ಕ್ರೀಡೆ

ಹೈದರಾಬಾದ್‌ನಲ್ಲೇ ಪಂದ್ಯ: ಬಿಸಿಸಿಐ

Published On :

ನವದೆಹಲಿ: ಭಾರತ ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ನಿಗದಿಯಂತೆ ಹೈದರಾಬಾದ್‌ನಲ್ಲೇ ನಡೆಯಲಿದೆ ಎಂದು ಬಿಸಿಸಿಐ ಶುಕ್ರವಾರ ಸ್ಪಷ್ಟಪಡಿಸಿದೆ. ಹೈದರಾಬಾದ್‌ನಲ್ಲಿ ಗುರುವಾರ ಬಾಂಬ್ ಸ್ಫೋಟ ನಡೆದ ಹಿನ್ನೆಲೆಯಲ್ಲಿ ಪಂದ್ಯವನ್ನು ಸ್ಥಳಾಂತರಿಸುವ ಬಗ್ಗೆ ವದಂತಿಗಳು ಹರಡಿದ್ದವು. ಆದರೆ, ಆಂಧ್ರಪ್ರದೇಶ ರಾಜ್ಯ ಸರ್ಕಾರ ಭದ್ರತೆಯ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪಂದ್ಯವನ್ನು ವೇಳಾಪಟ್ಟಿಯಂತೆ ಅಲ್ಲಿಯೇ ನಡೆಸಲು ಬಿಸಿಸಿಐ ತೀರ್ಮಾನಿಸಿದೆ. ಹೈದರಾಬಾದ್‌ನಲ್ಲಿ ಕೇವಲ 5 ನಿಮಿಷಗಳ ಅಂತರದಲ್ಲಿ ಎರಡು ಬಾಂಬ್‌ಗಳು ಸ್ಫೋಟಗೊಂಡಿದ್ದರಿಂದ 14 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಪ್ರವಾಸಿ ಆಸ್ಟ್ರೇಲಿಯಾ ಆಟಗಾರರು ಮತ್ತು ತಂಡದೊಂದಿಗೆ ಆಗಮಿಸಿರುವ ಅಧಿಕಾರಗಳ ಕಳವಳವನ್ನು ಮನಗಂಡಿರುವ ಬಿಸಿಸಿಐ, ಎಲ್ಲ ರೀತಿಯ ಸುರಕ್ಷತಾ ಭರವಸೆಯನ್ನು ಅವರಿಗೆ ಒದಗಿಸಿದೆ. ಮಾರ್ಚ್ 2ರಂದು ಹೈದರಾಬಾದ್‌ನಲ್ಲಿ ನಡೆಯಲಿರುವ ಪಂದ್ಯವನ್ನು ಸ್ಥಳಾಂತರಿಸಲು ಯಾವುದೇ ಕಾರಣಗಳಿಲ್ಲ ಎಂದು ಬಿಸಿಸಿಐ ಹಿರಿಯ ಅಧಿಕಾರಿ ರಾಜೀವ್ ಶುಕ್ಲಾ ತಿಳಿಸಿದ್ದಾರೆ.  'ಬಿಸಿಸಿಐ ಅಧ್ಯಕ್ಷರು ನನ್ನೊಂದಿಗೆ ಮಾತನಾಡಿದ ನಂತರ, ಹೈದರಾಬಾದ್‌ನಲ್ಲಿರುವ ಕೇಂದ್ರ ಗೃಹ ಕಾರ್ಯದರ್ಶಿಯೊಂದಿಗೆ ನಾನು ಮಾತನಾಡಿದ್ದೇನೆ. ಅಲ್ಲದೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಮತ್ತು ಅಲ್ಲಿನ ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೂ ಮಾತುಕತೆ ನಡೆಸಿದ್ದೇನೆ. ಆಟಗಾರರು ಮತ್ತು ಪ್ರೇಕ್ಷಕರಿಗೆ ತಕ್ಕ ಭದ್ರತೆಯನ್ನು ಒದಗಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ' ಎಂದು ಶುಕ್ಲಾ ಸುದ್ದಿಗಾರರಿಗೆ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.