
ನವದೆಹಲಿ: ಮಂಡಿ ನೋವಿನಿಂದ ಬಳಲುತ್ತಿರುವ ಡೆಲ್ಲಿ ಡೇರ್‌ಡೆವಿಲ್ಸ್ ತಂಡದ ಮೊಹಮ್ಮದ್ ಶಮಿ ಈ ಬಾರಿಯ ಐಪಿಎಲ್‌ನಿಂದ ಹೊರಬಿದ್ದಿರುವ ವಿಷಯವನ್ನು ಗುರುವಾರ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಖಚಿತ ಪಡಿಸಿದೆ.
‘ಮೊಹಮ್ಮದ್ ಶಮಿ ಮಂಡಿ ನೋವಿನಿಂದ ಬಳಲುತ್ತಿದ್ದು ಅವರು ಗುಣಮುಖರಾಗಲು ಸಾಕಷ್ಟು ಸಮಯ ಹಿಡಿಯಲಿದೆ. ಅವರ ಬದಲಿಗೆ ಮತ್ತೊಬ್ಬ ಆಟಗಾರನನ್ನು ಸೇರಿಸಿಕೊಳ್ಳಲು ಡೆಲ್ಲಿ ಡೇರ್‌ಡೆವಿಲ್ಸ್ ತಂಡಕ್ಕೆ ಅವಕಾಶ ನೀಡಲಾಗಿದೆ’ ಎಂದು ಐಪಿಎಲ್ ತಾಂತ್ರಿಕ ಸಮಿತಿ ಹೇಳಿದೆ.
ವಿಶ್ವಕಪ್ ಕ್ರಿಕೆಟ್ ಪಂದ್ಯದ ವೇಳೆ ಶಮಿ ಅವರಿಗೆ ಮಂಡಿ ನೋವು ಕಾಣಿಸಿಕೊಂಡಿತ್ತು. ಅವರಿನ್ನೂ ಗುಣಮುಖರಾಗದ ಕಾರಣ 8ನೇ ಆವೃತ್ತಿಯ ಐಪಿಎಲ್ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ.
ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಶಮಿ 18 ವಿಕೆಟ್ ಕಬಳಿಸಿ ಉತ್ತಮ ಪ್ರದರ್ಶನ ನೀಡಿದ್ದರು. ಶಮಿ ಅವರು ಮುಂಬರುವ ಬಾಂಗ್ಲಾದೇಶ ಪ್ರವಾಸದ ವೇಳೆಗೆ ಪರಿಪೂರ್ಣವಾಗಿ ಗುಣಮುಖರಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
Advertisement