ಪ್ರಧಾನ ಸುದ್ದಿ

ಮಳೆಯಾಗದ ಜಿಲ್ಲೆಗಳು ಬರಪೀಡಿತ: ಸಿದ್ದರಾಮಯ್ಯ

ಮಳೆಯಾಗದ ಜಿಲ್ಲೆಗಳು ಬರಪೀಡಿತ: ಸಿದ್ದರಾಮಯ್ಯ
Published On :

ಬೆಂಗಳೂರು: ಮಳೆ ಕೊರತೆಯಿಂದಾಗಿ ಕೃಷಿ ಚಟುವಟಿಕೆ ಕುಂಠಿತವಾಗಿರುವ  ಜಿಲ್ಲೆಗಳನ್ನು ಬರಪೀಡಿತ ಎಂದು ಪರಿಗಣಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರ ಜತೆಗಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಈ ಆದೇಶ ನೀಡಿದ್ದಾರೆ. ರಾಜ್ಯದಲ್ಲಿ ಕೆಲವು ಜಿಲ್ಲೆಗಳು ಪ್ರವಾಹ ಪೀಡಿತವಾಗಿದ್ದರೆ ಇನ್ನು ಕೆಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಹೀಗಾಗಿ ಬರ ಹಾಗೂ ಪ್ರವಾಹ ಸಮಸ್ಯೆಯನ್ನು ಸಮಾನವಾಗಿ ಪರಿಗಣಿಸುವಂತೆ ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕೋಲಾರ, ಚಿಕ್ಕಬಳ್ಳಾಪುರ, ಯಾದಗಿರಿ, ಧಾರವಾಡ, ರಾಮನಗರ, ತುಮಕೂರು, ಮಂಡ್ಯ ಹಾಗೂ ಗದಗ ಜಿಲ್ಲೆಯಲ್ಲಿ ಮುಂಗಾರು ವೈಫಲ್ಯ ಕಂಡು ಬಂದಿದೆ. ಇಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಇದರಿಂದ ಬಿತ್ತನೆ ಸಾಧ್ಯವಾಗಿಲ್ಲ. ಇನ್ನು ಕೆಲವೆಡೆ ಬಿತ್ತನೆ ಕಾರ್ಯ ನಡೆದಿದ್ದರೂ ಸಕಾಲದಲ್ಲಿ ಮಳೆ ಬಾರದೇ ಪೈರುಗಳು ಒಣಗಿ ಹೋಗಿದೆ. ಇಂಥ ಕಡೆಗಳಲ್ಲಿ ಜನರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಿದೆ. ಇಂಥ ಪ್ರದೇಶಗಳ ಕಡೆಗೆ ಜಿಲ್ಲಾಧಿಕಾರಿಗಳು ವಿಶೇಷ ಗಮನ ನೀಡಬೇಕು ಎಂದು ಸೂಚನೆ ನೀಡಿದರು. ಅದೇ ರೀತಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಶೇ. 20ಕ್ಕಿಂತ ಹೆಚ್ಚು ಮಳೆಯಾದ ಪ್ರದೇಶಗಳನ್ನು ಅತಿವೃಷ್ಟಿ ಪೀಡಿತ ಎಂದು ಘೋಷಿಸಬಹುದು.        


ಚಿಕ್ಕಮಗಳೂರಿನಲ್ಲಿ ಶೇ.56, ಹಾಸನ ಶೇ.50, ಶಿವಮೊಗ್ಗ ಶೇ.35, ಕೊಡಗು ಶೇ.37 ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.29 ರಷ್ಟು ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಭಾಗಗಳಲ್ಲಿ ರಕ್ಷಣಾ ಹಾಗೂ ಪರಿಹಾರ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡುವಂತೆ ಸೂಚಿಸಿದರು.
ಬಿಪಿಎಲ್ ಕಾರ್ಡ್‌ಗೆ ಕ್ರಮ: ಅದೇ ರೀತಿ ಜುಲೈ 10ರಿಂದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಅನ್ನಭಾಗ್ಯ ಆರಂಭಗೊಂಡಿದೆ. ಇದನ್ನು ಅತ್ಯಂತ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಅನೇಕ ಕಡೆಗಳಲ್ಲಿ ಬಡವರಿಗೆ ಇನ್ನೂ ಬಿಪಿಎಲ್ ಕಾರ್ಡ್ ಸಿಕ್ಕಿಲ್ಲ. 20 ಲಕ್ಷ ಮಂದಿ ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ. ಅರ್ಹರು ಯಾವುದೇ ಕಾರಣಕ್ಕೂ ಈ ಯೋಜನೆಯಿಂದ ಹೊರಗೆ ಉಳಿಯಕೂಡದು. ಜತೆಗೆ ಅಕ್ಕಿ ನಿಜವಾದ ಫಲಾನುಭವಿಗಳಿಗೆ ದೊರೆಯುತ್ತಿದೆಯೇ? ಎಂಬ ಮಾಹಿತಿಯನ್ನು ಜಿಲ್ಲಾಧಿಕಾರಿಗಳು ಸಂಗ್ರಹಿಸಬೇಕು ಎಂದು ಕಿವಿ ಮಾತು ಹೇಳಿದರು.
ಆಗಸ್ಟ್ 1ರಿಂದ ಕ್ಷೀರಭಾಗ್ಯ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಬೆಂಗಳೂರು ಹಾಗೂ ಹುಬ್ಬಳ್ಳಿ-ಧಾರವಾಡ ನಗರವನ್ನು ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲಿ ಅಂಗನವಾಡಿ ಹಾಗೂ 1ರಿಂದ 10ನೇ ತರಗತಿ ಮಕ್ಕಳಿಗೆ ಹಾಲು ಪೂರೈಕೆ ಮಾಡಲಾಗುತ್ತಿದೆ. ಇದು ಸರ್ಕಾರದ ಅತ್ಯಂತ ಮಹತ್ವದ ಯೋಜನೆಯಾಗಿದ್ದು, ರೈತರಿಂದ ನೀಡುವ ಸಬ್ಸಿಡಿಗೆ ರು. 818 ಕೋಟಿ ಹಾಗೂ ಮಕ್ಕಳಿಗೆ ಹಾಲು ಪೂರೈಕೆ ಮಾಡುವುದಕ್ಕೆ ರು. 400 ಕೋಟಿ ವೆಚ್ಚವಾಗುತ್ತಿದೆ. ಈ ಯೋಜನೆಯನ್ನು ಯಶಸ್ವಿಗೊಳಿಸುವ ಜವಾಬ್ದಾರಿ ಅಧಿಕಾರಿಗಳ ಮೇಲೆ ಇದೆ ಎಂದರು.
ಅದಾಲತ್: ಸಾಮಾಜಿಕ ಭದ್ರತಾ ಯೋಜನೆಗಳಾದ ವಿಧವಾ ವೇತನ, ವೃದ್ದಾಪ್ಯ ವೇತನ, ಅಂಗವಿಕಲರ ಪಿಂಚಣಿ, ಸಂಧ್ಯಾ ಸುರಕ್ಷಾ ಹಾಗೂ ಭಾಗ್ಯಲಕ್ಷ್ಮಿ ಯೋಜನೆಗಳು ತಮ್ಮನ್ನು ತಲುಪಿಲ್ಲ ಎಂದು ಗ್ರಾಮೀಣ ಪ್ರದೇಶದ ಜನರು ಅಳಲು ತೋಡಿಕೊಂಡಿದ್ದಾರೆ.
ಈ ಸಮಸ್ಯೆಗೆ ಇನ್ನು ಪರಿಹಾರ ಲಭಿಸಿಲ್ಲ. ಹೀಗಾಗಿ ಹೋಬಳಿ ಮಟ್ಟದಲ್ಲಿ ಕಡ್ಡಾಯವಾಗಿ ಸಹಾಯಕ ಆಯುಕ್ತರ ನೇತೃತ್ವದಲ್ಲಿ ಅದಾಲತ್ ನಡೆಸಬೇಕು. ಜಿಲ್ಲಾಧಿಕಾರಿಗಳು ಇದರ ಮೇಲ್ವಿಚಾರಣೆ ನಡೆಸಬೇಕು ಎಂದು ಎಚ್ಚರಿಕೆ ನೀಡಿದರು.


ಕೋಮು ಗಲಭೆಯಾದ್ರೆ ಭೇಟಿ ನೀಡಿ
ಇನ್ನು ಮುಂದೆ ಕೋಮು ಗಲಭೆ ಸಂಭವಿಸಿದಾಗ ಆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಗಳಿಗೆ ಆದೇಶ ನೀಡಿದ್ದಾರೆ. ಕೆಲವೊಮ್ಮೆ ಸಮಾಜದಲ್ಲಿ ನಡೆಯುವ ಇಂಥ ಅಹಿತಕರ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡುತ್ತಾರೆ. ಆದರೆ ಜಿಲ್ಲಾಧಿಕಾರಿಗಳು ಬಂದರೆ ಅದರ ಪರಿಣಾಮ ಬೇರೆ ರೀತಿ ಇರುತ್ತದೆ. ಇನ್ನು ಮುಂದೆ ಕೋಮು ಗಲಭೆ ನಡೆಯುವ ಸ್ಥಳಕ್ಕೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಭೇಟಿ ನೀಡಲೇಬೇಕು ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.