ಇಂದಿನಿಂದ ಕರ್ನಾಟಕ ಮಿನಿ ಒಲಿಂಪಿಕ್ಸ್: 4,000ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗಿ

ಮಿನಿ ಒಲಿಂಪಿಕ್ಸ್‌ನ ಮೊದಲ ಆವೃತ್ತಿಯನ್ನು 2020 ರಲ್ಲಿ ನಡೆಸಲಾಗಿದ್ದು, ದೇಶದಲ್ಲೇ ಮಿನಿ ಒಲಿಂಪಿಕ್ಸ್‌ ಆರಂಭಿಸಿದ ಮೊದಲ ರಾಜ್ಯ ಕರ್ನಾಟಕವಾಗಿದೆ.
 ಕೆಒಎ ಅಧ್ಯಕ್ಷ ಡಾ.ಕೆ.ಗೋವಿಂದರಾಜ್
ಕೆಒಎ ಅಧ್ಯಕ್ಷ ಡಾ.ಕೆ.ಗೋವಿಂದರಾಜ್
Updated on

ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆ (ಕೆಒಎ) ನವೆಂಬರ್ 14ರಿಂದ 20ರವರೆಗೆ ನಗರದ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಮೂರನೇ ಆವೃತ್ತಿಯ ಮಿನಿ ಒಲಿಂಪಿಕ್ಸ್ ಆಯೋಜಿಸಲು ಸಜ್ಜಾಗಿದೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ​​ಅಧ್ಯಕ್ಷ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂಎಲ್‌ಸಿ ಡಾ.ಕೆ.ಗೋವಿಂದರಾಜ್ ಅವರು, ಮಿನಿ ಒಲಿಂಪಿಕ್ಸ್‌ನ ಮೊದಲ ಆವೃತ್ತಿಯನ್ನು 2020 ರಲ್ಲಿ ನಡೆಸಲಾಗಿದ್ದು, ದೇಶದಲ್ಲೇ ಮಿನಿ ಒಲಿಂಪಿಕ್ಸ್‌ ಆರಂಭಿಸಿದ ಮೊದಲ ರಾಜ್ಯ ಕರ್ನಾಟಕವಾಗಿದೆ. ನಮ್ಮಲ್ಲಿರುವ ಪ್ರತಿಭೆಗಳಿಗೆ ವೇದಿಕೆ ಒದಗಿಸಿ, ಅವರನ್ನು ಗುರುತಿಸುವ ಮೂಲಕ ರಾಜ್ಯ, ರಾಷ್ಟ್ರ ಮಟ್ಟದ ಸ್ಪರ್ಧೆಗಳಿಗೆ ತಯಾರು ಮಾಡುವ ಕೆಲಸವನ್ನು ಮಾಡಲಾಗುತ್ತಿದೆ. ರಾಜ್ಯದ ಹೆಚ್ಚೆಚ್ಚು ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವಂತೆ ಆಗಬೇಕು ಎನ್ನುವುದೇ ಈ ಕ್ರೀಡಾಕೂಟದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

ಮೂರನೇ ಆವೃತ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತರ ಗಣ್ಯರು ಮತ್ತು ಮಂತ್ರಿಗಳೊಂದಿಗೆ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಉದ್ಘಾಟಿಸಲಿದ್ದಾರೆ. ಟೂರ್ನಿಯಲ್ಲಿ ರಾಜ್ಯದ 14 ವಯೋಮಿತಿಯ 4 ಸಾವಿರಕ್ಕೂ ಅಧಿಕ ಮಕ್ಕಳು ಭಾಗವಹಿಸಲಿದ್ದು, ಗುಂಪು ಸಹಿತ 24 ವಿವಿಧ ಕ್ರೀಡೆಗಳು ಮತ್ತು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿವೆ ಎಂದು ತಿಳಿಸಿದರು.

 ಕೆಒಎ ಅಧ್ಯಕ್ಷ ಡಾ.ಕೆ.ಗೋವಿಂದರಾಜ್
ಕಂಬಳ ನಮ್ಮ ಕ್ರೀಡೆ, ಅಗತ್ಯ ಬಿದ್ದರೆ ಕಾನೂನು ರಚನೆಗೂ ಸಿದ್ಧ: ಸಿಎಂ ಸಿದ್ದರಾಮಯ್ಯ

ಗ್ರಾಮೀಣ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವುದು, ಯುವಕರು ಕ್ರೀಡೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸುವುದು ಹಾಗೂ ಏಷ್ಯನ್ ಗೇಮ್ಸ್, ಕಾಮನ್ ವೆಲ್ತ್ ಗೇಮ್ಸ್. ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವಂತೆ ಪ್ರೇರೇಪಿಸುವುದು ಮಿನಿ ಒಲಿಂಪಿಕ್ಸ್‌ನ ಮುಖ್ಯ ಉದ್ದೇಶವಾಗಿದೆ. ಗುರುವಾರ ಸಂಜೆ 5 ಗಂಟೆಗೆ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದ್ದು, ನ.20ರಂದು ಕ್ರೀಡಾಕೂಟ ಮುಕ್ತಾಯಗೊಳ್ಳಲಿದೆ ಎಂದು ಮಾಹಿತಿ ನೀಡಿದರು,

ಕ್ರೀಡಾಕೂಟಕ್ಕೆ ರಾಜ್ಯ ಸರ್ಕಾರ 3 ಕೋಟಿ ರೂ.ಗಳನ್ನು ಮಂಜೂರು ಮಾಡಿದ್ದು, ಕ್ರೀಡಾ ಇಲಾಖೆ ಕೂಡ ಎಲ್ಲ ನೆರವು ನೀಡುತ್ತಿದೆ. ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಲಾಗುವುದು.

ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ತೋರುವ ಅಗ್ರ-15 ಕ್ರೀಡಾಪಟುಗಳಿಗೆ ಕಂಠೀರವ ಕ್ರೀಡಾಂಗಣದಲ್ಲಿರುವ ಕ್ರೀಡಾ ವಿಜ್ಞಾನ ಕೇಂದ್ರದ ವತಿಯಿಂದ ತಲಾ 5000 ರು. ಬಹುಮಾನ ನೀಡಲಾಗುವುದು. ಅಲ್ಲದೇ, ಉತ್ತಮ ಕೌಶಲ್ಯಗಳನ್ನು ಪ್ರದರ್ಶಿಸುವ 200 ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಅವರ ದೈಹಿಕ ಹಾಗೂ ಮಾನಸಿಕ ಬಲ ಹೆಚ್ಚಲು ತರಬೇತಿ ನೀಡಲಾಗುವುದು.

ಈ ಶಿಬಿರದಲ್ಲಿ ಗಮನ ಸೆಳೆಯುವ ಅಗ್ರ-50 ಮಕ್ಕಳನ್ನು ಆಯ್ಕೆ ಮಾಡಿ ಅವರಿಗೆ 1 ತಿಂಗಳು ವಿಶೇಷ ತರಬೇತಿ ನೀಡಲು ನಿರ್ಧರಿಸಲಾಗಿದೆ. ಈ ತರಬೇತಿ ವೇಳೆ ಮಕ್ಕಳ ದೈಹಿಕ, ಮಾನಸಿಕ ಸಾಮರ್ಥ್ಯದ ಮೌಲ್ಯಮಾಪನ ನಡೆಸಿ, ಆ ವಿವರಗಳನ್ನು ಆ ಮಕ್ಕಳು ಪ್ರತಿನಿಧಿಸುವ ಕ್ರೀಡಾ ಫೆಡರೇಶನ್‌ಗಳಿಗೆ ನೀಡಲಾಗುತ್ತದೆ. ಆ ಮೂಲಕ ಅವರನ್ನು ಉತ್ತಮ ಕ್ರೀಡಾಪಟುಗಳನ್ನಾಗಿ ರೂಪಿಸಲು ನೆರವು ಒದಗಿಸಲಾಗುತ್ತದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com