹಗ್ಗದ ಓಟ, ಅಡ್ಡಹಲಗೆ ಓಟ, ನೇಗಿಲ ಓಟ ಮತ್ತು ಕಣೆ ಹಲಗೆ ಓಟ ಎಂಬ ಹೆಸರುಗಳಿಂದ ಅವುಗಳನ್ನು ಕರೆಯುತ್ತಾರೆ. ಹಗ್ಗದ ಓಟದಲ್ಲಿ, ಕೋಣಗಳು ಒಂದು ನೊಗವನ್ನು ಕಟ್ಟಿಕೊಂಡು ಓಡುತ್ತವೆ. ಆ ನೊಗದ ಮಧ್ಯಕ್ಕೆ ಕಟ್ಟಿದ ಹಗ್ಗಗಳನ್ನು ಹಿಡಿದುಕೊಂಡಿರುವ ಮನುಷ್ಯನು ಕೋಣಗಳ ಜೊತೆ ತಾನೂ ಓಡುತ್ತಾನೆ. ಅಡ್ಡ ಹಲಗೆ ಓಟದಲ್ಲಿ ಆ ಮನುಷ್ಯನು, ನೊಗಕ್ಕೆ ಸೇರಿಸಿರುವ ಹಲಗೆಯ ಮೇಲೆ ನಿಂತುಕೊಂಡು ಕೋಣಗಳ ಓಟವನ್ನು ನಿಯಂತ್ರಿಸುತ್ತಾನೆ. ನೇಗಿಲ ಓಟದಲ್ಲಿ ನೊಗದ ಜಾಗದಲ್ಲಿ ನೇಗಿಲು ಇರುತ್ತದೆ. ಇಲ್ಲಿ ಸಾರಥಿಯು ನೇಗಿಲನ್ನು ಹಿಡಿದಿರುತ್ತಾನೆ. ಆ ನೇಗಿಲಿಗೆ ಕೋಣಗಳನ್ನು ಕಟ್ಟಿರುತ್ತಾರೆ. ಈ ಮೂರು ಪ್ರಭೇದಗಳಲ್ಲಿ, ‘ಮಂಜೊಟ್ಟಿ’ಯನ್ನು (ಪಂದ್ಯದ ಹಾದಿಯ ಕೊನೆ ಬಿಂದು), ಮೊದಲು ತಲುಪುವ ಕೋಣಗಳ ಜೋಡಿಯನ್ನು ವಿಜಯಿಯೆಂದು ಘೋಷಿಸಲಾಗುವುದು. ಆದರೆ, ‘ಕಣೆ ಹಲಗೆ ಓಟ’ದಲ್ಲಿ ಪಂದ್ಯದಲ್ಲಿ ಗೆಲ್ಲುವ ಜೋಡಿಯನ್ನು ನಿರ್ಧರಿಸುವ ವಿಧಾನ ಬೇರೆ. ಕಂಬಳದ ಗದ್ದೆಯ ಎರಡೂ ಬದಿಗಳಲ್ಲಿ, ನೆಲಮಟ್ಟದಿಂದ ಸುಮಾರು ಎರಡು ಮೀಟರುಗಳ ಎತ್ತರದಲ್ಲಿ, ಅಗಲವಾದ ಬಟ್ಟೆ ಅಥವಾ ಮರದ ಹಲಗೆಗಳನ್ನು ಕಟ್ಟಿರುತ್ತಾರೆ. ಇವುಗಳನ್ನು ‘ನಿಶಾನೆ’ ಎಂದು ಕರೆಯುತ್ತಾರೆ. ಕೋಣಗಳು ಓಡುವಾಗ, ನೀರು ಮತ್ತು ಕೆಸರುಗಳ ಮಿಶ್ರಣವು ಎಗರುವ ಎತ್ತರವನ್ನು ಪರಿಗಣಿಸಿ, ಗೆಲ್ಲುವ ಜೋಡಿಯನ್ನು ತೀರ್ಮಾನಿಸುತ್ತಾರೆ. ಪಂದ್ಯದಲ್ಲಿ ಗೆದ್ದ ಜೋಡಿಯ ಒಡೆಯರಿಗೆ ಬಂಗಾರದ ಪದಕ ಮತ್ತು ಷೀಲ್ಡುಗಳನ್ನು ಬಹುಮಾಣವಾಗಿ ಕೊಡುತ್ತಾರೆ. ಗೆಲುವನ್ನು ತಂದಿಕೊಟ್ಟ ಕೋಣಗಳಿಗೆ ಬಾಳೇಹಣ್ಣು, ಎಳನೀರು ಮುಂತಾದ ರುಚಿಯಾದ ಆಹಾರ ದೊರೆಯುತ್ತದೆ.