ಲೋಕಾಯುಕ್ತದಲ್ಲಿ 'ಭಾಸ್ಕರ' ಬೆಳಗು
ಕ.ಪ್ರ.ವಾರ್ತೆ ಬೆಂಗಳೂರು ಆ. 13
ಲೋಕಾಯುಕ್ತರಾಗಿ ಅಧಿಕಾರ ವಹಿಸಿಕೊಂಡ ಬಳಿಕ ತಮ್ಮ ಕಾರ್ಯಶೈಲಿ ಬಗ್ಗೆ ಗುಟ್ಟು ಬಿಟ್ಟು ಕೊಡದ ಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರ್ರಾವ್ ಅವರು, 6 ತಿಂಗಳ ಅವಧಿಯಲ್ಲಿ ಸದ್ದಿಲ್ಲದೆ ಸಾವಿರಾರು ಪ್ರಕರಣಗಳನ್ನು ವಿಲೇವಾರಿ ಮಾಡಿದ್ದಾರೆ.
ನ್ಯಾ. ಸಂತೋಷ ಹೆಗ್ಡೆ ಅವರು ಲೋಕಾಯುಕ್ತ ಸ್ಥಾನದಿಂದ ನಿವೃತ್ತಿ ಹೊಂದಿದ ಬಳಿಕ ಹಲವು ವರ್ಷಗಳ ಕಾಲ ಲೋಕಾಯುಕ್ತ ಹುದ್ದೆ ಖಾಲಿ ಇದ್ದ ಹಿನ್ನೆಲೆಯಲ್ಲಿ ಸಾವಿರಾರು ಪ್ರಕರಣಗಳು ವಿಲೇವಾರಿಯಾಗದೆ ಬಾಕಿ ಉಳಿದಿದ್ದವು. ಈ ಹಿನ್ನೆಲೆಯಲ್ಲಿ ನ್ಯಾ. ಬಾಸ್ಕರ್ರಾವ್ ಅವರ ಕಾರ್ಯಶೈಲಿಯ ಬಗ್ಗೆ ಬಾರಿ ಕೂತೂಹಲವಿತ್ತು. ಆದರೆ ಜನರ ನಿರೀಕ್ಷೆಗಳನ್ನು ಹುಸಿಗೊಳಿಸದ ನ್ಯಾ. ಭಾಸ್ಕರ್ರಾವ್ ಅವರು ಸಾರ್ವಜನಿಕರ ದೂರುಗಳ ವಿಲೇವಾರಿಗೆ ವೇಗ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಲವು ವರ್ಷಗಳಿಂದ ಬಾಕಿ ಉಳಿದಿದ್ದ 4608 ಪ್ರಕರಣಗಳ ಪೈಕಿ 2108 ಪ್ರಕರಣಗಳನ್ನು ವಿಲೇವಾರಿ ಮಾಡಿ ಪರಿಹಾರ ಸೂಚಿಸಿದ್ದಾರೆ.
ನ್ಯಾ. ಭಾಸ್ಕರ್ರಾವ್ ಅವರು ಫೆ.14 ರಂದು ಅಧಿಕಾರ ವಹಿಸಿಕೊಂಡ ಬಳಿಕ 492 ದೂರುಗಳು ಲೋಕಾಯುಕ್ತದಲ್ಲಿ ದಾಖಲಾಗಿವೆ. 6 ತಿಂಗಳ ಅವಧಿಯಲ್ಲಿ ದಾಖಲಾದ ಪ್ರಕರಣಗಳು ಹಾಗೂ ಈ ಹಿಂದೆ ದಾಖಲಾದ ಪ್ರಕರಣಗಳು ಸೇರಿ ಒಟ್ಟು 2108 ಪ್ರಕರಣಗಳನ್ನು ವಿಲೇವಾರಿ ಮಾಡಿದ್ದಾರೆ. ಇನ್ನು 2991 ಪ್ರಕರಣಗಳು ಬಾಕಿ ಉಳಿದಿದ್ದು ಅವುಗಳನ್ನು ಶೀಘ್ರ ವಿಲೇವಾರಿಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
2108 ದೂರುಗಳ ಪೈಕಿ 322 ದೂರುಗಳಿಗೆ ಪರಿಹಾರ ಒದಗಿಸಲಾಗಿದೆ. 11 ದೂರುಗಳಲ್ಲಿ ಸಂಬಂಧಪಟ್ಟ ಪ್ರಾಧಿಕಾರ ಇಲಾಖೆಗೆ ಸೂಚನೆ ನೀಡಿ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.
27 ದೂರುಗಳಲ್ಲಿ ದೂರುದಾರರಿಗೆ ಕಿರುಕುಳ ನೀಡಿರುವ ಸರ್ಕಾರಿ ನೌಕರರು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡಿದ್ದಾರೆ.
ದೂರುದಾರರ ಸಮಸ್ಯೆಗಳನ್ನು ಬಗೆಹರಿಸಿ ಕ್ರಮ ಕೈಗೊಳ್ಳಬೇಕು ಎನ್ನುವ ಸೂಚನೆ ಹಿನ್ನೆಲೆಯಲ್ಲಿ 47 ಪ್ರಕರಣಗಳಲ್ಲಿ ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರಗಳು ಆರೋಪಿತ ನೌಕರರು ಹಾಗೂ ಸಿಬ್ಬಂದಿಗಳ ವಿರುದ್ಧ ಕ್ರಮವನ್ನು ಕೈಗೊಂಡಿದೆ. 8 ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣಗಳನ್ನು ಲೋಕಾಯುಕ್ತರ ವಿಲೇವಾರಿ ಮಾಡಿದ್ದಾರೆ.
ಇನ್ನುಳಿದಿರುವ ಪ್ರಕರಣಗಳನ್ನು ಶೀಘ್ರದಲ್ಲಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಮೂಲಕ ಜನರ ದೂರುಗಳಿಗೆ ಶೀಘ್ರವಾಗಿ ಸ್ಪಂದಿಸಲು ಲೋಕಾಯುಕ್ತರ ಮುಂದಾಗಿದ್ದಾರೆ. ತಮ್ಮ 6 ತಿಂಗಳ ಕಾರ್ಯ ನಿರ್ವಹಣೆ ಅವಧಿಯಲ್ಲಿ ಚಿಕ್ಕಬಳ್ಳಾಪುರ, ಬೀದರ್, ಗುಲ್ಬರ್ಗ, ಕೋಲಾರ ಜಿಲ್ಲೆಗಳಿಗೆ ಅವರು ಭೇಟಿ ನೀಡಿದ್ದಾರೆ. ಭೇಟಿ ನೀಡಿದ ನಾಲ್ಕು ಜಿಲ್ಲೆಗಳಲ್ಲಿನ 450 ದೂರುಗಳನ್ನು ವಿಲೇವಾರಿ ಮಾಡಲಾಗಿದೆ. ಭೇಟಿ ವೇಳೆ ದೂರುಗಳಿಗೆ ಸಂಬಂಧಪಟ್ಟಂತೆ ನಿರ್ಧಾರಿತ ಸಮಯದಲ್ಲಿ ದೂರುಗಳನ್ನು ಪರಿಶೀಲಿಸಿ, ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಸೂಚಿಸಲಾಗಿದೆ. ಲೋಕಾಯುಕ್ತದಲ್ಲಿ ದೂರುಗಳಿಗೆ ಸಂಬಂಧಪಟ್ಟ ಇಲಾಖೆಗಳು ಕಾರ್ಯದರ್ಶಿಗಳು, ನಿರ್ದೇಶಕರು, ಹಿರಿಯ ಅಧಿಕಾರಿಗಳು ನಿರ್ಧಾರಿತ ಸಮಯದಲ್ಲಿ ಕ್ರಮ ಕೈಗೊಳ್ಳುವ ಭರವೆಸೆ ನೀಡುವ ಪದ್ದತಿಯನ್ನು ಮೊದಲ ಭಾರಿಗೆ ಲೋಕಾಯುಕ್ತದಲ್ಲಿ ಜಾರಿಗೆ ತರಲಾಗಿದೆ.
ಉಪ ಆಯುಕ್ತರು, ಪೊಲೀಸ್ ಅಧೀಕ್ಷಕರು, ಕಾರ್ಯನಿರ್ವಾಹಕ ಅಧಿಕಾರಿಗಳೇ ಎದುರು ದೂರುದಾರರು ಲೋಕಾಯುಕ್ತರ ಎದುರೇ ದೂರುಗಳನ್ನು ಹೇಳಿಕೊಳ್ಳಲು ಅವಕಾಶ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

